ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಇಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಕಳೆದ ಲೋಕಸಭಾ ಚುನಾವಣೆಗೆ ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿ ಮೈದಾನದಲ್ಲಿ ಬಿಜೆಪಿ ಚುನಾವಣಾ ಸಭೆ ಉದ್ದೇಶಿಸಿ ಅವರು ಮಾತನಾಡಿದ್ದರು. ಎರಡನೇ ಬಾರಿ, ಕಳೆದ ವಿಧಾನಸಭಾ ಚುನಾವಣೆ ಸಮಯದಲ್ಲಿ ಶಿವಮೊಗ್ಗ ತಾಲೂಕು ಆಯನೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು.
ಅಲ್ಲಮಪ್ರಭು ಮೈದಾನದಲ್ಲಿ ಪ್ರಚಾರ ಸಭೆ: ಮೂರನೇ ಬಾರಿ ಇದೀಗ ಜಿಲ್ಲೆಗೆ ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಮೋದಿ ಆಗಮಿಸುತ್ತಿದ್ದಾರೆ. ಅಲ್ಲಮಪ್ರಭು ಮೈದಾನದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ. ಶಿವಮೊಗ್ಗ, ಉಡುಪಿ- ಚಿಕ್ಕಮಗಳೂರು, ದಾವಣಗೆರೆ ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗುವರು. ಸುಮಾರು 2 ಲಕ್ಷ ಜನ ಸೇರುವ ಸಾಧ್ಯತೆ ಇದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಶಿವಮೊಗ್ಗ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಸೇರಿದಂತೆ ಬಿಜೆಪಿಯ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.
ಇಂದು ಪ್ರಧಾನಿ ಮೋದಿ ಶಿವಮೊಗ್ಗ ನಗರಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸಲಿದ್ದಾರೆ. ಬಳಿಕ ಸುಮಾರು 14 ಕಿ.ಮೀ ದೂರ ಎಸ್ಪಿಜಿ ಭದ್ರತೆಯಲ್ಲಿ ಕಾರಿನಲ್ಲಿ ಸಂಚಾರ ನಡೆಸುವರು. ಇದರಿಂದಾಗಿ ವಿಮಾನ ನಿಲ್ದಾಣದ ಎನ್.ಆರ್.ಪುರ ರಸ್ತೆಯಿಂದ ಶಿವಮೊಗ್ಗದ ಬಿ.ಹೆಚ್.ರಸ್ತೆ, ನೆಹರು ರಸ್ತೆ, ಬೈಪಾಸ್ ರಸ್ತೆ ಸರ್.ಎಂ.ವಿಶ್ವೇಶ್ವರಯ್ಯ ರಸ್ತೆ, ಸಂಗೊಳ್ಳಿ ರಾಯಣ್ಣ ರಸ್ತೆ ಸೇರಿದಂತೆ ಅನೇಕ ರಸ್ತೆಗಳು ಬಂದ್ ಆಗಲಿವೆ. ಜನತೆ ಟ್ರಾಫಿಕ್ ಸಮಸ್ಯೆ ಎದುರಿಸುವ ಸಾಧ್ಯತೆಯಿದೆ.
ಕಳೆದ ವರ್ಷ ವಿಮಾನ ನಿಲ್ದಾಣ ಉದ್ಘಾಟಿಸಿದ್ದ ಮೋದಿ: 2023ರ ಫೆಬ್ರವರಿ 28ರಂದು ಶಿವಮೊಗ್ಗ ಹೊರವಲಯದ ಸೋಗಾನೆಯಲ್ಲಿ ನೂತನ ವಿಮಾನ ನಿಲ್ದಾಣವನ್ನು ಮೋದಿ ಲೋಕಾರ್ಪಣೆ ಮಾಡಿದ್ದರು.
ಇದನ್ನೂ ಓದಿ: ನಿಮ್ಮ ಕ್ಷೇತ್ರದ ಅಭ್ಯರ್ಥಿಗೆ ಕ್ರಿಮಿನಲ್ ಹಿನ್ನೆಲೆ ಇದೆಯೇ?, ಆಸ್ತಿ ಎಷ್ಟಿದೆ? ಹೀಗೆ ತಿಳಿಯಿರಿ