ಬೆಂಗಳೂರು : ಲೋಕಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು ಹತ್ತಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿರುವ ಘಟಾನುಘಟಿ ಅಭ್ಯರ್ಥಿಗಳು 11.45 ಗಂಟೆಯ ತನಕ ನಡೆದ ಮತ ಎಣಿಕೆಯಲ್ಲಿ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದಾರೆ.
ದೇಶದ ಗಮನ ಸೆಳೆದಿರುವ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಪ್ರಸಿದ್ಧ ಹೃದಯ ರೋಗ ತಜ್ಞ ಡಾ. ಸಿ ಎನ್ ಮಂಜುನಾಥ್ ಅವರು ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ವಿರುದ್ಧ ಸುಮಾರು 1 ಲಕ್ಷ ಮತಗಳ ಅಂತರಿಂದ ಮುನ್ನಡೆಯಲ್ಲಿ ಇದ್ದಾರೆ. ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರ ವಿರುದ್ಧ 1 ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಉಡುಪಿ ಚಿಕ್ಕಮಗಳೂರು ಕ್ಕ್ಷೆತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿಯವರು ಒಂದು ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ.
ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆ ಅವರು ಕಾಂಗ್ರೆಸ್ನ ಪ್ರೊ ರಾಜೀವ್ ಗೌಡ ವಿರುದ್ಧ 1 ಲಕ್ಷಕ್ಕೂ ಅಧಿಕ ಮತಗಳಿಂದ ಮುಂದಿದ್ದಾರೆ.
ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಪ್ರತಿಸ್ಪರ್ದಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ವಿರುದ್ಧ 60 ಸಾವಿರ ಮತಗಳು, ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ 60 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ.
ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ವಿರುದ್ದ 90 ಸಾವಿರ ಮತಗಳ ಅಂತರದಿಂದ ಮುಂದೆ ಇದ್ದಾರೆ.
ಉಡುಪಿ - ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿಧಾನ ಪರಿಷತ್ತಿನ ಪ್ರತಿ ಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ 1 ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ. ಉತ್ತರ ಕನ್ನಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ, ಧಾರವಾಡ ಕ್ಷೇತ್ರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು, ತುಮಕೂರಿನಲ್ಲಿ ಮಾಜಿ ಸಚಿವ ವಿ ಸೋಮಣ್ಣ, ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡು ಮತ ಎಣಿಕೆಯಲ್ಲಿ ಸಾಗುತ್ತಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳಾದ ಸುನೀಲ್ ಭೋಸ್ ಚಾಮರಾಜನಗರ ಕ್ಷೆತ್ರದಲ್ಲಿ ಪ್ರಾರಂಭದಿಂದಲೂ ಮುನ್ನಡೆ ಕಾಯ್ದುಕೊಂಡು ಬರುತ್ತಿದ್ದಾರೆ. ಚಿಕ್ಕೋಡಿ ಕ್ಷೇತ್ರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕ ಜಾರಕಿಹೊಳಿ, ಬೀದರ್ ಕ್ಷೇತ್ರದಲ್ಲಿ ಸಚಿವ ಈಶ್ವರ ಖಂಡ್ರೆ ಪುತ್ರ ಸಾಗರ್ ಖಂಡ್ರೆ, ಬಳ್ಳಾರಿ ಕ್ಷೇತ್ರದಲ್ಲಿ ಶಾಸಕ ತುಕರಾಂ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಇದನ್ನೂ ಓದಿ : ಬೆಳಗಾವಿ ಲೋಕಸಭಾ ಕ್ಷೇತ್ರ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮುನ್ನಡೆ - Lok Sabha Election Results 2024