ರಾಯಚೂರು: ಚಾಕೊಲೇಟ್ ಕೊಡಿಸುವುದಾಗಿ ಆಮಿಷವೊಡ್ಡಿ 11 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪ ಎದುರಿಸುತ್ತಿರುವ ವ್ಯಕ್ತಿಯೊಬ್ಬನನ್ನು ಹಟ್ಟಿ ಪೊಲೀಸರು ಬಂಧಿಸಿದ್ದಾರೆ. 43 ವರ್ಷದ ಚಂದ್ರಶೇಖರ್ ಬಂಧಿತ ವ್ಯಕ್ತಿ. ಬಂಧಿತ ವ್ಯಕ್ತಿಯು ಬಾಲಕಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿರುವುದಾಗಿ ಹಟ್ಟಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲಾಗಿದೆ.
ಶಾಲೆಗೆ ಹೋಗಿದ್ದ ಬಾಲಕಿಯನ್ನು ಊಟದ ಬಿಡುವಿನ ವೇಳೆ ಚಾಕೊಲೇಟ್ ಕೊಡಿಸುವುದಾಗಿ ಚಂದ್ರಶೇಖರ್ ಆಮಿಷವೊಡ್ಡಿ, ತನ್ನ ಮನೆಗೆ ಕರೆದುಕೊಂಡು ಹೋಗಿದ್ದ. ಇದನ್ನು ಕಂಡ ಸ್ಥಳೀಯರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆಗ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ವ್ಯಕ್ತಿಯಿಂದ ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಅಲ್ಲದೇ ಆರೋಪಿಯನ್ನು ಬಂಧಿಸಿ, ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಹಟ್ಟಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.