ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು.
ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್ನ ಐಜಿ ಅಮಿತ್ ಸಿಂಗ್, ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್, ಎಸ್.ಪಿ ಯತೀಶ್, ಡಿವೈಎಸ್ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ನೀವೆಲ್ಲಾ ಇದ್ದು ಯಾಕೆ ಹೀಗಾಯ್ತು? ಆರೋಪಿಗಳು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ ? ಎಷ್ಟು ಟೋಲ್ಗಳನ್ನು ದಾಟಿ ಹೋಗಿದ್ದಾರೆ. ನೀವು ಟೋಲ್ಗಳನ್ನು ಏಕೆ ಟೈಟ್ ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ವಕ್ತಾರರು ಮಾಹಿತಿ ನೀಡಿದ್ದಾರೆ.
ಸಹಕಾರಿ ಬ್ಯಾಂಕ್ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಐದಾರು ಮಂದಿ ಮಾತ್ರ ಬ್ಯಾಂಕ್ ಸಿಬ್ಬಂದಿ ಇದ್ದರು. ಆರೋಪಿಗಳು ಕನ್ನಡ ಮತ್ತು ಹಿಂದಿಯಲ್ಲಿ ಮಾತನಾಡಿರುವುದು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.
ಎಲ್ಲ ಟೋಲ್ಗಳಲ್ಲೂ ಬಿಗಿ ತಪಾಸಣೆ ನಡೆಸಬೇಕು. ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಕಾಬಂಧಿ ಹಾಕಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಪ್ಪಿಸಿ ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿರುವುದಾಗಿ ಮಾಧ್ಯಮ ವಕ್ತಾರರು ಮಾಹಿತಿ ನೀಡಿದ್ದಾರೆ.