ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 25ನೇ ಅವಧಿಯ ಮೇಯರ್ ಆಗಿ ಮನೋಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಆಗಿ ಭಾನುಮತಿ ಆಯ್ಕೆಗೊಂಡಿದ್ದಾರೆ.
ಮೇಯರ್ ಸ್ಥಾನಕ್ಕೆ ಪರಿಶಿಷ್ಟ ಜಾತಿ (ಎಸ್‌ಸಿ) ಹಾಗೂ ಉಪ ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗ 'ಎ' ನಿಗದಿಯಾಗಿತ್ತು. ಬಿಜೆಪಿ ಬಹುಮತ ಹೊಂದಿದ್ದರೂ ವಿರೋಧ ಪಕ್ಷ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದು ವಾಡಿಕೆ. ಆದರೆ ಕಾಂಗ್ರೆಸ್‌ನಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲು ಅಭ್ಯರ್ಥಿ ಇಲ್ಲದ ಹಿನ್ನೆಲೆಯಲ್ಲಿ ಮೇಯರ್ ಆಗಿ ಬಿಜೆಪಿಯ ಮನೋಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮನೋಜ್ ಕುಮಾರ್ 2 ಉಮೇದುವಾರಿಕೆ ಸಲ್ಲಿಸಿದ್ದು, ಎರಡೂ ಸ್ವೀಕೃತಗೊಂಡಿವೆ.
ಉಪಮೇಯರ್ ಸ್ಥಾನಕ್ಕೆ ಪೈಪೋಟಿ: ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಭಾನುಮತಿ ಹಾಗೂ ವನಿತಾ ಪ್ರಸಾದ್, ಕಾಂಗ್ರೆಸ್‌ನಿಂದ ಜೀನತ್ ಸಂಶುದ್ದೀನ್ ಸ್ಪರ್ಧಾ ಕಣದಲ್ಲಿದ್ದರು. ಭಾನುಮತಿ ಎರಡು ಉಮೇದುವಾರಿಕೆ ಸಲ್ಲಿಸಿದ್ದು, ಜಾತಿ ಪ್ರಮಾಣಪತ್ರ ಸಲ್ಲಿಸದ ಕಾರಣ ಒಂದು ನಾಮಪತ್ರ ತಿರಸ್ಕೃತಗೊಂಡಿತ್ತು.
ಚುನಾವಣಾ ಅಧಿಕಾರಿ ಉಮೇದುವಾರಿಕೆ ಹಿಂತೆಗೆದುಕೊಳ್ಳಲು 5ನಿಮಿಷ ಅವಕಾಶ ನೀಡಿದ್ದರು. ವನಿತಾ ಪ್ರಸಾದ್ ನಾಮಪತ್ರ ವಾಪಸ್ ಪಡೆದರು. ಈ ಹಿನ್ನೆಲೆಯಲ್ಲಿ ಜೀನತ್ ಸಂಶುದ್ದೀನ್ ಹಾಗೂ ಭಾನುಮತಿಯವರು ಚುನಾವಣಾ ಕಣದಲ್ಲಿದ್ದರು. ಜೀನತ್ ಸಂಶುದ್ದೀನ್ ಪರ 14 ಮತ ಬಿದ್ದರೆ, ಭಾನುಮತಿಯವರಿಗೆ 47 ಮತಗಳು ಚಲಾವಣೆ ಆದವು. ಈ ಮೂಲಕ ಭಾನುಮತಿ ಉಪಮೇಯರ್ ಆಗಿ ಆಯ್ಕೆಯಾದರು.
ಪಾಲಿಕೆಯ ಒಟ್ಟು 60 ಸ್ಥಾನಗಳಲ್ಲಿ ಬಿಜೆಪಿಯ 44 ಸದಸ್ಯರು, ಕಾಂಗ್ರೆಸ್ನ 14 ಸದಸ್ಯರು ಹಾಗೂ ಇಬ್ಬರು ಎಸ್‌ಡಿಪಿಐ ಸದಸ್ಯರು ಇದ್ದಾರೆ. ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಭರತ್ ಶೆಟ್ಟಿ ಮತ್ತು ವೇದವ್ಯಾಸ ಕಾಮತ್ ಸಹ ಮತದಾನ ಮಾಡಿದರು.
ಸ್ಥಾಯಿ ಸಮಿತಿ ಸದಸ್ಯರು ಅವಿರೋಧ ಆಯ್ಕೆ: ತೆರಿಗೆ ಹಣಕಾಸು ಸ್ಥಾಯಿ ಸಮಿತಿ, ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ, ಪಟ್ಟಣ ಯೋಜನೆ ಸುಧಾರಣೆ ಸ್ಥಾಯಿ ಸಮಿತಿ, ಲೆಕ್ಕಪತ್ರ ಸ್ಥಾಯಿ ಸಮಿತಿ ಸೇರಿದಂತೆ ನಾಲ್ಕು ಸ್ಥಾಯಿ ಸಮಿತಿಗಳಿಗೆ ತಲಾ 7 ಮಂದಿ ಸದಸ್ಯರಂತೆ ಅವಿರೋಧವಾಗಿ ಆಯ್ಕೆಯಾದರು. ಮೈಸೂರು ಪ್ರಾದೇಶಿಕ ಆಯುಕ್ತ ರಮೇಶ್ ಡಿ.ಎಸ್. ಚುನಾವಣಾ ಅಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆ ನಡೆಸಿದರು.
ನೂತನ ಮೇಯರ್, ಉಪ ಮೇಯರ್‌ಗಳಿಗೆ ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ. ವೈ.ಭರತ್ ಶೆಟ್ಟಿ, ಮನಪಾ ಸದಸ್ಯರು, ಅಭಿಮಾನಿಗಳು ಅಭಿನಂದಿಸಿದರು.
ಇದನ್ನೂ ಓದಿ: ಕರ್ನಾಟಕ ಸುವರ್ಣ ಸಂಭ್ರಮ - 50 ಸಮಾರೋಪ: ಕನ್ನಡ ಜನೋತ್ಸವವಾಗಿ ಆಚರಿಸಲು ಸಿಎಂ ನಿರ್ಧಾರ - Karnataka Golden Jubilee