ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಇಂದು ವೈದ್ಯಕೀಯ ತಪಾಸಣೆ ನಡೆಯಲಿದೆ. ಸಿಐಡಿಯಲ್ಲಿ ದಾಖಲಾಗಿದ್ದ ಮೊದಲ ಪ್ರಕರಣದಲ್ಲಿ ವೈದ್ಯಕೀಯ ತಪಾಸಣೆಗೊಳಪಟ್ಟಿದ್ದ ಪ್ರಜ್ವಲ್ ರೇವಣ್ಣ ಶನಿವಾರ ಎರಡನೇ ಪ್ರಕರಣದಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಲಿದ್ದಾರೆ.
ಬೆಳಗ್ಗೆ 11 ಗಂಟೆ ಬಳಿಕ ಪ್ರಜ್ವಲ್ ರೇವಣ್ಣ ಅವರನ್ನು ಶಿವಾಜಿನಗರದಲ್ಲಿರುವ ಲೇಡಿ ಕರ್ಜನ್ ಹಾಗೂ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆಗೊಳಪಡಿಸಲು ಎಸ್ಐಟಿ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ 44 ವರ್ಷದ ಹಾಸನ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆಯೊಬ್ಬರು ಮೇ 1ರಂದು ಸಿಐಡಿಗೆ ದೂರು ನೀಡಿದ್ದರು. ಬಳಿಕ 60 ವರ್ಷದ ಸಂತ್ರಸ್ತ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಸಿಐಡಿಯಲ್ಲಿ ಎರಡನೇ ಪ್ರಕರಣ ದಾಖಲಾಗಿತ್ತು.
ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಎಸ್ಐಟಿ ಅಧಿಕಾರಿಗಳಿಂದ ಬಂಧಿತರಾದ ಪ್ರಜ್ವಲ್ಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜೂನ್ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ತೆರಳಿದ್ದರು. ಬಳಿಕ ಎಸ್ಐಟಿ ತಂಡ ರಚಿಸಿ ತನಿಖೆಗೆ ಸರ್ಕಾರ ಆದೇಶಿಸಿತ್ತು. ಸ್ವದೇಶಕ್ಕೆ ಮರಳುತ್ತಿದ್ದಂತೆ ಪೊಲೀಸರು ಅವರನ್ನು ಬಂಧಿಸಿದ್ದರು.
ಇದನ್ನೂ ಓದಿ: ಪ್ರಜ್ವಲ್ ಪ್ರಕರಣದ ಸ್ವತಂತ್ರ ನ್ಯಾಯಾಂಗ ತನಿಖೆ ಕೋರಿದ್ದ ಅರ್ಜಿ ಇತ್ಯರ್ಥ: ಎಸ್‌ಐಟಿಗೆ ಮನವಿ ಸಲ್ಲಿಸಲು ಸೂಚನೆ - High Court