ಬೆಂಗಳೂರು: ರಾಜ್ಯದಲ್ಲಿ 1.5 ಕೋಟಿ ಬಿಜೆಪಿ ಸದಸ್ಯರನ್ನು ನೋಂದಾಯಿಸುವ ಗುರಿ ಇದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಬಿಜೆಪಿ ಸದಸ್ಯತ್ವ ಅಭಿಯಾನದ ರಾಜ್ಯ ಸಂಚಾಲಕ ನಂದೀಶ್ ರೆಡ್ಡಿ ಅವರು ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಜೆಪಿ ಸದಸ್ಯತ್ವ ಅಭಿಯಾನದ ಸಂಬಂಧ ರಾಜ್ಯ ಕಾರ್ಯಾಗಾರವು ಇಂದು (ಆ.24) ಬೆಂಗಳೂರಿನ ಅರಮನೆ ಮೈದಾನದ ಗೇಟ್ ಸಂಖ್ಯೆ 3ರ ವೈಟ್ ಪೆಟಲ್ಸ್ ಸಭಾಂಗಣದಲ್ಲಿ ನಡೆಯಲಿದೆ ಎಂದರು.
ಈ ಕಾರ್ಯಾಗಾರದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರಿತುರಾಜ್ ಸಿನ್ಹ, ರಾಜ್ಯ ಸಹ ಪ್ರಭಾರಿ ಸುಧಾಕರ ರೆಡ್ಡಿ, ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಭಾಗವಹಿಸುವರು ಎಂದು ತಿಳಿಸಿದ್ದಾರೆ.
ಈ ಕಾರ್ಯಾಗಾರದಲ್ಲಿ ಪಕ್ಷದ ರಾಜ್ಯದ ಎಲ್ಲ ಸಂಸದರು, ಜಿಲ್ಲಾಧ್ಯಕ್ಷರು, ಶಾಸಕರು, ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರು, ಪಕ್ಷದ ಪ್ರಮುಖ ಕಾರ್ಯಕರ್ತರು ಭಾಗವಹಿಸುತ್ತಾರೆ ಎಂದು ಅವರು ತಿಳಿಸಿದ್ದಾರೆ. ಪಕ್ಷದ ಸಂಘಟನಾತ್ಮಕ ವ್ಯವಸ್ಥೆಯಲ್ಲಿ ಈ ಅಭಿಯಾನವು ಪ್ರಮುಖ ಪಾತ್ರವನ್ನು ವಹಿಸಲಿದೆ ಎಂದು ಮಾಹಿತಿ ನೀಡಿದರು.