ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ 8 ಜಿಲ್ಲೆಗಳಿಗೆ ನಾಳೆ (ಸೋಮವಾರ) ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ನಾಳೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಇನ್ನು ರಾಮನಗರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಬೀಳಲಿದೆ ಎಂದು ಹೇಳಿದೆ.
ರಾಜಧಾನಿಯಲ್ಲಿ ಮೋಡಕವಿದ ವಾತಾವರಣ: ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಡಿಗ್ರಿ ಮತ್ತು 22 ಡಿಗ್ರಿ ದಾಖಲಾಗಲಿದೆ ಎಂದು ತಿಳಿಸಿದೆ.
ಬೆಂಗಳೂರು ಹವಾಮಾನ ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ಮಾತನಾಡಿ, "ಉತ್ತರ ಒಳನಾಡು ಮತ್ತು ಪಕ್ಕದ ತೆಲಂಗಾಣದ ಮೇಲೆ ಚಂಡಮಾರುತದ ಪರಿಚಲನೆಯು ಮುಂದುವರಿಯಲಿದೆ. ಈ ಭಾಗದಲ್ಲಿ ಮುಂಗಾರು ಮಾರುತಗಳು 4.5 ಕಿ.ಮೀ ಎತ್ತರದಲ್ಲಿ ಇವೆ. ಇನ್ನೊಂದೆಡೆ ಉತ್ತರ ಒಳನಾಡು ಮತ್ತು ತೆಲಂಗಾಣದಿಂದ ಆಗ್ನೇಯ ಅರೇಬಿಯನ್ ಸಮುದ್ರದ ಮೂಲಕ ಕೇರಳದಾದ್ಯಂತ ಮಾರುತಗಳು ಚಲಿಸುತ್ತಿದ್ದು, ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದಲ್ಲಿದೆ" ಎಂದು ತಿಳಿಸಿದರು.
"ಈ ಹಿನ್ನೆಲೆಯಲ್ಲಿ ನೈಋತ್ಯ ಮಾನ್ಸೂನ್ ದಕ್ಷಿಣ ಒಳನಾಡುನಲ್ಲಿ ಸಾಮಾನ್ಯವಾಗಿದೆ ಮತ್ತು ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡುನಲ್ಲಿ ದುರ್ಬಲವಾಗಿದೆ. ಇಂದು ಕರಾವಳಿ ಕರ್ನಾಟಕದ ಹಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನಲ್ಲಿ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮಳೆ ಸುರಿದಿದೆ. ಅತೀ ಹೆಚ್ಚು ಮಳೆ (7 ಸೆ.ಮೀ) ತುಮಕೂರು ಜಿಲ್ಲೆಯ ಬರಗೂರಿನಲ್ಲಿ ದಾಖಲಾಗಿದೆ" ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: ಸುಗ್ಗಿ ಕಾಲದಲ್ಲಿಯೇ ಕೈಕೊಟ್ಟ ಫಿಶಿಂಗ್: ಮೀನುಗಾರಿಕೆ ಹಂಗಾಮಿನಲ್ಲಿಯೇ ಲಂಗರು ಹಾಕಿದ ಬೋಟ್ಗಳು! - Fishing Drought