ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಭಾರೀ ವರ್ಷಧಾರೆ ಸಾಧ್ಯತೆ ಹಿನ್ನೆಲೆಯಲ್ಲಿ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಈ ಎರಡೂ ಜಿಲ್ಲೆಗಳಲ್ಲಿ ಆಗಸ್ಟ್ 27, 28 ಮತ್ತು 30, 31ರಂದು ಯೆಲ್ಲೋ ಅಲರ್ಟ್ ಇರಲಿದೆ. ಆಗಸ್ಟ್ 29ರಂದು ಮಾತ್ರ ಆರೆಂಜ್ ಅಲರ್ಟ್ ನೀಡಲಾಗಿದೆ. ಇಂದು, ನಾಳೆ, ಆಗಸ್ಟ್ 29ರಂದು ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್, ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಇಂದು, ಆಗಸ್ಟ್ 29 ಮತ್ತು 30ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದು ಮತ್ತು ನಾಳೆ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ನಿರಂತರ ಗಾಳಿ ಬೀಸಲಿದ್ದು, ಭಾರೀ ಮಳೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಸಹ ಗಾಳಿ, ಮಳೆ ಬೀಳಲಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಧಾರಾಕಾರ ಮಳೆ ಸುರಿಯಲಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವೆಡೆ ಲಘು ಮಳೆ ಮತ್ತು ನಿರಂತರ ಗಾಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೀನುಗಾರರಿಗೆ ಎಚ್ಚರಿಕೆ: ರಾಜ್ಯದ ಕರಾವಳಿಯ ಉದ್ದಕ್ಕೂ ಗಂಟೆಗೆ 45ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಆದ್ದರಿಂದ ಮೀನುಗಾರರಿಗೆ ಎಚ್ಚರ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಸಿಲಿಕಾನ್ ಸಿಟಿಯಲ್ಲಿ ಹಗುರ ಮಳೆ: ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಡಿಗ್ರಿ ಸೆಲ್ಸಿಯಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
''ಕಡಲಾಚೆಯ ಟ್ರಫ್ ದಕ್ಷಿಣ ಗುಜರಾತ್‌ನಿಂದ ಉತ್ತರ ಕೇರಳ ತೀರದವರೆಗೆ ಹಾದು ಹೋಗುತ್ತಿದೆ. ಆದ್ದರಿಂದ ನೈರುತ್ಯ ಮಾನ್ಸೂನ್ ಕರಾವಳಿ ಕರ್ನಾಟಕದ ಮೇಲೆ ಸಕ್ರಿಯವಾಗಿದ್ದು, ಒಳನಾಡಿನಲ್ಲಿ ಸಾಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ನಿನ್ನೆಯಿಂದ ಕರಾವಳಿ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಹೆಚ್ಚಿನ ಸ್ಥಳಗಳಲ್ಲಿ ಮಳೆಯಾಗಿದೆ. ಅತಿ ಹೆಚ್ಚು 13 ಸೆಂ.ಮೀ. ಮಳೆಯು ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್ನಲ್ಲಿ ದಾಖಲಾಗಿದೆ'' ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಎನ್. ಪುವಿಯರಸನ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ದಾವಣಗೆರೆ: ಹಸ್ತಾಂತರಕ್ಕೆ ಕಾದಿವೆ 54 ಸ್ಮಾರ್ಟ್ ಸಿಟಿ ಯೋಜನೆಗಳು - smart city projects