ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಕಳೆದ 15 ದಿನಗಳಿಂದ ಮುಂಗಾರು ಮಳೆ ಎಡೆಬಿಡದೇ ಸುರಿಯುತ್ತಿದೆ. ಈ ಹಿನ್ನೆಲೆ ಇಂದೂ ಕೂಡ ಹವಾಮಾನ ಇಲಾಖೆ ಅಲ್ಲಿನ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೊಷಿಸಿದೆ.
ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಹಾಸನ ಜಿಲ್ಲೆಗೆ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದಂತೆ ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ಇಂದು ಆರೆಂಜ್ ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
"ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ನಿರಂತರ ಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿ.ಮೀ. ವೇಗ ತಲುಪಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ನಿರಂತರ ಗಾಳಿ ಭಾರಿ ಮಳೆಯಾಗಲಿದೆ. ಒಳನಾಡಿನ ಬೆಳಗಾವಿ ಮತ್ತು ಹಾಸನ ಜಿಲ್ಲೆಗಳಲ್ಲಿ ಸಹ ಭಾರಿ ಮಳೆ ಸುರಿಯಲಿದೆ. ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಯಲ್ಲಿ ಹೆಚ್ಚಿನ ಗಾಳಿ ಮಳೆಯಾಗಲಿದೆ. ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ" ಎಂದು ಬೆಂಗಳೂರು ಹವಾಮಾನ ಕೇಂದ್ರದ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.
ಮೀನುಗಾರರಿಗೆ ಎಚ್ಚರಿಕೆ: ಕರಾವಳಿಯಲ್ಲಿ ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನ ಇರಲಿದ್ದು, ಪ್ರತಿ ಗಂಟೆಗೆ 55 ಕಿ.ಮೀ.ನಿಂದ 65 ಕಿ.ಮೀ. ವೇಗದಲ್ಲಿ ಬೀಸುವ ಗಾಳಿಯು ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ನೈಋತ್ಯ ಮಾನ್ಸೂನ್ ರಾಜ್ಯಾದ್ಯಂತ ಸಕ್ರಿಯವಾಗಿದೆ. ನಿನ್ನೆಯಿಂದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಸ್ಥಳಗಳಲ್ಲಿ ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಮಳೆಯಾಗಿದೆ. ಆದ್ದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರಿನಲ್ಲಿ ಸಾಧಾರಣ ಮಳೆ: ಬೆಂಗಳೂರು ನಗರ ಮತ್ತು ಸುತ್ತಮುತ್ತಲೀನ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿ ಗಂಟೆಗೆ 35 ರಿಂದ 45 ಕಿ.ಮೀ. ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 26 ಡಿಗ್ರಿ ಮತ್ತು 20 ಡಿಗ್ರಿ ದಾಖಲಾಗಲಿದೆ ಎಂದು ತಿಳಿಸಿದೆ.
ಕ್ಯಾಸಲ್ ರಾಕ್ನಲ್ಲಿ ಅತಿ ಹೆಚ್ಚು ಮಳೆ: ನಿನ್ನೆಯಿಂದ ಅತೀ ಹೆಚ್ಚು ಮಳೆ 23 ಸೆಮೀ, ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್ನಲ್ಲಿ ದಾಖಲಾಗಿದೆ. ಉಳಿದಂತೆ ಶಿವಮೊಗ್ಗ ಜಿಲ್ಲೆ ಆಗುಂಬೆಯಲ್ಲಿ ಮತ್ತು ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ 22 ಸೆಮೀ, ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ 21 ಸೆಮೀ ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.