ಬೆಂಗಳೂರು: ಕಳೆದ ಮೂರು ದಿನಗಳಿಂದ ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ಸಾಕಷ್ಟು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಇಂದು ಮತ್ತು ನಾಳೆ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡ, ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಗದಗ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ 2ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ.
ಬುಧವಾರ ಮತ್ತು ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಳಗಾವಿ, ವಿಜಯಪುರ, ರಾಯಚೂರು, ಕಲಬುರಗಿ, ಗದಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಬೀಳಲಿದೆ. ಈ ಜಿಲ್ಲೆಗಳಲ್ಲಿ ಗಾಳಿಯ ವೇಗ ಪ್ರತೀ ಗಂಟೆಗೆ 40 ರಿಂದ 50 ಕಿ.ಮೀ ಇರಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ಹಾಸನ ಜಿಲ್ಲೆಗಳಲ್ಲಿ ಗಾಳಿಸಹಿತ ಮಳೆ ಆಗುವ ಸಾಧ್ಯತೆ ಇದೆ.
ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಧಾರವಾಡ, ಹಾವೇರಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರ ಮಳೆಯಾಗಲಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 32 ಡಿಗ್ರಿ ಮತ್ತು 23 ಡಿಗ್ರಿ ದಾಖಲಾಗುವ ಸಾಧ್ಯತೆ ಇದೆ.
ನೈಋತ್ಯ ಮಾನ್ಸೂನ್ ದಕ್ಷಿಣ ಕರ್ನಾಟಕ, ದಕ್ಷಿಣ ಮಹಾರಾಷ್ಟ್ರ, ತೆಲಂಗಾಣ ಮತ್ತು ಕರಾವಳಿ ಆಂಧ್ರಪ್ರದೇಶ, ದಕ್ಷಿಣ ಛತ್ತೀಸ್‌ಗಢ ಮತ್ತು ದಕ್ಷಿಣ ಒಡಿಶಾದಲ್ಲಿ ಸಕ್ರಿಯವಾಗಿದೆ. ಇನ್ನೂ ಕೆಲವು ಭಾಗಗಳಿಗೆ ನೈಋತ್ಯ ಮಾನ್ಸೂನ್ ಮತ್ತಷ್ಟು ಮುನ್ನಡೆಯಲು ಅನುಕೂಲಕರ ಪರಿಸ್ಥಿತಿ ಇದೆ. ಮುಂದಿನ ದಿನಗಳಲ್ಲಿ ಪಶ್ಚಿಮ, ಕೇಂದ್ರ ಮತ್ತು ವಾಯುವ್ಯ ಬಂಗಾಳ ಕೊಲ್ಲಿಯನ್ನೂ ಕೂಡ ಆವರಿಸಲಿದೆ. ಸೈಕ್ಲೋನಿಕ್ ಪರಿಚಲನೆಯು ಕರಾವಳಿ ಮತ್ತು ನೆರೆಹೊರೆಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 4.5 ಕಿ.ಮೀ ಮತ್ತು 5.8 ಕಿ.ಮೀ ನಡುವೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಎನ್.ಪುವಿಯರಸನ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಜುಲೈ-ಸೆಪ್ಟೆಂಬರ್ ವೇಳೆಗೆ 'ಲಾ ನಿನಾ' ಪ್ರಬಲ, ಉತ್ತಮ ಮುಂಗಾರು ನಿರೀಕ್ಷೆ - El Nio Ending