ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕು ಪಡೆದಿದ್ದು, ಮುಂದಿನ 24 ಗಂಟೆಗಳಿಗೆ ಅನ್ವಯಿಸುವಂತೆ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಬೆಳಗಾವಿ, ಕೋಲಾರ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ನಾಳೆಯಿಂದ ಆಗಸ್ಟ್ 27ರ ವರೆಗೆ ಕರಾವಳಿಯ ಮೂರೂ ಜಿಲ್ಲೆಗಳಿಗೆ (ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ) ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಸಂಜೆಯಿಂದ ಮತ್ತು ನಾಳೆ ಮಧ್ಯಾಹ್ನದವರೆಗೆ ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಬೆಳಗಾವಿ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮಳೆಯಾಗುವ ಸಂಭವವಿದೆ.
ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ, ಕರಾವಳಿ ಕರ್ನಾಟಕದ ಉಳಿದ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡು ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.
ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ: ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಗುಡುಗು ಸಹಿತ ಮಳೆಯಾಗುವ ಮತ್ತು ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31 ಡಿಗ್ರಿ ಮತ್ತು 22 ಡಿಗ್ರಿ ದಾಖಲಾಗುವ ಹೆಚ್ಚಿನ ಸಾಧ್ಯತೆ ಇದೆ.
ಮುಂದಿನ 2 ದಿನ ಕರಾವಳಿ ಕರ್ನಾಟಕ ಮತ್ತು ಪಕ್ಕದ ಪಶ್ಚಿಮ ಘಟ್ಟಗಳ ಮೇಲೆ ಬಲವಾದ ಮೇಲ್ಮೈ ಮಾರುತಗಳು ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಬೀಸಲಿದೆ. ಮಾರುತಗಳು ಮಧ್ಯ ಅರೇಬಿಯನ್ ಸಮುದ್ರದಿಂದ ಮಾಲ್ಡೀವ್ಸ್ ಪ್ರದೇಶದವರೆಗೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಬೀಸಲಿದೆ.
ನೈಋತ್ಯ ಮಾನ್ಸೂನ್ ದಕ್ಷಿಣ ಆಂತರಿಕ ಕರ್ನಾಟಕದ ಮೇಲೆ ಸಕ್ರಿಯವಾಗಿತ್ತು. ಇದು ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡು ಮೇಲೆ ದುರ್ಬಲವಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಒಳನಾಡಿನ ಅನೇಕ ಸ್ಥಳಗಳಲ್ಲಿ, ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗಿದೆ. ಅತಿ ಹೆಚ್ಚು ಮಳೆ 8 ಸೆ.ಮೀ ಶಿವಮೊಗ್ಗ ಜಿಲ್ಲೆಯ ತ್ಯಾಗರ್ತಿಯಲ್ಲಿ ಸುರಿದಿದೆ. ಉಳಿದಂತೆ ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿಯಲ್ಲಿ ಮತ್ತು ತುಮಕೂರು ಜೆಲ್ಲೆಯ 7 ಸೆ.ಮೀ ಮಳೆ ಬಿದ್ದಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಇದನ್ನೂ ಓದಿ: ಬಳ್ಳಾರಿ ಜಿಲ್ಲೆಯಾದ್ಯಂತ ಭಾರೀ ಮಳೆ; ಹಳ್ಳ-ಕೊಳ್ಳಗಳು ಭರ್ತಿ - Ballari Rain