ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಮತ್ತೆ ಮುಂದಿನ 5 ದಿನಗಳ ಕಾಲ ಹೈ ಅಲರ್ಟ್ ನೀಡಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನ ಆರೆಂಜ್ ಅಲರ್ಟ್ ಹಾಗೂ ನಂತರದ ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಎರಡು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಗೆ ಇಂದು ಆರೆಂಜ್ ಮತ್ತು ನಾಳೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.
5 ದಿನ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಳಗಾವಿ ಮತ್ತು ಹಾಸನ ಜಿಲ್ಲೆಗಳ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. ಅಲ್ಲಿ ನಿರಂತರ ಗಾಳಿಯ ವೇಗ ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ. ತಲುಪಲಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ನಿರತರ ಗಾಳಿಯೊಂದಿಗೆ ಭಾರಿ ಮಳೆ ಬೀಳಲಿದೆ. ಉತ್ತರ ಒಳನಾಡಿನ ಬಹುತೇಕ ಕಡೆ ಹಗುರದಿಂದ ಕೂಡಿದ ಸಾಮಾನ್ಯ ಮಳೆಯಾಗಲಿದೆ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಸಿಲಿಕಾನ್ ಸಿಟಿಯಲ್ಲಿ ಹಗುರ ಮಳೆ: ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆಯಿದ್ದು, ನಿರಂತರ ಗಾಳಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಮತ್ತು 20 ಡಿಗ್ರಿ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕ್ಯಾಸಲ್ ರಾಕ್ನಲ್ಲಿ ಅತಿ ಹೆಚ್ಚು ಮಳೆ: ರಾಜ್ಯದಲ್ಲಿ ನಿನ್ನೆಯಿಂದ ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್ನಲ್ಲಿ ಅತಿ ಹೆಚ್ಚು 18 ಸೆಂ.ಮೀ. ಮಳೆ ದಾಖಲಾಗಿದೆ. ಉಳಿದಂತೆ ಉಡುಪಿ ಜಿಲ್ಲೆಯ ಸಿದ್ದಾಪುರದಲ್ಲಿ 17, ಚಿಕ್ಕಮಗಳೂರು ಜಿಲ್ಲೆಯ ಕಮ್ಮರಡಿಯಲ್ಲಿ 14 ಮತ್ತು ಕೊಟ್ಟಿಗೆಹಾರದಲ್ಲಿ 13 ಸೆಂ.ಮೀ ಮಳೆ ಸುರಿದಿದೆ.
''ದಕ್ಷಿಣ ಗುಜರಾತ್, ಉತ್ತರ ಕೇರಳದ ಕರಾವಳಿಯುದ್ದಕ್ಕೂ ಸಮುದ್ರಮಟ್ಟದಲ್ಲಿ ಆಫ್ ಶೋರ್ ಟ್ರಫ್ ಮುಂದುವರೆದಿದೆ. ಅದರಿಂದ ಕರಾವಳಿ ಕರ್ನಾಟಕ ಮತ್ತು ಪಕ್ಕದ ಪಶ್ಚಿಮ ಘಟ್ಟಗಳ ಜಿಲ್ಲೆಗಳಲ್ಲಿ ಬಲವಾದ ಗಾಳಿ ಒಮ್ಮುಖವಾಗಿದೆ. ಈ ಕಾರಣಕ್ಕೆ ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕಾಗಿದೆ. ಇಂದು ರಾಜ್ಯದ ಬಹುತೇಕ ಸ್ಥಳಗಳಲ್ಲಿ ಮಳೆಯಾಗಿದೆ'' ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಶಿರೂರು ಗುಡ್ಡ ಕುಸಿತ: ಕಣ್ಮರೆಯಾದವರಿಗೆ ಅಡ್ವಾನ್ಸ್ಡ್ ಡ್ರೋನ್, ಹೆಲಿಕಾಪ್ಟರ್ ಮೂಲಕ ಶೋಧ - Operation for missing