ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಸುರಿಯುತ್ತಿರುವ ಪೂರ್ವ ಮುಂಗಾರು ಮಳೆ ಸದ್ಯಕ್ಕೆ ನಿಲ್ಲುವ ಸೂಚನೆಗಳು ಕಂಡು ಬರುತ್ತಿಲ್ಲ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಬುಧವಾರ ಸಹ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಮತ್ತು ದಕ್ಷಿಣ ಒಳನಾಡಿನ ಮೈಸೂರಿನಲ್ಲಿ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಚಿಕ್ಕಮಗಳೂರು, ಹಾಸನ, ಮಂಡ್ಯ ಮತ್ತು ಚಾಮರಾಜನಗರಕ್ಕೆ ಗುರುವಾರ ಮಾತ್ರ ಯೆಲ್ಲೋ ಅಲರ್ಟ್ ನೀಡಲಾಗಿದೆ.
![KARNATAKA ON YELLOW ALERT](https://etvbharatimages.akamaized.net/etvbharat/prod-images/23-05-2024/21533805_rain.png)
ಇಂದು ಮತ್ತು ನಾಳೆ ಕೊಡಗು, ಮಂಡ್ಯ, ಹಾಸನ, ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಅಲ್ಲೆಲ್ಲ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮೇ 23 ಮತ್ತು 24 ರಂದು ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಮತ್ತು ಬಳ್ಳಾರಿ, ಚಿಕ್ಕಬಳ್ಳಾಪುರ, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಗಾಳಿ ಮಳೆಯಾಗಲಿದೆ. ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ 48 ಗಂಟೆಗಳ ಕಾಲ ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 ಡಿಗ್ರಿ ಮತ್ತು 23 ಡಿಗ್ರಿ ಇರುವ ಸಾಧ್ಯತೆ ಇದೆ ಎಂದಿದೆ.
ನೈಋತ್ಯ ಮಾನ್ಸೂನ್ ದಕ್ಷಿಣ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಮಾಲ್ಡೀವ್ಸ್‌ನ ಕೆಲವು ಭಾಗಗಳು, ಕೊಮೊರಿನ್ ಪ್ರದೇಶ, ದಕ್ಷಿಣ ಬಂಗಾಳ ಕೊಲ್ಲಿಯಲ್ಲಿ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಮುಂದುವರೆದಿದೆ ಎಂದು ಹವಾಮಾನ ಕೇಂದ್ರದ ಬೆಂಗಳೂರಿನ ವಿಜ್ಞಾನಿ ಡಾ. ರಾಜವೇಲ್ ಮಾಣಿಕ್ಕಂ ಹೇಳಿದ್ದಾರೆ.
ಇದನ್ನೂ ಓದಿ: ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಬೆಂಗಳೂರಲ್ಲಿ ಕಾಣಸಿಗುತ್ತಿವೆ ಸಾವಿರಾರು ಗುಂಡಿಗಳು! - POTHOLES ON BENGALURU ROAD