ಬೆಂಗಳೂರು: ಮುಂಗಾರು ಮಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭೋರ್ಗರೆಯುತ್ತಿದ್ದು, ಇನ್ನಷ್ಟು ಮಳೆಯಾಗುವ ಸಾಧ್ಯತೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಹವಾಮಾನ ಇಲಾಖೆಯು ಐದು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಣೆ ಮಾಡಿದೆ.
ಮಂಗಳವಾರ ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಯಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆವು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಇಂದು (ಮಂಗಳವಾರ) ಉತ್ತರ ಕನ್ನಡ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಬೆಳಗಾವಿ, ಗದಗ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಭಾರೀ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗಲಿದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಪ್ರತ್ಯೇಕ ಪ್ರದೇಶದಲ್ಲಿ ಭಾರೀ ಮಳೆ ಸಂಭವಿಸುವ ಸಾಧ್ಯತೆಯಿದೆ. ಉತ್ತರ ಒಳನಾಡುನ ಉಳಿದ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ, ಇನ್ನು ಮೈಸೂರು, ಹಾಸನ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಡಿಗ್ರಿ ಮತ್ತು 21 ಡಿಗ್ರಿ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಳಗಿನಿಂದ ಮಳೆಯ ಪ್ರಮಾಣ: ಹೊನ್ನಾವರದಲ್ಲಿ ಸೋಮವಾರ ಬೆಳಗ್ಗೆಯಿಂದ ಅತಿ ಹೆಚ್ಚು ಅಂದರೆ 31.4 ಎಂ. ಎಂ ಮಳೆಯಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ 25.8 ಎಂ.ಎಂ, ಶಿರಾಲಿಯಲ್ಲಿ 16.8 ಎಂ.ಎಂ, ಆಗುಂಬೆಯಲ್ಲಿ 14.5 ಎಂ.ಎಂ, ಕಲಬುರಗಿಯಲ್ಲಿ 11 ಎಂ.ಎಂ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಮುಂಗಾರು ಅಬ್ಬರ: ಕರೆಂಟ್ ಇಲ್ಲದೆ ಜನರ ಪರದಾಟ, ನೀರು ನುಗ್ಗಿ ಅವಾಂತರ - Heavy Rain In Uttara Kannada