ಬೆಂಗಳೂರು: ಮುಂಗಾರು ಮಳೆ ರಾಜ್ಯದಲ್ಲಿ ಇನ್ನಷ್ಟು ಚುರುಕುಗೊಂಡಿದೆ. ಈ ಹಿನ್ನಲೆ ಕರಾವಳಿ ಮತ್ತು ಮಲೆನಾಡಿನ ಐದು ಜಿಲ್ಲೆಗಳಿಗೆ ಮುಂದಿನ 48 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ಆರೆಂಜ್ ಅಲರ್ಟ್ ಕೊಡಲಾಗಿದೆ.
ಕೊಡಗು ಜಿಲ್ಲೆಗೆ ಇಂದು ಆರೆಂಜ್ ಮತ್ತು ನಾಳೆ ಯೆಲ್ಲೋ ಅಲರ್ಟ್. ಗದಗ, ಕೊಪ್ಪಳ, ಬಳ್ಳಾರಿ, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಇಂದು ರಾಯಚೂರು, ಬೀದರ್ ಜಿಲ್ಲೆಗಳಿಗೆ ಮತ್ತು ಬಾಗಲಕೋಟೆ, ಧಾರವಾಡ, ಮೈಸೂರು ಜಿಲ್ಲೆಗೆ ನಾಳೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಮುಂದಿನ 48 ಗಂಟೆಗಳ ಕಾಲ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಗಂಟೆಗೆ 40 ರಿಂದ 50 ಕಿಲೋಮೀಟರ್ ಗಾಳಿ ಬೀಸಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಗಾಳಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆ ಬೀಳಲಿದೆ. ದಕ್ಷಿಣ ಒಳನಾಡಿನ ಗದಗ, ಕೊಪ್ಪಳ, ರಾಯಚೂರು, ಧಾರವಾಡ, ಹಾಸನ, ಕೊಡಗು ಮತ್ತು ಬಳ್ಳಾರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಳೆಯಾಗಲಿದೆ. ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಗಾಳಿಯೊಂದಿಗೆ ಹಗುರ ಮಳೆಯಾಗಲಿದೆ ಎಂದಿದೆ.
ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ಆಕಾಶ: ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಮತ್ತು 21 ಡಿಗ್ರಿ ದಾಖಲಾಗಲಿದೆ.
''ನೈಋತ್ಯ ಮುಂಗಾರು ಮಾರುತಗಳು ಉತ್ತರ ಗುಜರಾತ್- ಉತ್ತರ ಕೇರಳದ ಉದ್ದಕ್ಕೂ ಇದ್ದು, ಸಮುದ್ರ ಮಟ್ಟದಲ್ಲಿ ತೀರದ ಮಹಾರಾಷ್ಟ್ರ, ಉತ್ತರ ಕೇರಳ ಕರಾವಳಿಯಲ್ಲಿ ಸಾಗುತ್ತಿದೆ. ಆದ್ದರಿಂದ ಕರಾವಳಿ ಕರ್ನಾಟಕ ಮತ್ತು ಪಕ್ಕದ ಪಶ್ಚಿಮ ಘಟ್ಟಗಳ ಜಿಲ್ಲೆಗಳಲ್ಲಿ ಬಲವಾದ ಗಾಳಿಯೊಂದಿಗೆ ಭಾರಿ ಮಳೆಯಾಗುತ್ತಿದೆ. ಸದ್ಯ ನೈಋತ್ಯ ಮಾನ್ಸೂನ್ ಕರಾವಳಿಯಲ್ಲಿ ಸಕ್ರಿಯವಾಗಿದ್ದು, ಒಳನಾಡಿನಲ್ಲಿ ಸಾಮಾನ್ಯವಾಗಿದೆ. ನಿನ್ನೆಯಿಂದ ಕರಾವಳಿಯ ಬಹುತೇಕ ಸ್ಥಳಗಳಲ್ಲಿ ಒಳನಾಡಿನ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ಅತಿ ಹೆಚ್ಚು ಮಳೆ ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್ನಲ್ಲಿ 22 ಸೆ. ಮೀ ಬಿದ್ದಿದೆ'' ಎಂದು ಹವಾಮಾನ ಕೇಂದ್ರದ ನಿರ್ದೇಶಕ ಸಿ. ಎಸ್ ಪಾಟೀಲ್ ಹೇಳಿದ್ದಾರೆ.
ಇದನ್ನೂ ಓದಿ : ರಾಜ್ಯಾದ್ಯಂತ ಮುಂಗಾರು ಮಳೆಯ ಆರ್ಭಟ: ಕರಾವಳಿ, ಮಲೆನಾಡಿನಲ್ಲಿ ಐದು ದಿನ ರೆಡ್ ಅಲರ್ಟ್ - KARNATAKA WEATHER REPORT