ಬೆಂಗಳೂರು: ಮೆಟ್ರೋ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಬೆಂಗಳೂರು ಜನತೆಯ ಮುಂದಿಡಲು ಬಯಸುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು ವಿರೋಧಿಸುತ್ತಿರುವ ವಿರೋಧ ಪಕ್ಷವಾದ ಬಿಜೆಪಿಯ ನಾಯಕರು ಯಥಾಪ್ರಕಾರ ಸುಳ್ಳು ಮತ್ತು ತಿರುಚಿದ ಮಾಹಿತಿಯನ್ನು ಬಳಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿ ಸಾರ್ವಜನಿಕರ ಹಾದಿ ತಪ್ಪಿಸುತ್ತಿದ್ದಾರೆ ಎಂದು ದೂರಿದ್ದಾರೆ.
ಸರ್ಕಾರದ ಯಾವುದೇ ನೀತಿ-ನಿರ್ಧಾರಗಳನ್ನು ವಿರೋಧಿಸುವ ಅಧಿಕಾರ ಸಾರ್ವಜನಿಕರಿಗೆ ಇದೆ. ಸಂವಿಧಾನಬದ್ಧವಾದ ಅವರ ಹಕ್ಕನ್ನು ನಾನು ಗೌರವಿಸುತ್ತೇನೆ. ಆದರೆ ವಿರೋಧ ಪಕ್ಷದ ಸ‍್ಥಾನದಲ್ಲಿ ಜನ ಕೂರಿಸಿರುವ ರಾಜ್ಯದ ಬಿಜೆಪಿ ರಾಜಕೀಯ ದುರುದ್ದೇಶದಿಂದ ಸುಳ್ಳು ಮಾಹಿತಿಗಳನ್ನು ನೀಡಿ ಸಾರ್ವಜನಿಕರ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿರುವುದು ಅಕ್ಷಮ್ಯ. ಒಂದೆಡೆ ಮೆಟ್ರೋ ರೈಲು ನಿರ್ಮಾಣದ ಸಾಧನೆ ಕೇಂದ್ರದ ಬಿಜೆಪಿ ಸರ್ಕಾರದ್ದು ಎಂದು ಡಂಗುರ ಬಾರಿಸುತ್ತಿರುವ ಬಿಜೆಪಿ ನಾಯಕರು ದರ ಪರಿಷ್ಕರಣೆ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿರುವುದನ್ನು ಕಂಡು ಅದರ ಜವಾಬ್ದಾರಿಯನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸುತ್ತಿರುವುದು ಆತ್ಮವಂಚಕ ನಡವಳಿಕೆಯಾಗಿದೆ ಎಂದು ತಿರುಗೇಟು ನೀಡಿದ್ದಾರೆ.
ಕೇಂದ್ರ ಮತ್ತು ಕರ್ನಾಟಕ ಸರ್ಕಾರ ಜೊತೆಗೂಡಿ ಬೆಂಗಳೂರು ಮೆಟ್ರೋ ರೈಲು ನಿಗಮವನ್ನು ಸ್ಥಾಪಿಸಿದ್ದು, ಇದರಲ್ಲಿ ಎರಡೂ ಸರ್ಕಾರಗಳ ಸಮ (50:50) ಪಾಲುದಾರಿಕೆ ಇದೆ. ಕೇಂದ್ರ ನಗರ ಮತ್ತು ವಸತಿ ವ್ಯವಹಾರ ಇಲಾಖೆಯ ಕಾರ್ಯದರ್ಶಿಯಾಗಿರುವ ಶ್ರೀನಿವಾಸ ಕಟಿಕಿಥಲ ಅವರು ನಿಗಮದ ಈಗಿನ ಅಧ್ಯಕ್ಷರು. ವ್ಯವಸ್ಥಾಪಕ ನಿರ್ದೇಶಕ ಮತ್ತು ನಿರ್ದೇಶಕರ ಸ‍್ಥಾನದಲ್ಲಿ ಕೇಂದ್ರ ಮತ್ತು ರಾಜ್ಯದ ಅಧಿಕಾರಿಗಳಿದ್ದಾರೆ. ಇದೊಂದು ಸ್ವಾಯತ್ತ ಸಂಸ್ಥೆಯಾಗಿದ್ದು, ಇದರ ಮೇಲೆ ರಾಜ್ಯ ಸರ್ಕಾರಕ್ಕೆ ಪೂರ್ಣ ನಿಯಂತ್ರಣಾಧಿಕಾರ ಇಲ್ಲ. ಉಳಿದೆಲ್ಲ ನಗರಗಳ ಮೆಟ್ರೋ ರೈಲು ನಿಗಮಗಳಂತೆ ಬೆಂಗಳೂರು ಮೆಟ್ರೋ ರೈಲು ನಿಗಮ ಕೂಡಾ ಕೇಂದ್ರ ಸರ್ಕಾರದ ಮೆಟ್ರೋ ರೈಲು (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ 2002ರ ಅಡಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
2017ರ ನಂತರ ಮೆಟ್ರೊ ರೈಲಿನ ಪ್ರಯಾಣ ದರ ಪರಿಷ್ಕರಣೆ ಮಾಡದೆ ಇರುವ ಕಾರಣ ದರ ಪರಿಷ್ಕರಣೆ ನಡೆಸುವಂತೆ ಬಿಎಂಆರ್‌ಸಿಎಲ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು. ಪ್ರಯಾಣ ದರ ಹೆಚ್ಚಳದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲೇ ಇದ್ದಿದ್ದರೆ ಬಿಎಂಆರ್‌ಸಿಎಲ್ ನಮಗೆ ಪತ್ರ ಬರೆಯದೆ, ಕೇಂದ್ರ ಸರ್ಕಾರಕ್ಕೆ ಯಾಕೆ ಪತ್ರ ಬರೆಯುತ್ತಿತ್ತು? ಎಂದು ಸಿಎಂ ಪ್ರಶ್ನೆ ಮಾಡಿದ್ದಾರೆ.
ಬಿಎಂಆರ್‌ಸಿಎಲ್ ಪತ್ರಕ್ಕೆ ಪ್ರತಿಕ್ರಿಯಿಸಿದ್ದ ಕೇಂದ್ರ ಸರ್ಕಾರ, ಮದ್ರಾಸ್ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಆರ್ ಥರಾನಿ ಅವರ ಅಧ್ಯಕ್ಷತೆಯಲ್ಲಿ ದರ ಪರಿಷ್ಕರಣಾ ಸಮಿತಿ ರಚಿಸಿತ್ತು. ಈ ಸಮಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರತಿನಿಧಿಗಳು ಸದಸ್ಯರಾಗಿದ್ದರು. 2024ರ ಸೆಪ್ಟೆಂಬರ್ 16ರಂದು ಅಧಿಕಾರ ಸ್ವೀಕರಿಸಿದ ಈ ಸಮಿತಿ ಮೂರು ತಿಂಗಳೊಳಗೆ ತನ್ನ ಶಿಫಾರಸನ್ನು ಸಲ್ಲಿಸಬೇಕೆಂದು ಕೇಂದ್ರ ಸರ್ಕಾರ ತನ್ನ ಪತ್ರದಲ್ಲಿ ತಿಳಿಸಿತ್ತು. ಮೂರು ತಿಂಗಳ ಅವಧಿಯಲ್ಲಿ ಸಮಿತಿ ಬಿಎಂಆರ್‌ಸಿಎಲ್ ಅಧಿಕಾರಿಗಳ ಜೊತೆ ಮಾತ್ರವಲ್ಲ, ದೆಹಲಿ ಮತ್ತು ಚೆನ್ನೈಗೆ ತೆರಳಿ ಅಲ್ಲಿನ ಮೆಟ್ರೋ ಸಂಸ್ಥೆಗಳ ಅಧಿಕಾರಿಗಳ ಜೊತೆಯಲ್ಲಿ ಕೂಡಾ ಕಾರ್ಯಾಚರಣೆ ಮತ್ತು ಪ್ರಯಾಣ ದರದ ಬಗ್ಗೆ ಸಮಾಲೋಚನೆ ನಡೆಸಿತ್ತು ಎಂದು ಹೇಳಿದ್ದಾರೆ.
2017ರ ಜೂನ್ನಲ್ಲಿ ಬೆಂಗಳೂರು ಮೆಟ್ರೋ ರೈಲಿಗೆ ನಿಗದಿಗೊಳಿಸಿದ್ದ ಪ್ರಯಾಣ ದರ, ಮೆಟ್ರೋದಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರ ಅನುಭವಗಳನ್ನು ದರ ಪರಿಷ್ಕರಣ ಸಮಿತಿ ಕಲೆ ಹಾಕಿತ್ತು. ಇದರ ಜೊತೆಯಲ್ಲಿ ಬಿಎಂಆರ್ಸಿಎಲ್ನ ಹಣಕಾಸು ಸಾಮರ್ಥ್ಯವನ್ನು ಕೂಡಾ ಸಮಿತಿ ಅಧ್ಯಯನ ಮಾಡಿ 2024ರ ಡಿಸೆಂಬರ್ 16ರಂದು ತನ್ನ ವರದಿನ್ನು ಸಲ್ಲಿಸಿತ್ತು. 2017ರ ಜೂನ್ ತಿಂಗಳಲ್ಲಿ ಬಿಎಂಆರ್‌ಸಿಎಲ್ ಪ್ರಯಾಣ ದರ ನಿಗದಿಪಡಿಸಿದಾಗ ಮೆಟ್ರೋ ಪ್ರಥಮ ಹಂತದ 42.30 ಕಿ.ಮೀ ಮಾರ್ಗ ಮಾತ್ರ ಪೂರ್ಣಗೊಂಡಿತ್ತು. ಮೆಟ್ರೋ ಎರಡನೇ ಹಂತ ಭಾಗಶ: ಪೂರ್ಣಗೊಂಡ ನಂತರ ಈಗ ಮೆಟ್ರೋ ಮಾರ್ಗ 42.30 ಕಿ.ಮೀಟರ್ಗೆ ವಿಸ್ತರಣೆಗೊಂಡಿದೆ. ಮೆಟ್ರೋ 2, 2ಎ, ಮತ್ತು 2ಬಿ ಮಾರ್ಗಗಳು (96.60 ಕಿ.ಮೀ.) 2026ರ ಡಿಸೆಂಬರ್ ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದ್ದು, ಆಗ ಬೆಂಗಳೂರು ಮೆಟ್ರೋ ಮಾರ್ಗ 175.55 ಕಿ.ಮೀ.ಗೆ ವಿಸ್ತರಣೆಯಾಗಲಿದೆ ಎಂದು ಸಿಎಂ ವಿವರಿಸಿದ್ದಾರೆ.
ಬೆಂಗಳೂರು ಮೆಟ್ರೋ ರೈಲಿಗೆ ಸಂಬಂಧಿಸಿದ ಈ ಎಲ್ಲ ಅಂಶಗಳನ್ನು ಗಮನಕ್ಕೆ ತೆಗೆದುಕೊಂಡು ಚರ್ಚೆ ನಡೆಸಿದ ನಂತರ ಹತ್ತು ಅಧ್ಯಾಯಗಳಲ್ಲಿ ಸಮಿತಿ ತನ್ನ ವರದಿ ನೀಡಿದೆ. ಸಮಿತಿಯು ದೇಶದ ಉಳಿದ ಮೆಟ್ರೋ ರೈಲಿನ ಪ್ರಯಾಣ ದರವನ್ನು ಅಧ್ಯಯನ ಮಾಡಿದೆ. ಸದ್ಯ ಬೆಂಗಳೂರು ಮೆಟ್ರೋ ಪ್ರಯಾಣ ದರ ಕನಿಷ್ಠ 10 ರೂ. ಮತ್ತು ಗರಿಷ್ಠ 60 ರೂ.ಆಗಿದೆ. ಮುಂಬೈ ಮೆಟ್ರೋ ರೈಲಿನ ಕನಿಷ್ಠ ಪ್ರಯಾಣ ದರ 10 ರೂ. ಮತ್ತು ಗರಿಷ್ಠ ಪ್ರಯಾಣ ದರ 80 ರೂ. ಆಗಿದೆ ಎಂದು ತಿಳಿಸಿದ್ದಾರೆ.
ದೆಹಲಿ ಮೆಟ್ರೋವನ್ನು ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಮೊದಲ ಹಂತದ ಪ್ರಯಾಣ ದರವನ್ನು ಆಯಾ ರಾಜ್ಯಗಳ ಮೆಟ್ರೋ ನಿಗಮಗಳೇ ನಿಗದಿಪಡಿಸಿತ್ತು. ಈಗ ಪ್ರಯಾಣ ದರವನ್ನು ಕೇಂದ್ರ ಸರ್ಕಾರ ನೇಮಿಸುವ ಸಮಿತಿ ನಿಗದಿಪಡಿಸುತ್ತದೆ. ಮೆಟ್ರೋ ರೈಲ್ವೆ (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆಯ ಸೆಕ್ಷನ್ 37ರ ಪ್ರಕಾರ ಪ್ರಯಾಣ ದರ ನಿಗದಿ ಸಮಿತಿ ನೀಡಿದ ವರದಿಯನ್ನು ಮೆಟ್ರೋ ರೈಲು ನಿಗಮಗಳು (ಈ ಪ್ರಕರಣದಲ್ಲಿ ಬಿಎಂಆರ್ ಸಿಎಲ್) ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ: ಇಂದಿನಿಂದ ನಮ್ಮ ಮೆಟ್ರೋ ದರ ಏರಿಕೆ: ಎಷ್ಟು ಕಿಲೋಮೀಟರ್‌ಗೆ ಎಷ್ಟು ಟಿಕೆಟ್?
ಇದನ್ನೂ ಓದಿ: ಮೆಟ್ರೋ ಪ್ರಯಾಣ ದರ ಏರಿಕೆ ವಾಪಸ್ ಪಡೆಯಬೇಕು; ಬಿಜೆಪಿ ಶಾಸಕರ ಆಗ್ರಹ