ಬೆಂಗಳೂರು: ಬೆಂಗಳೂರಿನ ತ್ಯಾಜ್ಯ ನೀರನ್ನು ಸಂಸ್ಕರಿಸಿ ಹೊಸಕೋಟೆ ತಾಲೂಕಿನ ಸೂಲಿಬೆಲೆ ಹಾಗೂ ನಂದಗುಡಿ ಹೋಬಳಿಗಳ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಅನುಷ್ಠಾನಕ್ಕೆ ತರಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಎನ್. ಎಸ್ ಬೋಸರಾಜು ವಿಧಾನಸಭೆಯಲ್ಲಿ ತಿಳಿಸಿದರು.
ಇಂದು ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಶರತ್ ಬಚ್ಚೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ. ಜಲಮಂಡಳಿ ವತಿಯಿಂದ ನೀರು ಸಂಸ್ಕರಣಾ ಘಟಕ ನಿರ್ಮಿಸಲಾಗುತ್ತಿದೆ. 40 ಎಂಎಲ್ಡಿ ನೀರನ್ನು ಸರಬರಾಜು ಮಾಡಲಾಗುವುದು. ಈ ಬಗ್ಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲಾಗುತ್ತಿದೆ ಎಂದರು.
ಇದಕ್ಕೂ ಮುನ್ನ ಮಾತನಾಡಿದ ಶರತ್ ಬಚ್ಚೇಗೌಡ, ನೀರು ಪೂರೈಕೆ ಮಾರ್ಗಗಳ ನಿರ್ಮಾಣಕ್ಕೆ ಈಗಲೇ ಚಾಲನೆ ಕೊಟ್ಟರೆ ಅನುಕೂಲವಾಗಲಿದೆ ಎಂದು ಸಲಹೆ ನೀಡಿದರು.
ಈಗಾಗಲೇ ಆದೇಶ : ಮಹರ್ಷಿ ವಾಲ್ಮೀಕಿ ಆದಿವಾಸಿ ವಸತಿ ಬುಡಕಟ್ಟು ವಸತಿ ಶಾಲೆಗಳಲ್ಲಿ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದಲ್ಲಿ ದೊರಕದೆ ಇರುವ ಶಾಲೆಗಳಲ್ಲಿ ಮಾತ್ರ ಶೇ.50ರ ಪ್ರಮಾಣದಲ್ಲಿ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಹಾಗೂ ಶೇ.50ರ ಪ್ರಮಾಣದಲ್ಲಿ ಪರಿಶಿಷ್ಟ ಜಾತಿ ಮತ್ತು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲಾಗುತ್ತದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು, ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಭಾಗೀರಥಿ ಮುರುಳ್ಯ ಅವರ ಪ್ರಶ್ನೆಗೆ ಮುಖ್ಯಮಂತ್ರಿ ಪರವಾಗಿ ಉತ್ತರಿಸಿದರು.
ಈಗಾಗಲೇ ಆದೇಶ ಹೊರಡಿಸಲಾಗಿದ್ದು, ಮತ್ತೊಮ್ಮೆ ಮರು ಆದೇಶ ಹೊರಡಿಸಲು ಸೂಚನೆ ನೀಡಲಾಗುವುದು. ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ವ್ಯಾಪ್ತಿಯ ವಾಲ್ಮೀಕಿ ಆಶ್ರಮ ಶಾಲೆಗಳಲ್ಲಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶೇ.75 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಓಬಿಸಿ ವಿದ್ಯಾರ್ಥಿಗಳಿಗೆ ಶೇ. 25 ರಷ್ಟು ಪ್ರವೇಶ ಕಲ್ಪಿಸಿ ವರ್ಗವಾರು ವಿದ್ಯಾರ್ಥಿಗಳ ಪ್ರವೇಶ ಅನುಪಾತ ನಿಗದಿಪಡಿಸಲಾಗಿದೆ ಎಂದರು.
ಶಾಸಕ ಎ.ಆರ್.ಕೃಷ್ಣಮೂರ್ತಿ ಅವರ ಮತ್ತೊಂದು ಪ್ರಶ್ನೆಗೆ ಮುಖ್ಯಮಂತ್ರಿ ಪರವಾಗಿ ಉತ್ತರಿಸಿದ ಕಾನೂನು ಸಚಿವರು, ಯಳಂದೂರು ತಾಲೂಕು ಕೇಂದ್ರದಲ್ಲಿ ಕ್ರೀಡಾಂಗಣವನ್ನು ನಿರ್ಮಾಣ ಮಾಡಲು 6 ರಿಂದ 8 ಎಕರೆ ಸೂಕ್ತ ನಿವೇಶನವನ್ನು ಗುರುತಿಸಿ ಕ್ರೀಡಾ ಇಲಾಖೆಗೆ ಹಸ್ತಾಂತರಿಸಬೇಕಿದೆ. ಹಸ್ತಾಂತರವಾದ ಕೂಡಲೇ ಕ್ರೀಡಾಂಗಣ ನಿರ್ಮಿಸಲಾಗುವುದು. ಶಾಸಕರು ಆದಷ್ಟು ಬೇಗ ಕ್ರೀಡಾಂಗಣಕ್ಕೆ ನಿವೇಶನ ಗುರುತಿಸಬೇಕು ಎಂದು ಹೇಳಿದರು.
ಶಾಸಕ ಪುಟ್ಟರಂಗಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಚಾಮರಾಜನಗರ ಜಿಲ್ಲಾ ಕ್ರೀಡಾಂಗಣಕ್ಕೆ ಅನುದಾನ ಒದಗಿಸುವ ವಿಚಾರವನ್ನು ಮುಖ್ಯಮಂತ್ರಿಯವರ ಗಮನಕ್ಕೆ ತರವುದಾಗಿ ಭರವಸೆ ನೀಡಿದರು.
ಇದನ್ನೂ ಓದಿ : ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟರಿಗೆ ರಾಜಯೋಗ, ಪ್ರಾಮಾಣಿಕರಿಗೆ ಆತ್ಮಹತ್ಯೆಗೆ ಭಾಗ್ಯ: ಸಿ.ಟಿ.ರವಿ - Valmiki Corporation Scam