ಬೆಂಗಳೂರು: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ಪ್ರತ್ಯೇಕಿಸಿ ಎರಡು ಮಹಾನಗರ ಪಾಲಿಕೆಗಳನ್ನಾಗಿ ಮಾಡುವ ಸಂಬಂಧ ಮುಂದಿನ ಸಚಿವ ಸಂಪುಟದ ಮುಂದೆ ಕಡತ ಮಂಡಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಇಲಾಖೆ ಕಾರ್ಯದರ್ಶಿಗೆ ಸೂಚಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ಪತ್ಯೇಕಿಸಿ ಎರಡು ಮಹಾನಗರ ಪಾಲಿಕೆಗಳನ್ನಾಗಿ ಮಾಡುವ ಸಂಬಂಧ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಸಮ್ಮುಖದಲ್ಲಿ ವಿಧಾನಸೌಧದಲ್ಲಿ ಇಂದು ಸಭೆ ನಡೆಸಲಾಯಿತು.
ಧಾರವಾಡ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸದಸ್ಯರ ನಿಯೋಗದೊಂದಿಗೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿ ಮಾಡಿ ಈ ಸಂಬಂಧ ಮನವಿ ಸಲ್ಲಿಸಿದರು.
ಇದಕ್ಕೆ ಸ್ಪಂದಿಸಿದ ಸಚಿವರು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ಪ್ರತ್ಯೇಕಿಸುವ ಸಂಬಂಧ ಮುಂದಿನ ಸಚಿವ ಸಂಪುಟಕ್ಕೆ ಕಡತವನ್ನು ಮಂಡಿಸಲು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯವರಿಗೆ ಸೂಚಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹುಬ್ಬಳ್ಳಿ ಮತ್ತು ಧಾರವಾಡವನ್ನು ಪ್ರತ್ಯೇಕ ಮಹಾನಗರ ಪಾಲಿಕೆಗಳನ್ನಾಗಿ ಮಾಡಲು ಸಮ್ಮತಿಸಿದ್ದು, ಈಗಾಗಲೇ ಸಂಬಂಧಪಟ್ಟವರಿಗೆ ಮೌಖಿಕವಾಗಿ ಸೂಚನೆಯನ್ನು ನೀಡಿದ್ದಾರೆ ಎಂದು ಸಚಿವರು ನಿಯೋಗಕ್ಕೆ ತಿಳಿಸಿದರು. ತಮ್ಮ ಮನವಿಗೆ ಸೂಕ್ತ ರೀತಿಯಲ್ಲಿ ಕೂಡಲೇ ಸ್ಪಂದಿಸಿದ ಸಚಿವರ ಕಾರ್ಯವೈಖರಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸದಸ್ಯರು ಅಭಿನಂದನೆ ಸಲ್ಲಿಸಿದರು.
ಇದನ್ನೂ ಓದಿ: ಕರ್ನಾಟಕದ ಬಿಸ್ಮಿಲ್ಲಾ ಖಾನ್ ಹಾವೇರಿಯ ಬಸವರಾಜ್ ಭಜಂತ್ರಿ: ಶಹನಾಯಿ ವಾದನದಲ್ಲಿ ಎತ್ತಿದ ಕೈ
ಪಾಲಿಕೆ ಸಾಮಾನ್ಯ ಸಭೆಯಲ್ಲಿ ಅನುಮೋದನೆ: ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸುವುದಕ್ಕೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯು ಇತ್ತೀಚೆಗೆ ಅನುಮೋದನೆ ನೀಡಿತ್ತು.
ನವೆಂಬರ್ 30ರಂದು ಹುಬ್ಬಳ್ಳಿಯಲ್ಲಿ ಪಾಲಿಕೆಯ ಸಭಾಂಗಣದಲ್ಲಿ ಮೇಯರ್ ರಾಮಪ್ಪ ಬಡಿಗೇರ ಅಧ್ಯಕ್ಷತೆಯಲ್ಲಿ ಸಾಮನ್ಯ ಸಭೆ ನಡೆದಿಯಿತು. ಈ ವೇಳೆ ಧಾರವಾಡ ಪ್ರತ್ಯೇಕ ಪಾಲಿಕೆಗೆ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರು ಒಮ್ಮತದಿಂದ ಬೆಂಬಲ ಸೂಚಿಸಿದ್ದರು.
ಪ್ರತ್ಯೇಕ ಪಾಲಿಕೆ ರಚಿಸುವ ಕುರಿತು ರಾಜ್ಯ ಸರ್ಕಾರ ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಮೇಯರ್ ರಾಮಪ್ಪ ಬಡಿಗೇರ ಮನವಿ ಮಾಡಿದ್ದರು. ಹಾಗೆಯೇ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಧಾರವಾಡ ಪ್ರತ್ಯೇಕ ಪಾಲಿಕೆ ರಚನೆ ಕುರಿತು ಘೋಷಣೆ ಮಾಡಬೇಕು ಎಂದು ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಅಭಿವೃದ್ಧಿ ವೇದಿಕೆ ಅಧ್ಯಕ್ಷ ವೆಂಕಟೇಶ ಮಾಚಕನೂರು ಅವರು ಒತ್ತಾಯಿಸಿದ್ದರು.
ಸಾರ್ವಜನಿಕರ ಅನುಕೂಲ ಮತ್ತು ಆಡಳಿತ ದೃಷ್ಟಿಯಿಂದ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸಬೇಕೆಂಬ ಕೂಗು ಕೆಲ ವರ್ಷಗಳಿಂದ ಕೇಳಿಬರುತ್ತಿದೆ.