ಬೀದರ್: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಮಾಡುವುದಾಗಿ ಮತ್ತು ಮೃತನ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಚಿವ ಈಶ್ವರ್ ಖಂಡ್ರೆ ಘೋಷಿಸಿದರು.
ಇತ್ತೀಚಿಗೆ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಚಿನ್ ಪಾಂಚಾಳ ನಿವಾಸಕ್ಕೆ ಇಂದು ಭೇಟಿ ನೀಡಿದ್ದ ಸಚಿವರು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಪ್ರತಿಯೊಂದು ಜೀವವೂ ಅಮೂಲ್ಯ, ಸಚಿನ್ ಪಾಂಚಾಳ ಸಾವು ತೀವ್ರ ನೋವು ತಂದಿದೆ. ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಲಾಗುವುದು. ಬಿಜೆಪಿ ಸಾವಿನಲ್ಲೂ ರಾಜಕೀಯ ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ" ಎಂದು ಹೇಳಿದರು.
ಪೊಲೀಸರ ವಿರುದ್ಧ ಕುಟುಂಬಸ್ಥರ ಆಕ್ರೋಶ: ಸಚಿವ ಈಶ್ವರ್ ಖಂಡ್ರೆ ಭೇಟಿ ಸಂದರ್ಭದಲ್ಲಿ ಪೊಲೀಸರ ವಿರುದ್ಧ ಕುಟುಂಬಸ್ಥರು ಆಕ್ರೋಶ ಹೊರಹಾಕಿದರು. ಪೊಲೀಸರು ನ್ಯಾಯ ಕೊಡಿಸಲು ವಿಫಲರಾಗಿದ್ದು, ಕೂಡಲೇ ಮನೆಯಿಂದ ಹೊರಹೋಗಬೇಕು ಎಂದು ಕಿಡಿಕಾರಿದರು. ಇದರಿಂದ ಬೀದರ್ ಎಸ್ಪಿ ಪ್ರದೀಪ್ ಗುಂಟಿ ಸೇರಿದಂತೆ ಪೊಲೀಸರು ಸಚಿನ್ ಮನೆಯಿಂದ ಹೊರ ನಡೆದರು.
ಇದನ್ನೂ ಓದಿ: ಗುತ್ತಿಗೆದಾರ ಸಚಿನ್ ಸಾವಿನ ಕುರಿತು ನ್ಯಾಯಾಂಗ ತನಿಖೆ ಆಗಬೇಕು: ಎನ್. ರವಿಕುಮಾರ್