ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿಯೊಬ್ಬ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್ ಮಾಡಿ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನವೆಂಬರ್ 11ರ ರಾತ್ರಿ 7.40ರ ಸುಮಾರಿಗೆ ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯ ಕೃತ್ಯ ರಸ್ತೆಯ ಬದಿಯಲ್ಲಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಈ ಬಗ್ಗೆ ಯುವತಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ರಾಮಮೂರ್ತಿ ನಗರ ಠಾಣೆ ಪೊಲೀಸರು, ಕೆಲವೇ ಗಂಟೆಗಳ ಅವಧಿಯಲ್ಲಿ ಆರೋಪಿ ಅರುಣ್ ಎಂಬಾತನನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.
ಅಪ್ರಾಪ್ತನೊಬ್ಬ ರಸ್ತೆಯಲ್ಲಿ ಸೆಲ್ಫಿ ವಿಡಿಯೋ ಮಾಡಿಕೊಂಡು ಹೋಗುತ್ತಿದ್ದ ಯುವತಿಯೊಬ್ಬಳ ಖಾಸಗಿ ಭಾಗ ಸ್ಪರ್ಶಿಸಿ ಪರಾರಿಯಾಗಲು ಯತ್ನಿಸಿದ್ದ ಘಟನೆ ಇತ್ತೀಚೆಗೆ ಬಿಟಿಎಂ ಲೇಔಟ್ ವ್ಯಾಪ್ತಿಯಲ್ಲಿ ನಡೆದಿತ್ತು. ಈ ಘಟನೆಯ ಕುರಿತು ಇನ್‌ಸ್ಟಾಗ್ರಾಂನಲ್ಲಿ ಮೂಲಕ ಆತಂಕ ವ್ಯಕ್ತಪಡಿಸಿದ್ದ ಯುವತಿ ಕಣ್ಣೀರಿಟ್ಟಿದ್ದರು.