ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ ಅಮಾನವೀಯ ಘಟನೆಯನ್ನು ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಹಸುಗಳ ಕೆಚ್ಚಲು ಕೊಯ್ದ ಜಿಹಾದಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ವಹಿಸದಿದ್ದರೆ, ರಾಜ್ಯಾದ್ಯಂತ ಕರಾಳ ಸಂಕ್ರಾಂತಿ ಆಚರಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಎಚ್ಚರಿಕೆ ನೀಡಿದ್ದಾರೆ.
ಹಸುಗಳ ಕೆಚ್ಚಲು ಕೊಯ್ದ ಘಟನೆ ನಡೆದ ಚಾಮರಾಜಪೇಟೆಯ ವಿನಾಯಕನಗರಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಇಡೀ ದೇಶ ಗೋವನ್ನು ಪವಿತ್ರ ಎಂದು ಪರಿಗಣಿಸಿದೆ. ಸಂಕ್ರಾಂತಿ ಹಬ್ಬದಲ್ಲೂ ಗೋ ಪೂಜೆ ಮಾಡಲಾಗುತ್ತದೆ. ಕಾಂಗ್ರೆಸ್ ಸರ್ಕಾರ ಹೊಸ ವರ್ಷಕ್ಕೆ ಬೆಲೆ ಏರಿಕೆಯ ಕೊಡುಗೆ ನೀಡಿದೆ. ಅದೇ ರೀತಿ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಹಸುವಿನ ಕೆಚ್ಚಲು ಕೊಯ್ದು ಹಾಕುವ ಕೊಡುಗೆಯನ್ನು ನೀಡಿದೆ. ಇಂತಹ ಜಿಹಾದಿ ಮನಸ್ಥಿತಿಯನ್ನು ನಾನು ಈವರೆಗೆ ನೋಡಿಲ್ಲ ಎಂದು ಕಿಡಿಕಾರಿದರು.
ನೂರಾರು ವರ್ಷಗಳಿಂದ ಚಾಮರಾಜಪೇಟೆಯಲ್ಲಿ ಪಶು ಆಸ್ಪತ್ರೆ ಇದೆ. ಈ ಭೂಮಿಯನ್ನು ವಕ್ಫ್ ಮಂಡಳಿಗೆ ಸೇರಿಸಲು ಪ್ರಯತ್ನ ನಡೆದಿತ್ತು. ಆಗ ಸರ್ಕಾರದ ವಿರುದ್ಧ ಪ್ರತಿಭಟಿಸುವುದರ ಜೊತೆಗೆ, ಕೋರ್ಟ್ ಮೊರೆ ಹೋಗಲಾಯಿತು. ಪ್ರತಿಭಟನೆ ವೇಳೆ ಇವೇ ಹಸುಗಳನ್ನು ತೋರಿಸಲಾಗಿತ್ತು. ಅದಕ್ಕಾಗಿಯೇ ಮಚ್ಚು, ಡ್ರ್ಯಾಗರ್ ಬಳಸಿ ಹಸುಗಳ ಕೆಚ್ಚಲು ಕೊಯ್ದು, ಕಾಲು ಕತ್ತರಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ನಾಯಕರು ಮತಕ್ಕಾಗಿ ದೇವಸ್ಥಾನಕ್ಕೆ ಹೋಗುತ್ತಾರೆ. ಆದರೆ ಯಾರಿಗೂ ಹಿಂದೂ ಧರ್ಮದ ಬಗ್ಗೆ ಶ್ರದ್ಧೆ ಇಲ್ಲ. ಹಿಂದೂಗಳಲ್ಲಿ ಭೀತಿ ಹುಟ್ಟಿಸಲು ಜಿಹಾದಿಗಳು ಹೀಗೆ ಮಾಡಿದ್ದರೂ ಕಾಂಗ್ರೆಸ್ ನಾಯಕರು ಇದನ್ನು ಖಂಡಿಸುವುದಿಲ್ಲ. ಈಗ ಯಾವ ಮುಖ ಇಟ್ಟುಕೊಂಡು ಸಂಕ್ರಾಂತಿ ಆಚರಣೆ ಮಾಡುತ್ತಾರೆ? ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಕರಾಳ ಸಂಕ್ರಾಂತಿ ಆಚರಿಸುತ್ತೇವೆ ಎಂದು ಎಚ್ಚರಿಸಿದರು.
ಈ ಭಾಗದಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿದರೆ ಅದನ್ನು ಕಿತ್ತುಕೊಂಡು ಹೋಗುತ್ತಾರೆ. ಪ್ರತಿಭಟನೆಯಲ್ಲಿ ಪಾಲ್ಗೊಂಡವರಿಗೆ ಬೆದರಿಕೆ ಹಾಕುವ ಕೆಲಸ ಮಾಡಿದ್ದಾರೆ. ಎಸಿಪಿ ಜೊತೆ ಮಾತಾಡಿದ್ದು, ತಕ್ಷಣ ಕ್ರಮ ವಹಿಸುವಂತೆ ಆಗ್ರಹಿಸಿದ್ದೇನೆ. ಇಲ್ಲವಾದರೆ ತೀವ್ರವಾದ ಪ್ರತಿಭಟನೆ ಮಾಡುತ್ತೇವೆ. ಕಾಂಗ್ರೆಸ್ ಸಚಿವರು, ಮುಖ್ಯಮಂತ್ರಿ ಈ ಕಡೆ ತಿರುಗಿಯೂ ನೋಡಲ್ಲ ಎಂದು ಹರಿಹಾಯ್ದರು.
ಕಾಂಗ್ರೆಸ್ ಒಡೆದ ಮನೆ : ಕಾಂಗ್ರೆಸ್ ಈಗ ಒಡೆದ ಮನೆಯಾಗಿದೆ. ಎಲ್ಲರೂ ಔತಣಕೂಟ ನಡೆಸುತ್ತಿದ್ದಾರೆ. ಸಿಎಂ ಕುರ್ಚಿಯ ಅವಧಿ ಎರಡೂವರೆ ವರ್ಷ ಎಂದು ಹೊಂದಾಣಿಕೆಯಾಗಿದೆ. ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರೆ, ಅಧಿಕಾರ ಕೊಡದಿರಲು ಸಿದ್ದರಾಮಯ್ಯ ಬಣ ತಂತ್ರ ಮಾಡುತ್ತಿದೆ. ಆದ್ದರಿಂದ ಆಡಳಿತ ಯಂತ್ರ ಕುಸಿದಿದೆ ಎಂದು ವಾಗ್ದಾಳಿ ನಡೆಸಿದರು.
ರಾಕ್ಷಸಿ ಮನಸ್ಥಿತಿಯ ಪಾಪಿಗಳಿಂದ ಕೃತ್ಯ : ಬಿ ವೈ ವಿಜಯೇಂದ್ರ
ಈ ಸಂಬಂಧ ಎಕ್ಸ್ ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, 'ಗೋವು' ಎಂದರೆ ಸಕಲ ಜೀವರಾಶಿಗಳಿಗೂ ಮಾತೆ. ಹೀಗಾಗಿ ಹಿಂದೂಗಳು ಗೋವಿಗೆ ಮಾತೃದೇವತೆಯ ಸ್ಥಾನ ನೀಡಿ ಕಾಮಧೇನು ಎಂದು ಪೂಜಿಸುತ್ತಾರೆ. ಮಕರ ಸಂಕ್ರಾಂತಿಯಂದು ಗೋ ಮಾತೆಗೆ ಪೂಜೆ ಸಲ್ಲಿಸುವುದು ಹಬ್ಬದ ಆಚರಣೆಯ ಮಹತ್ವದ ಭಾಗ, ಇಂತಹ ಪಾವಿತ್ರ್ಯತೆಯ ಸಂದರ್ಭದಲ್ಲಿ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ರಾಕ್ಷಸಿ ಮನಸ್ಥಿತಿಯ ಪಾಪಿಗಳು ನಿರ್ದಯವಾಗಿ ಹಸುಗಳ ಕೆಚ್ಚಲನ್ನು ಭೀಕರವಾಗಿ ಕತ್ತರಿಸಿರುವುದು ಅತ್ಯಂತ ಹೇಯ, ಅಮಾನುಷ ಕೃತ್ಯವಾಗಿದ್ದು ಇದನ್ನು ಬಿಜೆಪಿ ಅತ್ಯುಗ್ರವಾಗಿ ಖಂಡಿಸುತ್ತದೆ ಎಂದು ಕಿಡಿಕಾರಿದ್ದಾರೆ.
''ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಗೋ ಸುರಕ್ಷತೆಯ ಬಗ್ಗೆ ತಾತ್ಸಾರ ಧೋರಣೆ ಅನುಸರಿಸುತ್ತಿದೆ. ಮೊನ್ನೆಯಷ್ಟೇ ಗೋ ಶಾಲೆಗಳನ್ನು ಮುಚ್ಚುವ ನಿರ್ಧಾರ ಪ್ರಕಟಿಸಿದೆ. ಇದೆಲ್ಲವೂ ಗೋ ಭಕ್ಷಕ ಜನರ ಓಲೈಕೆಗಾಗಿ ಅಲ್ಲದೆ ಬೇರೇನೂ ಅಲ್ಲ. ಇರಿಯುವುದು, ಕತ್ತರಿಸುವುದನ್ನು ಕೇಳಿದ್ದೇವೆ, ಆದರೆ ಮಾತೃ ಕೊರತೆ ನೀಗಿಸಲು ಕ್ಷೀರಧಾರೆ ಹರಿಸುವ ಕೆಚ್ಚಲನ್ನೇ ಕತ್ತರಿಸುವಷ್ಟು ಪರಮ ನೀಚ ಕೃತ್ಯಕ್ಕೆ ಇಳಿದಿರುವ ಘಟನೆ ರಾಜಧಾನಿಯಲ್ಲೇ ನಡೆಯುತ್ತಿವುದರ ಹಿಂದಿರುವ ಕುಮ್ಮಕ್ಕಿನ ಶಕ್ತಿ ಯಾವುದು ಎನ್ನುವುದು ಊಹಿಸಿಕೊಳ್ಳದಷ್ಟು ಕರುನಾಡಿನ ಜನತೆ ಮುಗ್ಧರಲ್ಲ. ಕೃತ್ಯ ನಡೆದಿರುವ ಕ್ಷೇತ್ರ ಯಾರ ಮುಷ್ಠಿಯಲ್ಲಿದೆ, ಈ ರಾಜ್ಯ ಆಳುತ್ತಿರುವವರ ಮನಸ್ಥಿತಿ ಯಾರ ಪರವಿದೆ ಎನ್ನುವುದು ಎಲ್ಲರಿಗೂ ತಿಳಿದ ವಿಚಾರವೇ. ದಿನದಿಂದ ದಿನಕ್ಕೆ ಹಿಂದೂ ಆಚಾರ - ವಿಚಾರ ಹಾಗೂ ಜನರ ಮೇಲೆ ನಡೆಯುತ್ತಿರುವ ಅಟ್ಟಹಾಸ ಮೇರೆ ಮೀರುತ್ತಿದೆ. ಜನರ ತಾಳ್ಮೆಯ ಕಟ್ಟೆ ಒಡೆಯುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ಎಚ್ಚೆತ್ತುಕೊಂಡು ಇಂತಹ ಕೃತ್ಯಗಳ ಹಿಂದಿರುವ ಶಕ್ತಿಯನ್ನು ಮೊಟಕುಗೊಳಿಸಬೇಕು'' ಎಂದು ಆಗ್ರಹಿಸಿದ್ದಾರೆ.
''ಗೋಮಾತೆಯನ್ನು ತಾಯಿಯಂತೆ ಪೂಜಿಸುವ ನಮಗೆಲ್ಲ ಈ ಕೃತ್ಯ ಅತ್ಯಂತ ಘಾಸಿಯುಂಟು ಮಾಡಿದೆ. ಸುಗ್ಗಿಯ ಹಬ್ಬ ಮಕರ ಸಂಕ್ರಾಂತಿಯ ಸಂದರ್ಭದಲ್ಲಿ ರಾಜ್ಯದ ರಾಜ್ಯಧಾನಿಯಲ್ಲಿಯೇ ಇಂತಹ ಅಮಾನವೀಯ ಕೆಲಸ ಮಾಡಿರುವ ಪುಂಡರಿಗೆ ಈ ಸರ್ಕಾರದಲ್ಲಿ ಯಾವುದೇ ಭಯ ಇಲ್ಲದಂತೆ ಕಾಣಿಸುತ್ತಿದೆ'' ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಹಸುಗಳ ಕೆಚ್ಚಲು ಕೊಯ್ದ ಪಾಪಿಗಳು! ರಸ್ತೆಯಲ್ಲಿ ರಕ್ತದೋಕುಳಿ, ಮೂಕಪ್ರಾಣಿಗಳ ನರಳಾಟಕ್ಕೆ ಸ್ಥಳೀಯರ ಕಣ್ಣೀರು
ಇದನ್ನೂ ಓದಿ: ಕೋಳಿ ತಿಂದಿದ್ದಕ್ಕೆ ಶ್ವಾನ ಹತ್ಯೆ: ಬೆಂಗಳೂರಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲು