ಮೈಸೂರು: ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತಾ ಶಾ ನೀಡಿರುವ ಹೇಳಿಕೆ ಖಂಡಿಸಿ ವಿವಿಧ ಸಂಘಟನೆಗಳು ಇಂದು ಕರೆ ನೀಡಿದ್ದ ಮೈಸೂರು ಬಂದ್ಗೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ.
ನಗರದ ಪ್ರಮುಖ ವಾಣಿಜ್ಯ ರಸ್ತೆಗಳಲ್ಲಿ ಬಂದ್ಗೆ ಬೆಂಬಲ ವ್ಯಕ್ತವಾದರೆ, ಹೊರ ವಲಯದ ಬಡಾವಣೆಗಳ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಬೆಳಗ್ಗೆಯಿಂದಲೇ ಹಲವೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ವಿವಿಧ ಸಂಘಟನೆಗಳ ಮುಖಂಡರು ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ್ ಸ್ವಾಮೀಜಿ ನೇತೃತ್ವದಲ್ಲಿ ಗ್ರಾಮಾಂತರ ಬಸ್ ನಿಲ್ದಾಣದ ಬಳಿ ಪ್ರತಿಭಟಿಸಿ ಬಸ್ ಸಂಚಾರಕ್ಕೆ ಅಡ್ಡಿಪಡಿಸಿದರು. ಬಳಿಕ ಅಮಿತ್ ಶಾ ಪ್ರತಿಕೃತಿಗೆ ಬೆಂಕಿ ಹಚ್ಚಲು ಯತ್ನಿಸಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ತಡೆದರು. ಆ ನಂತರ ಮೈಸೂರಿನ ಪಂಚವಟಿ ವೃತ್ತದಲ್ಲಿರುವ ಆರ್ಎಸ್ಎಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಮೈಸೂರು ಬಂದ್ಗೆ ಹಲವು ಸಂಘಟನೆಗಳು ಬೆಂಬಲ ಘೋಷಿಸಿವೆ. ಅಧಿಕೃತವಾಗಿ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿಲ್ಲ. ಬ್ಯಾಂಕ್ಗಳು ಸೇರಿದಂತೆ ಇತರೆ ಸರ್ಕಾರಿ ಕಚೇರಿಗಳು ಎಂದಿನಂತೆ ಕೆಲಸ ನಿರ್ವಹಿಸುತ್ತಿವೆ. ಸರ್ಕಾರ ಹಾಗೂ ಖಾಸಗಿ ಬಸ್ಗಳು ಲಭ್ಯವಿಲ್ಲ. ಅಂಗಡಿ ಮಾಲೀಕರು ಸ್ವಯಂಪ್ರೇರಿತರಾಗಿ ಮುನ್ನೆಚ್ಚರಿಕೆಗಾಗಿ ನಗರದ ಗ್ರಾಮಾಂತರ ಬಸ್ ನಿಲ್ದಾಣ, ಸಿಟಿ ಬಸ್ ನಿಲ್ದಾಣ, ಅಶೋಕ ರಸ್ತೆ, ದೇವರಾಜ ಮಾರುಕಟ್ಟೆ ಹಾಗೂ ದೇವರಾಜ ಅರಸು ರಸ್ತೆ, ಶಿವರಾಂ ಪೇಟೆ, ಸಂತೆಪೇಟೆಗಳಲ್ಲಿ ಮಧ್ಯಾಹ್ನದವರೆಗೆ ತಮ್ಮ ಅಂಗಡಿಗಳನ್ನು ಮುಚ್ಚಿದ್ದಾರೆ. ನಗರದ ಹೊರ ಭಾಗದ ಬಡಾವಣೆಗಳ ಪ್ರಮುಖ ರಸ್ತೆಗಳಲ್ಲಿ ವಾಣಿಜ್ಯ ಮಳಿಗೆಗಳು ಎಂದಿನಂತೆ ವಹಿವಾಟು ನಡೆಸುತ್ತಿದ್ದು, ಈ ಭಾಗದಲ್ಲಿ ಬಂದ್ ಯಾವುದೇ ಪರಿಣಾಮ ಬೀರಿಲ್ಲ.
ಪರಿಸ್ಥಿತಿಗೆ ಅನುಗುಣವಾಗಿ ಆಯಾ ಶಾಲಾ ಮುಖ್ಯಸ್ಥರು ರಜೆ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳುತ್ತಿದ್ದಾರೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ ಆಗಿರುವುದರಿಂದ ವಿದ್ಯಾರ್ಥಿಗಳ ಹಾಜರಾತಿ ಸಂಖ್ಯೆ ಕಡಿಮೆಯಾಗಿದೆ.
ಬಲವಂತ ಮಾಡಿದರೆ ಕ್ರಮ- ಡಿಸಿಪಿ: ಮೈಸೂರು ನಗರದಾದ್ಯಂತ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಸೂಕ್ತ ಪ್ರದೇಶಗಳಲ್ಲಿ ಹೆಚ್ಚಿನ ನಿಗಾವಹಿಸಲಾಗಿದೆ. ಬಲವಂತವಾಗಿ ಬಂದ್ ಮಾಡಿಸಲು ಮುಂದಾದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಕಾನೂನು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ 'ಈಟಿವಿ ಭಾರತ್'ಗೆ ಮಾಹಿತಿ ನೀಡಿದರು.
ಇದನ್ನೂ ಓದಿ: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಬಳ್ಳಾರಿಯ ಕಂಪ್ಲಿ ಸಂಪೂರ್ಣ ಬಂದ್!