ಬೆಂಗಳೂರು: ಹೃದಯಾಘಾತದಿಂದ ನಿಧನರಾದ ಸುರಪುರ ಶಾಸಕ ಹಾಗೂ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ರಾಜಾ ವೆಂಕಟಪ್ಪ ನಾಯಕ ಅವರ ಅಂತ್ಯ ಸಂಸ್ಕಾರವನ್ನು ಸೋಮವಾರ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ.
ಹೃದಯಾಘಾತದಿಂದ ರಾಜಾ ವೆಂಕಟಪ್ಪ ನಾಯಕ ಅವರು ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶಾಸಕರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಆದೇಶಿಸಿದೆ ಎಂದು ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ರಾಜ್ಯ ಶಿಷ್ಟಾಚಾರ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.
ರಾಜಾ ವೆಂಕಟಪ್ಪ ನಾಯಕ ಅವರ ಹುಟ್ಟೂರಲ್ಲಿ ಅಂತ್ಯಕ್ರಿಯೆ: ಸಕಲ ಸರ್ಕಾರಿ ಗೌರವಗಳೊಂದಿಗೆ ಸೋಮವಾರ ಅವರ ಹುಟ್ಟೂರಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ಶಾಸಕ ರಾಜಾ ವೆಂಕಟ್ಟಪ್ಪ ನಾಯಕ ನಿಧನ ಹಿನ್ನೆಲೆಯಲ್ಲಿ ಸೋಮವಾರ ಬಜೆಟ್ ಅಧಿವೇಶನದ ಕಲಾಪದಲ್ಲಿ ಸಂತಾಪ ಸೂಚಿಸಲಾಗುತ್ತದೆ. ಹಾಲಿ ಶಾಸಕ ನಿಧನರಾದ ಹಿನ್ನೆಲೆಯಲ್ಲಿ ಸಂತಾಪದ ನಂತರ ಅಂದು ಕಲಾಪ ನಡೆಸುವುದಿಲ್ಲ. ಅದರಂತೆ ಸಂತಾಪದ ನಂತರ ಕಲಾಪವನ್ನು ಮುಂದೂಡಲಾಗುತ್ತದೆ. ಮಂಗಳವಾರ ರಾಜ್ಯಸಭೆ ಚುನಾವಣೆ ಇದ್ದು, ಬುಧವಾರ ಕಲಾಪ ನಡೆಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಅವರು ಅನಾರೋಗ್ಯದಿಂದ ಕಳೆದ 15 ದಿನಗಳ ಹಿಂದೆಯಷ್ಟೇ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಬಂದಿದ್ದರು. ಆದರೆ, ಸೋಮವಾರ ಹೃದಯಾಘಾತ ಸಂಭವಿಸಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಸುರಪುರ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಇತ್ತೀಚೆಗಷ್ಟೇ ಉಗ್ರಾಣ ನಿಮಗದ ಅಧ್ಯಕ್ಷರಾಗಿ ನೇಮಕವಾಗಿದ್ದರು. ಶಾಸಕರ ಮನೆಯತ್ತ ಮುಖಂಡರು, ಶಾಸಕರು ಹಾಗೂ ಕಾರ್ಯಕರ್ತರು ಆಗಮಿಸುತ್ತಿದ್ದಾರೆ.
ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಘಾತದಿಂದ ನಿಧನರಾದ ಸುದ್ದಿ ತಿಳಿದು ಮಂಗಳೂರು ಗ್ರಾಮದಲ್ಲಿ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಗಣ್ಯರಿಂದ ಸಂತಾಪ: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಸಚಿವರಾದ ಶಿವರಾಜ ತಂಗಡಗಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ. 'ರಾಜಾ ವೆಂಕಟಪ್ಪ ನಾಯಕ ಅವರ ಹಠಾತ್ ನಿಧನ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಸದಾ ತುಡಿಯುತ್ತಿದ್ದ ಇವರು ಉತ್ತರ ಕರ್ನಾಟಕದ, ಅದರಲ್ಲಿಯೂ ವಿಶೇಷವಾಗಿ ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ಸರ್ವಾಂಗೀಣ ಪ್ರಗತಿಗಾಗಿ ಸಾಕಷ್ಟು ಕೆಲಸ ಮಾಡಿದ್ದರು. ನಾಲ್ಕು ಬಾರಿ ಶಾಸಕರಾಗಿದ್ದ ಅವರು ಇತ್ತೀಚೆಗಷ್ಟೇ ಕರ್ನಾಟಕ ಉಗ್ರಾಣ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಉತ್ತಮ ಒಡನಾಟ ಹೊಂದಿದ್ದ ರಾಜಾ ವೆಂಕಟಪ್ಪ ನಾಯಕ ಅವರ ನಿಧನದಿಂದ ಕಾಂಗ್ರೆಸ್ ಪಕ್ಷ ಒಬ್ಬ ಅಪರೂಪದ ಜನನಾಯಕರನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಶಾಂತಿ ಲಭಿಸಲಿ, ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ' ಎಂದು ಸಚಿವ ಶಿವರಾಜ ತಂಗಡಗಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಶಾಸಕ ರಾಜಾ ವೆಂಕಟಪ್ಪ ನಾಯಕ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ: ಅಧಿವೇಶನ ಮತ್ತೊಂದು ದಿನ ವಿಸ್ತರಣೆ