ಮಂಗಳೂರು(ದಕ್ಷಿಣ ಕನ್ನಡ): ಕೇಂದ್ರ ಸರ್ಕಾರ ರಾಜ್ಯಪಾಲರನ್ನು ವಾಪಸ್ ಕರೆಸದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ. ಒಂದು ವೇಳೆ ಅದು ಆಗದಿದ್ದಲ್ಲಿ ಬಾಂಗ್ಲಾ ಪ್ರಧಾನಿಗೆ ಬಂದ ಪರಿಸ್ಥಿತಿ ಕರ್ನಾಟಕದ ರಾಜ್ಯಪಾಲರಿಗೆ ಬರಬಹುದು ಎಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿಸಿದ ರಾಜ್ಯಪಾಲರ ನಡೆಯನ್ನು ಖಂಡಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮ.ನ.ಪಾದ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದ್ದಾರೆ. ಗೋ ಬ್ಯಾಕ್ ಗವರ್ನರ್, ಗೆಟ್ ಔಟ್ ಗೆಹ್ಲೋಟ್ ಎಂದು ಘೋಷಣೆ ಕೂಗಿದ್ದಾರೆ.
ಐವನ್ ಡಿಸೋಜ ನೀಡಿರುವ ಹೇಳಿಕೆಯ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರಾದ ಭರತ್ ಶೆಟ್ಟಿ ಮತ್ತು ವೇದವ್ಯಾಸ ಕಾಮತ್ ಅವರು ಮಂಗಳೂರು ಕಮೀಷನರ್ ಅನುಪಮ್ ಅಗರ್ವಾಲ್ ಅವರಿಗೆ ಐವನ್ ಡಿಸೋಜ ವಿರುದ್ದ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಅವರು, "ಐವನ್ ಡಿಸೋಜ ವಿರುದ್ದ ಕ್ರಮಕ್ಕೆ ಬಿಜೆಪಿ ನಿಯೋಗ ಮನವಿ ನೀಡಿದ್ದಾರೆ. ಇದರ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಪಡೆದು ಸೂಕ್ತ ಕ್ರಮ ಕೈಗೊಳ್ಳಲಾಗುವುದು" ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ರಾಜ್ಯಪಾಲರಿಂದ ರಾಜ್ಯದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿ: ಸಚಿವ ಪ್ರಿಯಾಂಕ್ ಖರ್ಗೆ - Priyank Kharge