ಬೆಂಗಳೂರು: ಯುವಕನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದ ಆರೋಪಿ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ ಬೆನ್ನಲ್ಲೇ ಅವರನ್ನು ಭಾನುವಾರ ರಾತ್ರಿ ಪರಪ್ಪನ ಅಗ್ರಹಾರಕ್ಕೆ ಕರೆದೊಯ್ಯಲಾಯಿತು.
ಪ್ರಕರಣದ ತನಿಖೆಯನ್ನು ಸರ್ಕಾರವು ಸಿಐಡಿಗೆ ವಹಿಸಿದ್ದು, ಇಂದು ಬಾಡಿ ವಾರಂಟ್ ಮೇಲೆ ತನಿಖಾಧಿಕಾರಿಗಳು ಸೂರಜ್ ಅವರನ್ನು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ. ಭಾನುವಾರ ಜೈಲಿಗೆ ತಲುಪುವುದು ತಡವಾದ ಹಿನ್ನೆಲೆಯಲ್ಲಿ ಸೂರಜ್ ರೇವಣ್ಣಗೆ ಸೋಮವಾರ ಜೈಲಾಧಿಕಾರಿಗಳು ವಿಚಾರಣಾಧೀನ ಕೈದಿ ನಂಬರ್ ನೀಡಲಿದ್ದಾರೆ. ಇಂದು ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಸೂರಜ್ ಅವರನ್ನು ಸಿಐಡಿ ಅಧಿಕಾರಿಗಳು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.
ಯುವಕನಿಗೆ ಅಸಹಜ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣದ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೂರಜ್ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 377 (ಅಸಹಜ ಲೈಂಗಿಕ ದೌರ್ಜನ್ಯ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ) ಹಾಗೂ 506 (ಜೀವ ಬೆದರಿಕೆ) ಅಡಿ ಪ್ರಕರಣ ದಾಖಲಾಗಿತ್ತು. ಅಸಹಜ ಲೈಂಗಿಕ ದೌರ್ಜನ್ಯ ಆರೋಪಿಸಿ ಜೆಡಿಎಸ್ ಕಾರ್ಯಕರ್ತರೊಬ್ಬರು ದೂರು ದಾಖಲಿಸಿದ್ದರು. ತನ್ನ ಮೇಲೆ ಹೊಳೆನರಸೀಪುರದ ಗನ್ನಿಕಂಡದ ಫಾರ್ಮ್‌ಹೌಸ್‌ನಲ್ಲಿ ಜೂನ್ 16ರ ಸಂಜೆ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಸೂರಜ್ ರೇವಣ್ಣ ಬಂಧನ - Suraj Revanna Arrest
ಈ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಸೂರಜ್ ರೇವಣ್ಣ ಅವರನ್ನು ವಿಚಾರಣೆ ನಡೆಸಿದ ಹಾಸನದ ಸೆನ್ ಠಾಣೆ ಪೊಲೀಸರು, ಬಳಿಕ ಬಂಧಿಸಿದ್ದರು. ತದನಂತರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ. ಸಿಐಡಿಗೆ ವಹಿಸಿ ರಾಜ್ಯ ಕಾನೂನು - ಸುವ್ಯವಸ್ಥೆಯ ಎಡಿಜಿಪಿ ಆರ್.ಹಿತೇಂದ್ರ ಅವರು ಆದೇಶಿಸಿದ್ದರು. ಭಾನುವಾರ ಹಾಸನದಲ್ಲಿ ಹಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದ ಪೊಲೀಸರು ಸೂರಜ್ ಅವರನ್ನು ಬೆಂಗಳೂರಿನ ಕೋರಮಂಗಲದಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.
ಇದನ್ನೂ ಓದಿ: ಯುವಕನ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ: ಸೂರಜ್ ರೇವಣ್ಣಗೆ ವೈದ್ಯಕೀಯ ಪರೀಕ್ಷೆ ಮುಕ್ತಾಯ - Suraj Revanna