ಬೆಂಗಳೂರು: ಮುಂಗಾರು ಮಾರುತಗಳು ಇಡೀ ರಾಜ್ಯವನ್ನು ಆವರಿಸಿಕೊಂಡಿವೆ. ಈ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
24 ಗಂಟೆ ಯೆಲ್ಲೋ ಅಲರ್ಟ್: ಕರಾವಳಿಯ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಗದಗ, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಶುಕ್ರವಾರ ಮತ್ತು ಶನಿವಾರ ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗುಸಹಿತ ಮಳೆಯಾಗುವ ಸಾಧ್ಯತೆಯಿದೆ.
ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ದಕ್ಷಿಣ ಕನ್ನಡ, ಗದಗ, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗಾಳಿ ಮಳೆಯಾಗಲಿದೆ.
ಬೀದರ್, ಕೊಪ್ಪಳ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ವಿಜಯನಗರ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮಳೆ: ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಾಧಾರಣ ಮಳೆಯಾಗುವ ಸಂಭವವಿದೆ. ಮೇಲ್ಮೈ ಮಾರುತಗಳು ಕೆಲವೊಮ್ಮೆ ಬಲವಾಗಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಡಿಗ್ರಿ ಮತ್ತು 21 ಡಿಗ್ರಿ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಈಗಾಗಲೇ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಇಂದು ದಾವಣಗೆರೆ, ಧಾರವಾಡ, ಹಾವೇರಿ, ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ ಬೀಳುತ್ತಿದೆ.
ಇದನ್ನೂ ಓದಿ: Watch.. ಜೀವದ ಹಂಗು ತೊರೆದು ಮಕ್ಕಳನ್ನು ಹರಿಯುವ ಹಳ್ಳ ದಾಟಿಸಿದ ಪೋಷಕರು: ವಿಡಿಯೋ ವೈರಲ್ - Rain Effects