ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆ ನಡೆಯಲಿರುವ 14 ಕ್ಷೇತ್ರಗಳಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯರು ಹಾಗೂ ದಿವ್ಯಾಂಗರು ಸೇರಿ 34,110 ಮಂದಿ ಮನೆಯಿಂದ ಮತದಾನ ಮಾಡಿದ್ದಾರೆ.
85 ವರ್ಷ ಮೇಲ್ಪಟ್ಟ ಒಟ್ಟು 23,213 ಜನರು ನೋಂದಾಯಿಸಿಕೊಂಡಿದ್ದು, ಅದರಲ್ಲಿ 21,892 ವೃದ್ಧರು ತಮ್ಮ ಹಕ್ಕು ಚಲಾಯಿಸಿದ್ದಾರೆ. 10,897 ಮಂದಿ ದಿವ್ಯಾಂಗರು ನೋಂದಾಯಿಸಿಕೊಂಡಿದ್ದು, ಇದರಲ್ಲಿ 10,566 ಮಂದಿ ಹಕ್ಕು ಚಲಾಯಿಸಿದ್ದಾರೆ. ಜೊತೆಗೆ, ಬುಧವಾರದಿಂದ ಅಂಚೆ ಮತದಾನ ಸಹ ಆರಂಭವಾಗಿದ್ದು, ಮೇ 3 ರವರೆಗೆ ಪ್ರತಿದಿನ ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ಮತದಾನ ಮಾಡಬಹುದಾಗಿದೆ.
2 ನೇ ಹಂತದಲ್ಲಿ ದಾವಣಗೆರೆ, ಶಿವಮೊಗ್ಗ, ಹಾವೇರಿ, ಧಾರವಾಡ, ಬಳ್ಳಾರಿ, ರಾಯಚೂರು, ಕೊಪ್ಪಳ, ಬಾಗಲಕೋಟೆ, ಬೀದರ್, ವಿಜಯಪುರ, ಕಲಬುರಗಿ, ಬೆಳಗಾವಿ, ಚಿಕ್ಕೋಡಿ ಹಾಗೂ ಉತ್ತರಕನ್ನಡ ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ. ರಾಜಕೀಯ ಪಕ್ಷಗಳ ನಾಯಕರು ಹಾಗೂ ಮುಖಂಡರು ಬಿರುಬಿಸಿಲಿನ ನಡುವೆಯೂ ಭರ್ಜರಿ ಮತಬೇಟೆಯಲ್ಲಿ ನಿರತರಾಗಿದ್ದಾರೆ.
ರಾಜ್ಯದ ಗಮನ ಸೆಳೆದಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ.ರಾಘವೇಂದ್ರ, ಪಕ್ಷೇತರರಾಗಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ನಟ ಶಿವರಾಜ್‍ಕುಮಾರ್ ಪತ್ನಿ ಗೀತಾ ಶಿವರಾಜ್‍ಕುಮಾರ್ ಸ್ಪರ್ಧೆ ಮಾಡಿರುವುದರಿಂದ ಚುನಾವಣಾ ಕಣವು ರಂಗೇರಿದೆ.
ಅದೇ ರೀತಿ, ದಾವಣಗೆರೆಯಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್, ಸಂಸದ ಸಿದ್ದೇಶ್ವರ್ ಪತ್ನಿ ಗಾಯತ್ರಿ ಸಿದ್ದೇಶ್ವರ್, ಬಳ್ಳಾರಿಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮಲು, ಹಾವೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬೆಳಗಾವಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬೀದರ್ನಲ್ಲಿ ಕೇಂದ್ರ ಸಚಿವ ಭಗವಂತ್ ಖೂಬಾ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.
ಕಾಂಗ್ರೆಸ್‍ನಿಂದ ಪ್ರಮುಖವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಅಳಿಯ ರಾಧಾಕೃಷ್ಣನ್ ಕಲಬುರಗಿ ಕ್ಷೇತ್ರ, ಚಿಕ್ಕೋಡಿಯಿಂದ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ, ಬೆಳಗಾವಿಯಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್, ಬಳ್ಳಾರಿಯಲ್ಲಿ ಬಿ. ಶ್ರೀರಾಮುಲು ವಿರುದ್ಧ ಶಾಸಕ ತುಕಾರಾಂ, ಬೀದರ್ನಿಂದ ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಅವರು ಸ್ವರ್ಧಾ ಕಣದಲ್ಲಿದ್ದಾರೆ.
ಇದನ್ನೂ ಓದಿ: ದಾವಣಗೆರೆ ಅಭಿವೃದ್ಧಿ ವಿಚಾರ: ಬಿಜೆಪಿ ಕಾಂಗ್ರೆಸ್ ನಡುವೆ ವಾಕ್ಸಮರ - Lok Sabha Election 2024