ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಅವ್ಯವಹಾರ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ದೊರೆತಿದೆ. ಹಗರಣದಲ್ಲಿ ಸಿಎಂ ಪಾತ್ರವಿರುವ ಬಗ್ಗೆ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಗುರುವಾರ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಲು ಲೋಕಾಯುಕ್ತ ಅಧಿಕಾರಿಗಳು ತಯಾರಿ ನಡೆಸಿದ್ದಾರೆ.
ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರವಿಲ್ಲ ಎಂಬುದು ತನಿಖೆಯಲ್ಲಿ ಕಂಡುಬಂದಿದೆ. ಅಲ್ಲದೆ, ಆರೋಪಕ್ಕೆ ಪೂರಕವಾಗಿ ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ಬಿ-ರಿಪೋರ್ಟ್ ಸಲ್ಲಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. gಉರುವಾರ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರದಿಯನ್ನ ಸಲ್ಲಿಸಲಿದ್ದಾರೆ.
ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ನೀಡಿದ ದೂರಿನ ಆಧಾರದ ಮೇರೆಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ ಹಾಗೂ ಜಮೀನಿನ ಮೂಲ ಮಾಲೀಕ ಜೆ. ದೇವರಾಜು ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ, ಬೇನಾಮಿ ಆಸ್ತಿ ವಹಿವಾಟು ತಡೆ ಕಾಯ್ದೆ ಹಾಗೂ ಕರ್ನಾಟಕ ಭೂ ಕಬಳಿಕೆ ಕಾಯ್ದೆಗಳು ಒಳಗೊಂಡಂತೆ ಭಾರತೀಯ ದಂಡ ಸಂಹಿತೆ (ಐಪಿಸಿ) ವಿವಿಧ ಸೆಕ್ಷನ್ ಗಳಡಿ ಕಳೆದ ವರ್ಷ ಸೆ.27ರಂದು ಮೈಸೂರು ಲೋಕಾಯುಕ್ತ ಅಧಿಕಾರಿಗಳು ಎಫ್ಐಆರ್ ದಾಖಲಿಸಿಕೊಂಡಿದ್ದರು. ಸಿದ್ದರಾಮಯ್ಯ ಅವರನ್ನು ಎ1 ಆರೋಪಿ, ಉಳಿದ ಮೂವರನ್ನು ನಂತರದ ಆರೋಪಗಳೆಂದು ಪರಿಗಣಿಸಿ ವಿಚಾರಣೆ ನಡೆಸಿದ್ದರು.
ದೂರುದಾರಗೆ ಲೋಕಾಯುಕ್ತ ನೋಟಿಸ್ : ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಪ್ರಕರಣದಲ್ಲಿ ಹಿನ್ನಡೆಯಾಗಿದೆ. ಬಹುತೇಕ ತನಿಖೆ ಪೂರ್ಣಗೊಳಿಸಿರುವ ಲೋಕಾಯುಕ್ತರು ದೂರುದಾರರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣವು ಸಿವಿಲ್ ಸ್ವರೂಪದ್ದಾಗಿದ್ದು, ತನಿಖೆ ನಡೆಸಲು ತಕ್ಕುದಲ್ಲ. ಕಾನೂನಿನ ತಪ್ಪು ತಿಳಿವಳಿಕೆ, ಕ್ರಮ ಜರುಗಿಸಲು ಸರಿಯಾದದ್ದು ಅಲ್ಲ. ಪ್ರಮುಖವಾಗಿ ಸಾಕ್ಷ್ಯಾಧಾರಗಳ ಕೊರತೆ ಕಂಡುಬಂದಿದೆ. ಇದರಂತೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುವುದು. ವರದಿ ಬಗ್ಗೆ ಆಕ್ಷೇಪಣೆಗಳಿದ್ದರೆ ಒಂದು ವಾರದೊಳಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಬಹುದು ಎಂದು ಅಧಿಕಾರಿಗಳು ಸ್ನೇಹಮಯಿ ಕೃಷ್ಣ ಅವರಿಗೆ ನೋಟಿಸ್ ನೀಡಿದ್ದಾರೆ.
ಸಿದ್ದರಾಮಯ್ಯ, ಅವರ ಪತ್ನಿ ಸೇರಿದಂತೆ ನಾಲ್ವರ ವಿರುದ್ಧ ಕೇಳಿಬಂದ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಸಾಬೀತಾಗಿಲ್ಲ. ಹೀಗಾಗಿ, ವರದಿಯನ್ನು ಕೋರ್ಟ್ಗೆ ಸಲ್ಲಿಸಲಾಗುತ್ತಿದೆ. ಮುಡಾದಿಂದ 2016ನೇ ಸಾಲಿನಿಂದ 2024ರ ವರೆಗೆ ಶೇ.50:50 ಅನುಪಾತದಲ್ಲಿ ಪರಿಹಾರಾತ್ಮಕ ನಿವೇಶನಗಳನ್ನು ನೀಡಿರುವ ಆರೋಪಗಳ ಬಗ್ಗೆ ಹೆಚ್ಚುವರಿ ತನಿಖೆ ನಡೆಸಿ ಸಿಆರ್ಪಿಸಿ ಕಲಂ 173ನಡಿ ಹೆಚ್ಚುವರಿ ಅಂತಿಮ ವರದಿಯನ್ನ ಕೋರ್ಟ್ಗೆ ಸಲ್ಲಿಸಲಾಗುವುದು ಎಂದು ನೋಟಿಸ್ನಲ್ಲಿ ತನಿಖಾಧಿಕಾರಿಗಳು ತಿಳಿಸಿದ್ದಾರೆ.
ಮುಡಾದಿಂದ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಅವರು ಕಾನೂನುಬಾಹಿರವಾಗಿ 14 ನಿವೇಶನಗಳು ಪಡೆದಿದ್ದರು ಎನ್ನಲಾದ ಪ್ರಕರಣ ಸಂಬಂಧ ತನಿಖೆ ನಡೆಸಬೇಕೆಂದು ಕೋರಿ ಸ್ನೇಹಮಯಿ ಕೃಷ್ಣ ಅವರು ರಾಜ್ಯಪಾಲರಿಗೆ ದೂರು ನೀಡಿದ್ದರು. ರಾಜ್ಯಪಾಲರು ಪರಿಶೀಲಿಸಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದರು. ತನಿಖೆಗೆ ಅನುಮತಿ ದೊರೆತ ಬಳಿಕ ಸಿಎಂ, ಕುಟುಂಬಸ್ಥರು ಒಳಗೊಂಡಂತೆ ಇನ್ನಿತರರ ವಿರುದ್ಧ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಎಫ್ಐಆರ್ ದಾಖಲಿಸಿಕೊಂಡಿದ್ದರು.
ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ : ಮುಡಾ 50:50 ಹಗರಣ ಆರೋಪ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ "ಬಿ" ರಿಪೋರ್ಟ್ ಸಲ್ಲಿಸುತ್ತೇವೆ ಎಂದು ಮೈಸೂರು ಲೋಕಾಯುಕ್ತರು ನೋಟಿಸ್ ನೀಡಿದ್ದು, ಈ ಬಗ್ಗೆ ಒಂದು ವಾರದಲ್ಲಿ ತಕರಾರು ಅರ್ಜಿ ಸಲ್ಲಿಸುತ್ತೇನೆ ಎಂದು ದೂರುದಾರ, ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.
ಲೋಕಾಯುಕ್ತರಿಂದ ಸಿಎಂ ಮತ್ತು ಅವರ ಪತ್ನಿ, ಬಾಮೈದನಿಗೆ ಕ್ಲೀನ್ ನೀಡಿರುವ ಬೆನ್ನಲ್ಲೇ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರಿಯಾದ ಸಾಕ್ಷ್ಯಾಧಾರಗಳನ್ನು ನೀಡಿ ಆರೋಪ ಸಾಬೀತು ಪಡಿಸುತ್ತೇನೆ. ಒಂದು ವಾರದಲ್ಲಿ ತಕರಾರು ಅರ್ಜಿ ಸಲ್ಲಿಸುತ್ತೇನೆ ಎಂದು ತಿಳಿಸಿದರು.
ಇದನ್ನೂ ಓದಿ: ಮುಡಾದ 50:50 ಹಗರಣದ ಸಂಪೂರ್ಣ ತನಿಖೆ ಮಾಡಿ: ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಮತ್ತೊಂದು ಮನವಿ