ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುಟುಂಬಸ್ಥರು ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ ಎಂಬ ಆರೋಪ ಸಂಬಂಧ ಸಿದ್ದರಾಮಯ್ಯ ಸೇರಿ ಐವರು ಆರೋಪಿಗಳ ವಿರುದ್ಧ ವಿಶೇಷ ತನಿಖಾ ದಳ ಅಥವಾ ಬೇರಾವುದೇ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಖಾಸಗಿ ದೂರಿಗೆ ಸಂಬಂಧಿಸಿಂತೆ, ಆಗಸ್ಟ್ 29ರವರೆಗೂ ಆದೇಶ ಮುಂದೂಡುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಈ ಆದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತಾತ್ಕಾಲಿಕ ರೀಲೀಫ್ ಸಿಕ್ಕಂತಾಗಿದೆ.
ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶದಲ್ಲಿ ಹಲವು ದೋಷಗಳಿವೆ. ಈ ನಡುವೆ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಗಳ ಅಂತಿಮ ಆದೇಶ ಆಗಸ್ಟ್ 20 ಮತ್ತು 21ರಂದು ಹೊರ ಬೀಳಲಿದೆ. ಈ ಆದೇಶ ಬಂದಲ್ಲಿ ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಮಾನ್ಯತೆ ಕಳೆದುಕೊಳ್ಳಲಿದೆ. ಆದ್ದರಿಂದ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿದರು.
ಈ ಅಂಶವನ್ನು ಪರಿಗಣಿಸಿದ ನ್ಯಾಯಪೀಠ, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಮುಖ್ಯಮಂತ್ರಿಗಳು ಸಲ್ಲಿಸಿರುವ ಅರ್ಜಿ ಕುರಿತು ಎಲ್ಲರ ವಾದ ಆಲಿಸಬೇಕಿದೆ. ಖಾಸಗಿ ದೂರಿನ ಕುರಿತು ಆದೇಶ ಪ್ರಕಟಿಸಿದರೆ, ಹೈಕೋರ್ಟ್ ಪ್ರಕ್ರಿಯೆ ನಿಷ್ಪಲವಾಗುತ್ತದೆ. ಆದ್ದರಿಂದ ದೂರಿನ ತೀರ್ಪು ಮುಂದೂಡಬೇಕು. ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿ ಆಧರಿಸಿ ಯಾವುದೇ ಮುಂದಿನ ಕ್ರಮ ಜರುಗಿಸಬಾರದು ಎಂದು ಹೈಕೋರ್ಟ್ ಸೂಚಿಸಿದೆ. ಇದೇ ವೇಳೆ, ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಆದೇಶಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ತಡೆಯಾಜ್ಞೆ ನೀಡಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿತು. ಅಲ್ಲದೆ, ಮುಖ್ಯಮತ್ರಿಗಳ ವಿರುದ್ದ ಯಾವುದೇ ಆತುರದ ಕ್ರಮ ಕೈಗೊಳ್ಳಬಾರದು ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿ ವಿಚಾರಣೆಯನ್ನು ಆಗಸ್ಟ್ 29ಕ್ಕೆ ಮುಂದೂಡಿತು.
ಇದನ್ನೂ ಓದಿ: ಈಗ ಯಾವ ನಾಲಿಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ: ಸಿಎಂ ಸಿದ್ದರಾಮಯ್ಯ - Muda Scam