ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಂದರೆ ಮುಡಾ ಹಗರಣವನ್ನ ನಿವೃತ್ತ ನ್ಯಾಯಮೂರ್ತಿಗಳ ಬದಲಾಗಿ ಹಾಲಿ ನ್ಯಾಯಮೂರ್ತಿಗಳಿಂದ ನ್ಯಾಯಾಂಗ ತನಿಖೆ ಮಾಡಿಸಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜಾಧ್ಯಕ್ಷ ಕುರುಬೂರು ಶಾಂತಕುಮಾರ್ ಮಾಧ್ಯಮಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.
ಇಂದು ಜಲದರ್ಶನಿ ಅತಿಥಿ ಗೃಹದಲ್ಲಿ ಮಾಧ್ಯಮಾಗಳ ಜತೆ ಮಾತನಾಡಿದ ಕುರುಬೂರು ಶಾಂತಕುಮಾರ್, ಮೂಡಾ ಹಗರಣದಲ್ಲಿ ಎಲ್ಲ ಪಕ್ಷಗಳ ಪ್ರಭಾವಿ ಮುಖಂಡರು ಭಾಗಿಯಾಗಿದ್ದಾರೆ. 4,000 ಕೋಟಿ ಸಂಸ್ಥೆಯ ಹಣ ದುರುಪಯೋಗ ಆಗಿದೆ. ಈ ಬಗ್ಗೆ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ಇದೇ ಜುಲೈ 6 ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನ ಭೇಟಿ ಮಾಡಿ ಒತ್ತಾಯಿಸಲಾಗಿತ್ತು. ರಾಜ್ಯ ಸರ್ಕಾರ ನಿವೃತ ನ್ಯಾಯಮೂರ್ತಿ ಪಿಎನ್ ದೇಸಾಯಿ ನೇತೃತ್ವದ ನ್ಯಾಯಾಂಗ ತನಿಖೆಗೆ ಆದೇಶ ಹೊರಡಿಸಿದೆ. ಪ್ರಭಾವಿಗಳು, ಜನಪ್ರತಿನಿಧಿಗಳು ಇದರಲ್ಲಿ ಪಾಲುದಾರರಾಗಿರುವ ಕಾರಣ ಹಾಲಿ ನ್ಯಾಯಮೂರ್ತಿಗಳಿಂದಲೇ ತನಿಖೆ ನಡೆಸಲು ಸರ್ಕಾರ ಮುಂದಾಗಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿರು.
ಜುಲೈ 22 ರಂದು ದೆಹಲಿಯಲ್ಲಿ ಸಭೆ: ದೆಹಲಿ ರೈತ ಹೋರಾಟದ ಮುಂದಿನ ಯೋಜನೆ ಬಗ್ಗೆ ಜುಲೈ 22 ರಂದು ನವದೆಹಲಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಸಂಘಟನೆ ವತಿಯಿಂದ ರಾಷ್ಟ್ರೀಯ ರೈತ ಮುಖಂಡರ ಸಮಾವೇಶ ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರ ಅಕ್ಕಿ ರಫ್ತು ನಿಷೇಧ ಮಾಡಿರುವುದನ್ನು ಕೂಡಲೇ ವಾಪಸ್ ಪಡೆಯಬೇಕು. ಆಂಧ್ರ, ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ಭತ್ತ ಬೆಳೆಗಾರರಿಗೆ ಬೆಲೆ ಕುಸಿತವಾಗುವ ಸಂಭವವಿದೆ. ಈ ಬಗ್ಗೆ 22 ರಂದು ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಒತ್ತಾಯಿಸಲಾಗುವುದು ಎಂದರು.
ಜುಲೈ 21 ರಂದು ರೈತ ಹುತಾತ್ಮ ದಿನ: ರೈತ ಸಮುದಾಯಕ್ಕಾಗಿ ಪ್ರಾಣ ಕಳೆದುಕೊಂಡ ರೈತರ ನೆನಪಿಗಾಗಿ ರಾಜ್ಯಮಟ್ಟದಲ್ಲಿ ರೈತ ಹುತಾತ್ಮ ದಿನವನ್ನು ಜುಲೈ 21ರಂದು ಚಿಕ್ಕಬಳ್ಳಾಪುರದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಎಲ್ಲ ರೈತ ಮುಖಂಡರು ಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ. ಬಣ್ಣಾರಿ ಸಕ್ಕರೆ ಕಾರ್ಖಾನೆ ರೈತರನ್ನು ವಂಚಿಸುತ್ತಿರುವ ಬಗ್ಗೆ ಕಬ್ಬು ಬೆಳೆಗಾರರಿಗೆ ಜಾಗೃತಿ ಮೂಡಿಸಲು 18 ರಂದು ಬಣ್ಣಾರಿ ಕಾರ್ಖಾನೆ ಎದುರು ಜಾಗೃತಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಇದೇ ಸಂದರ್ಭದಲ್ಲಿ ಕುರುಬೂರು ಶಾಂತ ಕುಮಾರ್ ತಿಳಿಸಿದರು.