ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ತಮ್ಮ ಕುಟುಂಬಸ್ಥರಿಗೆ ಬದಲಿ ನಿವೇಶನ ಪಡೆದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಆರೋಪವನ್ನು ಕೇಂದ್ರ ತನಿಖಾ ಸಂಸ್ಥೆಗೆ (ಸಿಬಿಐ) ವಹಿಸಿ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ಸಂಬಂಧ ಹೈಕೋರ್ಟ್ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಸಿಎಂ ಸಿದ್ದರಾಮಯ್ಯ, ಮತ್ತವರ ಪತ್ನಿ ಮತ್ತು ಲೋಕಾಯುಕ್ತ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.
ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದ್ದು, ವಿಚಾರಣೆಯನ್ನು ನವೆಂಬರ್ 26ಕ್ಕೆ ಮುಂದೂಡಿದೆ. ಅಲ್ಲದೆ, ರಾಜ್ಯ ಗೃಹ ಸಚಿವಾಲಯ, ಗೃಹ ಇಲಾಖೆ, ಸಿಬಿಐ, ಮೈಸೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ. ಎಂ. ಪಾರ್ವತಿ ಸೇರಿದಂತೆ ಒಟ್ಟು 12 ಮಂದಿಗೂ ನೋಟಿಸ್ ಜಾರಿ ಮಾಡಿದೆ. ಜತೆಗೆ, ಅಕ್ಟೋಬರ್ 25ರ ವರೆಗೆ ನಡೆದಿರುವ ತನಿಖಾ ವರದಿಯನ್ನು ನ್ಯಾಯಪೀಠದ ಮುಂದೆ ಪ್ರಸ್ತುತ ಪಡಿಸಬೇಕು ಎಂದು ನ್ಯಾಯಪೀಠ ಇದೇ ವೇಳೆ ನಿರ್ದೇಶನ ನೀಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಪೀಠಕ್ಕೆ ತಿಳಿಸಿದರು. ಇದಕ್ಕೆ ಪೀಠ, ಇದೀಗ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿಲ್ಲವೇ ಎಂದು ಪ್ರಶ್ನಿಸಿತು. ಆಗ, ಅರ್ಜಿದಾರರ ಪರ ವಕೀಲರು, ತನಿಖೆ ಸಾರ್ವಜನಿಕ ವಿಶ್ವಾಸವನ್ನು ಹುಟ್ಟುಹಾಕುವಂತಿರಬೇಕು. ಅದನ್ನು ಮಾಡಲಾಗುತ್ತಿಲ್ಲ ಎಂದರು. ವಾದ ಆಲಿಸಿದ ಪೀಠ, ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.
ಪ್ರಕರಣದ ಹಿನ್ನೆಲೆ : ಸಿಎಂ ಪತ್ನಿ ಬಿ. ಎಂ. ಪಾರ್ವತಿ ಮುಡಾದಿಂದ 55.80 ಕೋಟಿ ರೂ. ಮೌಲ್ಯದ ನಿವೇಶನಗಳನ್ನು ಅಕ್ರಮವಾಗಿ ಪಡೆದಿದ್ದಾರೆ. ಈಗಾಗಲೇ ಪ್ರಕರಣದ ತನಿಖೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ವಹಿಸಿದೆ. ಆದರೆ, ಸಿದ್ದರಾಮಯ್ಯ ರಾಜ್ಯದ ಹಾಲಿ ಮುಖ್ಯಮಂತ್ರಿ ಆಗಿದ್ದು, ರಾಜ್ಯ ಸರ್ಕಾರದ ಇಲಾಖೆಗಳ ಮೇಲೆ ಅದರಲ್ಲೂ ಮುಖ್ಯವಾಗಿ ಲೋಕಾಯುಕ್ತ ಮತ್ತು ಪೊಲೀಸ್ ಪ್ರಾಧಿಕಾರಗಳಂತಹ ತನಿಖಾ ಸಂಸ್ಥೆಗಳ ಮೇಲೆ ಭಾರಿ ಪ್ರಭಾವ ಬೀರುವ ಸಾಧ್ಯತೆಯಿದೆ. ಆದ್ದರಿಂದ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕು ಎಂದು ಅರ್ಜಿದಾರರು ಕೋರಿದ್ದರು.
ಇದನ್ನೂ ಓದಿ: ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾ ಸಮನ್ಸ್