ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣ ಸಂಬಂಧ ಮೈಸೂರಿನ ಲೋಕಾಯುಕ್ತ ಎಸ್ಪಿ ಉದೇಶ್ ಅವರು ಹಿರಿಯ ಅಧಿಕಾರಿಗಳಿಗೆ ಪ್ರಕರಣದ ತನಿಖೆ ಬಗ್ಗೆ ಮಾಹಿತಿ ನೀಡಿದ್ದಾರೆ.
ಲೋಕಾಯುಕ್ತ ಪ್ರಧಾನ ಕಚೇರಿಗೆ ಬಂದು ಎಸ್ಪಿ ಉದೇಶ್ ಅವರು, ಎಫ್ಐಆರ್ ದಾಖಲಾದ ಬಳಿಕ ಕೈಗೊಂಡಿರುವ ತನಿಖಾ ವಿವರಗಳ ಬಗ್ಗೆ ಎಡಿಜಿಪಿ ಮನೀಶ್ ಕರ್ಬೀಕರ್ ಅವರಿಗೆ ಮಾಹಿತಿ ನೀಡಿದ್ದಾರೆ. ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಹಾಗೂ ಸಿಎಂ ಭಾಮೈದ ಸೇರಿದಂತೆ ನಾಲ್ವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನಿರ್ದೇಶನ ಮೇರೆಗೆ ಎಫ್ಐಆರ್ ದಾಖಲಾಗಿತ್ತು. ಪ್ರಕರಣ ದಾಖಲಾದ ಬಳಿಕ ಕೈಗೊಂಡ ಕ್ರಮಗಳ ಬಗ್ಗೆ ಇಂದು ಎಸ್ಪಿ ಹಿರಿಯ ಅಧಿಕಾರಿಗಳಿಗೆ ವಿವರಣೆ ನೀಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಡಾ ನಿವೇಶನ ಹಂಚಿಕೆ ಅಕ್ರಮ ಸಂಬಂಧ 1997ರಿಂದ ಈವರೆಗಿನ ದಾಖಲಾತಿಗಳ ಸಂಗ್ರಹಿಸಿ ಅಧ್ಯಯನ ನಡೆಸಿರುವ ಲೋಕಾ ಅಧಿಕಾರಿಗಳು ಹಂತ - ಹಂತವಾಗಿ ಆರೋಪಿತರನ್ನ ಹಾಗೂ ಹಗರಣದ ವೇಳೆ ಅಧಿಕಾರದಲ್ಲಿದ್ದ ಅಧಿಕಾರಿಗಳನ್ನ ವಿಚಾರಣೆಗೊಳಪಡಿಸಲು ತಯಾರಿ ನಡೆಸಿದ್ದಾರೆ. ಅಲ್ಲದೇ, ಸಿದ್ದರಾಮಯ್ಯ ಹಾಗೂ ಕುಟುಂಬಸ್ಥರ ವಿರುದ್ಧ ಕೇಳಿ ಬಂದ ಆರೋಪಗಳಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಇಟ್ಟುಕೊಂಡು ವಿಚಾರಣೆ ನಡೆಸುವ ಸಾಧ್ಯತೆಯಿದೆ. ಅಲ್ಲದೇ, ಎಫ್ಐಆರ್ನಲ್ಲಿ ದಾಖಲಾಗಿರುವ ಆರೋಪಿತರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸುವ ಸಾಧ್ಯತೆಯಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.