ಮೈಸೂರು: ಡಾ.ಬಿ.ಆರ್ ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ನಾಳೆ ಮೈಸೂರು ಬಂದ್ ಗೆ ಕರೆ ನೀಡಲಾಗಿದ್ದು, ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ.
ಬಂದ್‌ಗೆ ಬೆಂಬಲ ನೀಡಿರುವ ಸಂಘಟನೆಗಳು: ನಾಳೆ (ಮಂಗಳವಾರ) ಮೈಸೂರು ಬಂದ್‌ಗೆ ದಲಿತ ಪರ ಸಂಘಟನೆಗಳು , ರೈತ ಪರ ಸಂಘಟನೆಗಳು, ಮುಸ್ಲಿಂ ಸಂಘಟನೆಗಳು, ಕಾರು ಚಾಲಕರ ಸಂಘಟನೆಗಳು, ಬೀದಿ ಬದಿ ವ್ಯಾಪಾರಿಗಳು ಬೆಂಬಲ ಬೆಂಬಲ ಸೂಚಿಸಿದ್ದು, ನಾಳೆ ಬೆಳಗ್ಗೆಯಿಂದ ಮಧ್ಯಾಹ್ನ 4 ಗಂಟೆ ವರೆಗೆ ಬಂದ್ ನಡೆಯಲಿದೆ ಎಂದು ಮಾಜಿ ಮೇಯರ್ ಪುರುಷೋತ್ತಮ್ ಹೇಳಿದ್ದಾರೆ.
ಹೋಟೆಲ್ ಮಾಲೀಕರ ಸಂಘ ಹಾಗೂ ಮೈಸೂರಿನ ಪ್ರವಾಸೋದ್ಯಮ ನೆಚ್ಚಿಕೊಂಡಿರುವ ಇತರ ಉದ್ಯಮಿಗಳು ನಾಳಿನ ಬಂದ್‌ಗೆ ನೈತಿಕ ಬೆಂಬಲ ಸೂಚಿಸಿದ್ದು, ಕಾರ್ಮಿಕರು ಕೈಗೆ ಕಪ್ಪುಪಟ್ಟಿ ಧರಿಸಿ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ ಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂದ್‌ಗೆ ಕಾಂಗ್ರೆಸ್ ಬೆಂಬಲ: ನಾಳಿನ ಮೈಸೂರು ಬಂದ್‌ಗೆ ಮೈಸೂರು ನಗರ ಕಾಂಗ್ರೆಸ್ ಹಾಗೂ ಜಿಲ್ಲಾ ಕಾಂಗ್ರೆಸ್ ಬೆಂಬಲ ನೀಡಲಿದ್ದು, ಬಂದ್ನಲ್ಲಿ ಎಲ್ಲ ಕಾಂಗ್ರೆಸ್ ಶಾಸಕರು ಭಾಗವಹಿಸಲಿದ್ದಾರೆ. ಶಾಂತಿಯುತ ಬಂದ್‌ಗೆ ನಾವು ಬೆಂಬಲ ನೀಡುತ್ತೇವೆ ಎಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್ ಹೇಳಿದ್ದಾರೆ.
ಮೈಸೂರು ಬಂದ್‌ಗೆ ಹಲವು ಸಂಘಟನೆಗಳು ಬೆಂಬಲ ಘೋಷಿಸಿದ್ದು, ಬಂದ್ ವಿಚಾರವಾಗಿ ವರ್ತಕರು ಗೊಂದಲದಲ್ಲಿದ್ದಾರೆ. ಪರಿಸ್ಥಿತಿ ನೋಡಿಕೊಂಡು ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸುವ ಬಗ್ಗೆ ಜಿಲ್ಲಾಧಿಕಾರಿಗಳು ತೀರ್ಮಾನ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳಿಂದ ಜ. 9 ರಂದು ಹುಬ್ಬಳ್ಳಿ-ಧಾರವಾಡ ಬಂದ್ ಕರೆ