ಚಾಮರಾಜನಗರ: ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ತಮ್ಮ ಮೇಲೆ ಭ್ರಷ್ಟಾಚಾರ ಆರೋಪ ಹೊರಿಸಿದ್ದಕ್ಕೆ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಚಾಮರಾಜನಗರ ಜಿಲ್ಲಾ ಚುನಾವಣಾಧಿಕಾರಿ ಹಾಗು ಡಿಸಿ ಶಿಲ್ಪಾ ನಾಗ್ ಅವರಿಗೆ ಇಂದು ದೂರು ನೀಡಿದರು. ಕೊಳ್ಳೇಗಾಲ ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ, ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ, ಕೆ.ವೆಂಕಟೇಶ್ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಸೂಕ್ತ ಕ್ರಮಕ್ಕೆ ಅವರು ಆಗ್ರಹಿಸಿದ್ದಾರೆ.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಎನ್.ಮಹೇಶ್, "ನಾನು ವೈಯಕ್ತಿಕವಾಗಿ ಮತ್ತು ಪಕ್ಷದ ಪರವಾಗಿ ಚಾಮರಾಜನಗರ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರಿಗೆ ದೂರು ನೀಡಿದ್ದೇನೆ. ಕಳೆದ ನಾಲ್ಕು ದಿನಗಳ ಹಿಂದೆ ಕೊಳ್ಳೇಗಾಲದಲ್ಲಿ ಕಾಂಗ್ರೆಸ್ ನಾಯಕರು ಒಂದು ಬಹಿರಂಗ ಸಭೆ ನಡೆಸಿದ್ದರು. ಅದರಲ್ಲಿ ಮಾಜಿ ಶಾಸಕ ಜಿ.ಎನ್ ನಂಜುಂಡಸ್ವಾಮಿ ನಮ್ಮ ಬಿಜೆಪಿ ಅಭ್ಯರ್ಥಿ ವಿರುದ್ಧ ಬಹಳ ಕೀಳಾಗಿ ಮಾತನಾಡಿದ್ದಾರೆ. ಅಲ್ಲದೇ ನನ್ನ ಮೇಲೆ ಭ್ರಷ್ಟ್ರಾಚಾರದ ಆರೋಪ ಮಾಡಿದ್ದಾರೆ. ಈ ಬಗ್ಗೆ ನನಗೆ ಗೊತ್ತಿರಲಿಲ್ಲ. ವಿಡಿಯೋ ನೋಡಿದ ಮೇಲೆ ನಂಜುಂಡಸ್ವಾಮಿ ಮಾತನಾಡಿರುವುದು ಗೊತ್ತಾಯಿತು. ಇದು ನನ್ನ ಮಾನಹಾನಿ ಮಾಡುವಂತಹ ಹೇಳಿಕೆ. ಆದ್ದರಿಂದ ಕಾನೂನುಬದ್ಧವಾಗಿ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದೇನೆ" ಎಂದರು.
ಮಾರ್ಚ್ 28ರಂದು ಕೊಳ್ಳೇಗಾಲದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಜಿ.ಎನ್.ನಂಜುಂಡಸ್ವಾಮಿ ಮಾತನಾಡುತ್ತಾ, "ಎನ್.ಮಹೇಶ್ ಅವರು ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿಗಳಿಗೆ ಏನೂ ಮಾಡಿಲ್ಲ ಎನ್ನುತ್ತಿದ್ದಾರೆ. ಅವರು ಶಿಕ್ಷಣ ಸಚಿವರಾಗಿದ್ದಾಗ ಶೂ, ಸಾಕ್ಸ್‌ನಲ್ಲಿ 30 ಕೋಟಿ ರೂ. ಲೂಟಿ ಹೊಡೆದಿದ್ದಾರೆ. ಅವರಿಂದ ನಾವೇನೂ ಕಲಿಯಬೇಕಿಲ್ಲ" ಎಂದಿದ್ದರು. ಈ ಕಾರ್ಯಕ್ರಮದಲ್ಲಿ ವೆಂಕಟೇಶ್, ಮಹಾದೇವಪ್ಪ ಕೂಡ ಇದ್ದರು.