ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲು ಕಾರ್ಯಕ್ರಮ ರೂಪಿಸಿದೆ. ಹೆಣ್ಣುಮಕ್ಕಳ ಲಿಂಗಾನುಪಾತ ಹೆಚ್ವಿಸುವುದರ ಜೊತೆಗೆ ಹೆಣ್ಣುಭ್ರೂಣ ಹತ್ಯೆ ಹೋಗಲಾಡಿಸಲು ಆರೋಗ್ಯ ಇಲಾಖೆ ಹಲವು ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ.
ಈ ಬಾರಿಯ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯನ್ನು ರಾಜ್ಯದ ಎಲ್ಲ ಸರಕಾರಿ ಜಿಲ್ಲಾಸ್ಪತ್ರೆಗಳಲ್ಲಿ ಸಂಭ್ರಮದಿಂದ ಆಚರಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಆಸ್ಪತ್ರೆಗಳನ್ನು ಪಿಂಕ್ ಲೈಟಿಂಗ್ನಿಂದ ಸಿಂಗರಿಸಲು ತಿಳಿಸಲಾಗಿದೆ. ಅಲ್ಲದೇ ಇಂದು ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಹೆಣ್ಣುಮಕ್ಕಳಿಗೆ ಸ್ಪೆಷಲ್ ಗಿಫ್ಟ್ ನೀಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. 1000 ರೂ. ಬೆಲೆಯ ಮಕ್ಕಳ ಕಿಟ್ಸ್ಗಳನ್ನು ಜನಿಸಿದ ಹೆಣ್ಣು ಮಗುವಿಗೆ ಸರಕಾರದಿಂದ ಉಚಿತ ಉಡುಗೊರೆಯಾಗಿ ನೀಡಲು ಜಿಲ್ಲೆಗಳ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಆದೇಶಿಸಲಾಗಿದೆ.
ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ. ಹೆಣ್ಣು ಮಕ್ಕಳ ಸುರಕ್ಷತೆ ಹಾಗೂ ಅವರಿಗೆ ಆರೋಗ್ಯ ಸೇವೆ ಒದಗಿಸಲು ಇಲಾಖೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಸಬಲೀಕರಣಕ್ಕೆ ಇಲಾಖೆ ಸದಾ ಬದ್ಧವಾಗಿದೆ.#NationalGirlChildDay #WomenSafety #EmpowerHer #HealthforAll pic.twitter.com/wz0Cij29FR
— Karnataka Health Department (@DHFWKA) January 24, 2025
ಹೆಣ್ಣುಮಕ್ಕಳ ದಿನಕ್ಕೆ ಶುಭ ಕೋರಿದ ಸಚಿವ ಗುಂಡೂರಾವ್: ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಗೆ ಶುಭಕೋರಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಹೆಣ್ಣುಮಕ್ಕಳ ರಕ್ಷಣೆಗೆ ಸರ್ಕಾರ ಬದ್ಧ ಎಂದಿದ್ದಾರೆ. ಹೆಣ್ಣುಮಕ್ಕಳ ಆರೋಗ್ಯ ಕಾಪಾಡುವ ವಿಚಾರದಲ್ಲಿ ಆರೋಗ್ಯ ಇಲಾಖೆ ಹಲವು ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಯೋಜನೆ ಹೆಣ್ಣುಮಕ್ಕಳ ರಕ್ತ ಹೀನತೆ ಹೋಗಲಾಡಿಸುವಲ್ಲಿ ಮಹತ್ವದ ಯೋಜನೆಯಾಗಿದೆ. ಶುಚಿ ಯೋಜನೆ, ಜನನಿ ಸುರಕ್ಷಾ ಯೋಜನೆಗಳನ್ನು ಜಾರಿಗೊಳಿಸದೆ. ವಿಶೇಷವಾಗಿ ಹೆಣ್ಣು ಭ್ರೂಣ ಹತ್ಯೆ ನಡೆಸುವವರ ವಿರುದ್ಧ ಕೇಸ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.
ಜನರಲ್ಲಿ ಜಾಗೃತಿ ಮೂಡಿಸಲು ಈ ದಿನದ ಆಚರಣೆ: ಸಮಾಜದಲ್ಲಿ ಹೆಣ್ಣು ಮಗು ಎದುರಿಸುತ್ತಿರುವ ಎಲ್ಲಾ ಅಸಮಾನತೆಗಳ ಬಗ್ಗೆ ದಿನಾಚರಣೆಯ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಹೆಣ್ಣು ಹುಟ್ಟುವ ಮೊದಲೇ ಎದುರಿಸುವ ಲಿಂಗ ತಾರತಮ್ಯವು ಒಂದು ಪ್ರಚಲಿತ ಸಮಸ್ಯೆಯಾಗಿದೆ. ಇಂದಿಗೂ ಸಹ ಹೆಚ್ಚಿನ ಜನರು ಹೆಣ್ಣು ಮಕ್ಕಳಿಗಿಂತ ಗಂಡು ಮಕ್ಕಳನ್ನು ಹೊಂದಬೇಕೆಂದು ನಂಬುತ್ತಾರೆ. ಇದು ಸರಿಯಲ್ಲ. ಹೆಣ್ಣನ್ನು ಪೂಜ್ಯ ಭಾವನೆಯಿಂದ ನೋಡಬೇಕು. ಲಿಂಗ ಪತ್ತೆ ಮತ್ತು ಗರ್ಭಪಾತ ನಡೆಸುವ ಎಲ್ಲಾ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಮತ್ತು ಹೆಣ್ಣು ಮಗುವಿನ ಮೌಲ್ಯದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ PCPNDT ಕಾಯ್ದೆಯನ್ನು ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಮ್ಮ ಶುಭಾಶಯದಲ್ಲಿ ತಿಳಿಸಿದ್ದಾರೆ.
ಹೆಣ್ಣುಭ್ರೂಣ ಹತ್ಯೆ ತಡೆಗೆ ಸರ್ಕಾರದ ಕ್ರಮಗಳು:
- ರಾಜ್ಯದಲ್ಲಿ ಇದುವರೆಗೂ ಪಿ.ಸಿ&ಪಿ.ಎನ್.ಡಿ.ಟಿ. ಕಾಯ್ದೆಯನ್ನು ಉಲ್ಲಂಘಿಸಿರುವ ಸ್ಕ್ಯಾನಿಂಗ್ ಸೆಂಟರ್/ಮಾಲೀಕರು/ವೈದ್ಯರ ವಿರುದ್ಧ ಒಟ್ಟು 136 ಪ್ರಕರಣಗಳನ್ನು ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದ್ದು, 74 ಪ್ರಕರಣಗಳು ದಂಡ ವಿಧಿಸಿ ಖುಲಾಸೆಗೊಂಡಿವೆ. 62 ಪ್ರಕರಣಗಳು ನ್ಯಾಯಾಲಯದಲ್ಲಿ ವಿವಿಧ ಹಂತದಲ್ಲಿ ವಿಚಾರಣೆಗೆ ಬಾಕಿಯಿವೆ.
- ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಮಾಡುವಂತಹ ಸ್ಕ್ಯಾನಿಂಗ್ ಸೆಂಟರ್/ಆಸ್ಪತ್ರೆ/ವೈದ್ಯರು/ದಲ್ಲಾಳಿಗಳು/ಗರ್ಭಿಣಿಯರ ಸಂಬಂಧಿಕರ ವಿರುದ್ಧ ಮಾಹಿತಿ ನೀಡಿ, ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಸಹಕರಿಸುವ ಮಾಹಿತಿದಾರರಿಗೆ ರಾಜ್ಯ ಸರ್ಕಾರದಿಂದ 1,00,000 ರೂ. ಬಹುಮಾನ ಘೋಷಿಸಲಾಗಿದೆ.
- ಪಿ.ಸಿ&ಪಿ.ಎನ್.ಡಿ.ಟಿ. ಕಾಯ್ದೆಯಡಿ ಬರುವ ಎಲ್ಲಾ ಶಾಸನಬದ್ಧ ಸಮಿತಿಗಳನ್ನು ರಾಜ್ಯ ಮತ್ತು ಜಿಲ್ಲೆಗಳಲ್ಲಿ ರಚನೆ ಮಾಡಲಾಗಿದೆ.
- ರಾಜ್ಯದಿಂದ 'ಬಾಲಿಕಾ' ಆನ್‌ಲೈನ್ ಸಾಫ್ಟ್ವೇರ್ ಮುಖಾಂತರ ಎಲ್ಲ ಸ್ಕ್ಯಾನಿಂಗ್ ಸೆಂಟರ್ಗಳನ್ನು ಕಡ್ಡಾಯವಾಗಿ ನೋಂದಣಿ ಮತ್ತು ನವೀಕರಣ ನಡೆಸಲಾಗುತ್ತಿದೆ.
- ಅಲ್ಟ್ರಾಸೌಂಡ್ ತಯಾರಕರು, ಮಾರಾಟಗಾರರು, ರಿಪೇರಿ ಮಾಡುವವರನ್ನು ರಾಜ್ಯ ಮಟ್ಟದಲ್ಲಿ ನೋಂದಾಯಿಸಿ, ತ್ರೈಮಾಸಿಕ ವರದಿಯನ್ನು ಪಡೆಯಲಾಗುತ್ತಿದೆ.
- ಪಿ.ಸಿ&ಪಿ.ಎನ್.ಡಿ.ಟಿ. ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಆಯುಕ್ತರ ಅಧ್ಯಕ್ಷತೆಯಲ್ಲಿ ರಾಜ್ಯ ಕಾರ್ಯಪಡೆಯನ್ನು ರಚಿಸಲಾಗಿದೆ.
- ಗುಪ್ತಕಾರ್ಯಚರಣೆಯನ್ನು ಕೈಗೊಳ್ಳುವ ಮೂಲಕ ಹೆಣ್ಣು ಭ್ರೂಣಹತ್ಯೆ ನಡೆಸುವವರನ್ನು ಸೆರೆಹಿಡಿದು ಪೊಲೀಸರ ವಶಕ್ಕೆ ನೀಡಲಾಗಿದೆ.
- ಪ್ರತಿ ವರ್ಷ ಜನವರಿ 24 ರಂದು ಜಿಲ್ಲೆಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಸದರಿ ದಿನದಂದು ಜನನವಾಗಿರುವ ಹೆಣ್ಣು ಮಗುವಿನ ತಾಯಂದಿರಿಗೆ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಗುತ್ತಿದೆ.
ಇದನ್ನೂ ಓದಿ: ಪಿತ್ರಾರ್ಜಿತ ಆಸ್ತಿಯಲ್ಲಿ ಮೃತ ಹೆಣ್ಣು ಮಕ್ಕಳಿಗೂ ಸಮಾನ ಪಾಲು: 2024ರಲ್ಲಿ ಹೈಕೋರ್ಟ್ನ ಪ್ರಮುಖ ತೀರ್ಪುಗಳು