ಕೋಲಾರ: ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು ಅವರನ್ನು ಗೆಲ್ಲಿಸಲೇ ಬೇಕೆಂದು ಎರಡೂ ಪಕ್ಷಗಳ ನಾಯಕರು ಕಸರತ್ತು ನಡೆಸುತ್ತಿದ್ದಾರೆ. ಇದರ ಭಾಗವಾಗಿ ಇಂದು ಮಾಜಿ ಸಚಿವ ಜಿ.ಟಿ.ದೇವೇಗೌಡ ನೇತೃತ್ವದ ತಂಡ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿದ್ದ ಮಾಲೂರಿನ ಹೂಡಿ ವಿಜಯ್ ಕುಮಾರ್ ಮನೆಗೆ ಭೇಟಿ ನೀಡಿ, ಎನ್ಡಿಎ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕೋರಿದರು. ಇದಕ್ಕೆ ವಿಜಯ್ ಕುಮಾರ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಹೂಡಿ ವಿಜಯ್ ಕುಮಾರ್ ಅವರಿಗೆ ಕೊನೆ ಕ್ಷಣದಲ್ಲಿ ಟಿಕೆಟ್ ಕೈ ತಪ್ಪಿತ್ತು. ನಂತರ ಸ್ವಾಭಿಮಾನಿ ಜನತಾ ಪಕ್ಷದ ಹೆಸರಿನಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅವರು ಕೆಲವೇ ಮತಗಳ ಅಂತರದಲ್ಲಿ ಸೋಲುಂಡಿದ್ದರು. ಈ ಹಿನ್ನೆಲೆಯಲ್ಲಿ ಮೈತ್ರಿ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಜೆಡಿಎಸ್ ನಾಯಕರು, ವಿಜಯ್ ಕುಮಾರ್ ಅವರಿಗೆ ಕೇಳಿಕೊಂಡಿದ್ದಾರೆ. ಈ ಸಂಬಂಧ ಮಾಲೂರು ಮುಖಂಡರ ಸಭೆ ಕರೆದಿದ್ದ ವಿಜಯ್ ಕುಮಾರ್, ಮುಖಂಡರೊಂದಿಗೆ ಚರ್ಚಿಸಿ ಬೆಂಬಲ ಘೋಷಿಸುವುದಾಗಿ ತಿಳಿಸಿದ್ದಾರೆ.
ಮಾಜಿ ಸಚಿವ ಜಿ.ಟಿ.ದೇವೇಗೌಡ ಮಾತನಾಡಿ, ಸ್ವಾಭಿಮಾನಿ ಜನತಾ ಪಕ್ಷದ ಹೂಡಿ ವಿಜಯ್ ಕುಮಾರ್ ಅವರು ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ. ಅವರು ನಮ್ಮ ಮುಂದೆ ಯಾವುದೇ ಬೇಡಿಕೆಯನ್ನು ಇಟ್ಟಿಲ್ಲ. ವಿಧಾನಸಭಾ ಚುನಾವಣೆಯಲ್ಲಿ 50 ಸಾವಿರ ಮತ ಪಡೆದ ನಾಯಕನ ಬೆಂಬಲ ಕೇಳುವುದು ನಮ್ಮ ಕರ್ತವ್ಯ. ಆ ಕೆಲಸವನ್ನು ನಾವು ಮಾಡಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ: ಆರ್ಎಸ್ಎಸ್ ಬಗ್ಗೆ ತಿಳಿದುಕೊಳ್ಳದೆ ಮಾತನಾಡಿರುವುದಕ್ಕೆ ಕ್ಷಮಿಸಿ: ಪ್ರಜ್ವಲ್ ರೇವಣ್ಣ - Prajwal Revanna