ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಮಂಡಿಸಿದ ಕರ್ನಾಟಕ ಬಜೆಟ್-2024 ರಲ್ಲಿ ಹಲವಾರು ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಇಂದಿನ ಬಜೆಟ್ನಲ್ಲಿ ಘೋಷಣೆಯಾದ ಹೊಸ ಯೋಜನೆಗಳ ವಿವರ ಇಲ್ಲಿದೆ.
ಕರ್ನಾಟಕ ರೈತ ಸಮೃದ್ಧಿ ಯೋಜನೆ: ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ, ಸಮಗ್ರ ಕೃಷಿಯನ್ನು ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿಗೊಳಿಸುವವುದಾಗಿ ಬಜೆಟ್ನಲ್ಲಿ ಘೋಷಿಸಲಾಗಿದೆ.
ನಮ್ಮ ಮಿಲ್ಲೆಟ್ ಯೋಜನೆ: ಈ ಯೋಜನೆಯಡಿಯಲ್ಲಿ ಸಂಸ್ಕರಿಸಿದ ಸಿರಿಧಾನ್ಯಗಳು ಹಾಗೂ ಮೌಲ್ಯವರ್ಧಿತ ಸಿರಿಧಾನ್ಯ ಉತ್ಪನ್ನಗಳನ್ನು ಅಗ್ರಿ-ಟೆಕ್ ಕಂಪನಿಗಳು ಮತ್ತು ರಿಟೇಲ್ ಚೈನ್ಗಳ ಸಹಭಾಗಿತ್ವದೊಂದಿಗೆ ಕೈಗೆಟುಕುವ ದರದಲ್ಲಿ ದೊರಕಿಸಲು ಅನುವು ಮಾಡಿಕೊಡಲಾಗುವುದು.
ಕಿಸಾನ್ ಮಾಲ್ಗಳ ಸ್ಥಾಪನೆ: ತೋಟಗಾರಿಕೆಗೆ ಸಂಬಂಧಿಸಿದ ತಾಂತ್ರಿಕ ಸಲಹೆ, ಮಾರುಕಟ್ಟೆ ಸಂಪರ್ಕ, ಬೇಸಾಯ ಪರಿಕರಗಳು ಮತ್ತು ಉತ್ಪನ್ನಗಳನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಆಯ್ದ ಜಿಲ್ಲೆಗಳಲ್ಲಿ ಕಿಸಾನ್ ಮಾಲ್ಗಳನ್ನು ಸ್ಥಾಪಿಸಲಾಗುವುದು.
ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ ಸ್ಥಾಪನೆ: ರಾಜ್ಯದಲ್ಲಿ 40 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುತ್ತಿರುವ ಪುಷ್ಪ ಬೆಳೆಗಳ ಮಾರಾಟ ಮತ್ತು ರಫ್ತನ್ನು ಉತ್ತೇಜಿಸಲು ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು.
ಸ್ಪೈಸ್ ಪಾರ್ಕ್ ಸ್ಥಾಪನೆ: ರಾಜ್ಯದಲ್ಲಿ ಸಾಂಬಾರು ಪದಾರ್ಥ ಬೆಳೆಗಳನ್ನು ಬೆಳೆಯುವ ರೈತರನ್ನು ಪ್ರೋತ್ಸಾಹಿಸಲು ಹಾಗೂ ಬೆಳೆಗಳ ರಫ್ತನ್ನು ಉತ್ತೇಜಿಸಲು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ಪೈಸ್ ಪಾರ್ಕನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು.
ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆ ಯೋಜನೆ: ಬೆಂಗಳೂರಿನ ದಾಸನಪುರ, ಮೈಸೂರು, ಹುಬ್ಬಳ್ಳಿ, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಳಗಾವಿಯ ಮಾರುಕಟ್ಟೆಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಬಯೋ ಸಿಎನ್ಜಿ ಪ್ಲಾಂಟ್ ಸ್ಥಾಪಿಸುವ ಮೂಲಕ ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆಗಳನ್ನಾಗಿ ಪರಿವರ್ತಿಸಲಾಗುವುದು.
ಸೋಲಾರ್ ಪಾರ್ಕ್ಗಳ ಸ್ಥಾಪನೆ: ಪಾವಗಡ ಸೋಲಾರ್ ಪಾರ್ಕ್ ಮಾದರಿಯಲ್ಲಿ ಜಲಸಂಪನ್ಮೂಲ ಇಲಾಖೆಯ ಮಾಲೀಕತ್ವವಿರುವ ಜಮೀನಿನಲ್ಲಿ ಮತ್ತು ಜಲಾಶಯಗಳ ಹಿನ್ನೀರಿನಲ್ಲಿ ಸೂಕ್ತ ಮಾದರಿಯ ಸೋಲಾರ್ ಪಾರ್ಕ್ಗಳನ್ನು ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು.
ಗಣಿತ ಗಣಕ ಕಾರ್ಯಕ್ರಮ: 3 ರಿಂದ 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗಣಿತ ವಿಷಯದಲ್ಲಿ ಆಸಕ್ತಿ ಮೂಡಿಸಿ ಸಾಮರ್ಥ್ಯ ಹೆಚ್ಚಿಸಲು ಜೆ-ಪಾಲ್ ಸಂಸ್ಥೆಯ ಸಹಯೋಗದಲ್ಲಿ ಗಣಿತ-ಗಣಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.
ನಾವು-ಮನುಜರು ಸಂವಾದ ಕಾರ್ಯಕ್ರಮ: ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯ ವಿದ್ಯಾಕೇಂದ್ರಗಳನ್ನಾಗಿ ರೂಪಿಸಲು ನಾವು-ಮನುಜರು ಎಂಬ ಹೆಸರಿನಲ್ಲಿ ಎಲ್ಲಾ ಶಾಲಾ ಕಾಲೇಜುಗಳಲ್ಲಿ ವಾರಕ್ಕೆ ಎರಡು ಗಂಟೆಗಳ ಕಾಲ ವಿಚಾರ-ವಿಮರ್ಶೆ ಮತ್ತು ಸಂವಾದ ಚಟುವಟಿಕೆಗಳನ್ನು ಒಳಗೊಂಡ ತರಗತಿಗಳನ್ನು ನಡೆಸಲಾಗುವುದು.
ಡೇ-ಕೇರ್ ಕಿಮೋಥೆರಪಿ ಕೇಂದ್ರಗಳ ಸ್ಥಾಪನೆ: ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಮತ್ತು ನಿರಂತರ ಅನುಸರಣೆಗಾಗಿ ಬಹುತೇಕ ಜಿಲ್ಲೆಗಳಲ್ಲಿ ಕಿಮೋಥೆರಪಿ ಚಿಕಿತ್ಸಾ ಕೇಂದ್ರಗಳು ಲಭ್ಯವಿರದ ಕಾರಣ ಸರ್ಕಾರವು 20 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಒಂದು ಡೇ-ಕೇರ್ ಕಿಮೋಥೆರಪಿ ಕೇಂದ್ರ ಸ್ಥಾಪಿಸಲಾಗುವುದು.
ಹೆಲ್ತ್ ರಿಪಾಸಿಟರಿ ಆರಂಭ: ಸಾರ್ವಜನಿಕರ ಎಲ್ಲಾ ಆರೋಗ್ಯ ಮಾಹಿತಿಯನ್ನು ಡಿಜಿಟಲೀಕರಣಗೊಳಿಸುವ ಸಂಬಂಧ ಡಿಜಿಟಲ್ ಹೆಲ್ತ್ ಸೊಸೈಟಿಯನ್ನು ಆರಂಭಿಸಲು ಈಗಾಗಲೇ ಕ್ರಮವಹಿಸಲಾಗಿರುತ್ತದೆ. ಇದರಡಿಯಲ್ಲಿ ಒಂದು ಹೆಲ್ತ್ ರಿಪಾಸಿಟರಿಯನ್ನು ಸೃಜಿಸಿ ಸಾರ್ವಜನಿಕರ ಚಿಕಿತ್ಸಾ ಮಾಹಿತಿಯು ಒಂದೇ ಮೂಲದಿಂದ ಎಲ್ಲಾ ಆಸ್ಪತ್ರೆಗಳು ಮತ್ತು ವೈದ್ಯರಿಗೆ ಲಭ್ಯವಾಗುವಂತೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ಆಸ್ಪತ್ರೆಗಳಿಗೆ ಶಿಫಾರಸ್ಸು ಮಾಡುವುದನ್ನು ಮತ್ತು ಚಿಕಿತ್ಸಾ ಸಮಯವನ್ನು ಸ್ವಯಂಚಾಲಿತವಾಗಿ ನಿಗದಿಪಡಿಸುವ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುವುದು.
ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರಾಚ್ಯುಟಿ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ನೀಡಲಾಗುವುದು.
ಉಚಿತ JEE- NEET ತರಬೇತಿ: ದೇಶದ ಪ್ರತಿಷ್ಠಿತ ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಪ್ರಸಕ್ತ ಸಾಲಿನಲ್ಲಿ 500 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಗಳಿಂದ ಎರಡು ವರ್ಷಗಳ JEE- NEET ತರಬೇತಿ ಉಚಿತವಾಗಿ ನೀಡಲಾಗುವುದು.
ಅನ್ನ ಸುವಿಧಾ ಯೋಜನೆ: ಈ ಹೊಸ ಯೋಜನೆಯಡಿಯಲ್ಲಿ ಹೋಂ ಡೆಲಿವರಿ ಆ್ಯಪ್ ಮೂಲಕ 80 ವರ್ಷ ದಾಟಿದ ಹಿರಿಯ ನಾಗರಿಕರು ಮಾತ್ರ ಇರುವ ಮನೆಯ ಬಾಗಿಲಿಗೆ ಆಹಾರ ಧಾನ್ಯಗಳನ್ನು ತಲುಪಿಸುವ ಸಾಮಾಜಿಕ ಭದ್ರತಾ ಯೋಜನೆಯನ್ನು ಜಾರಿಗೆ ತರಲಾಗುವುದು.
ಪ್ರಗತಿ ಪಥ ಯೋಜನೆ: ಗ್ರಾಮೀಣ ಭಾಗದ ರಸ್ತೆ ಸಂಪರ್ಕ ಜಾಲವನ್ನು ವ್ಯವಸ್ಥಿತವಾಗಿ ಮತ್ತು ಗುಣಾತ್ಮಕವಾಗಿ ಅಭಿವೃದ್ಧಿಪಡಿಸಲು ಪ್ರಗತಿ ಪಥ ಯೋಜನೆಯನ್ನು ಬಾಹ್ಯ ನೆರವಿನೊಂದಿಗೆ ಪ್ರಾರಂಭಿಸಲಾಗುವುದು.
ಕಲ್ಯಾಣ ಪಥ ಯೋಜನೆ: ಈ ಯೋಜನೆಯಡಿ ಕಲ್ಯಾಣ ಕರ್ನಾಟಕದ 38 ಗ್ರಾಮೀಣ ವಿಧಾನ ಸಭಾ ಕ್ಷೇತ್ರಗಳಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಮಾದರಿಯಲ್ಲಿ ಒಟ್ಟು 1150 ಕಿಮೀ ರಸ್ತೆಗಳನ್ನು 1000 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.
ಹೊಂಬೆಳಕು ಸೋಲಾರ್ ದೀಪ ಯೋಜನೆ: 50 ಗ್ರಾಮ ಪಂಚಾಯಿತಿಗಳಲ್ಲಿ ಹೊಂಬೆಳಕು ಕಾರ್ಯಕ್ರಮದಡಿ 25 ಕೋಟಿ ರೂ.ಗಳ ವೆಚ್ಚದಲ್ಲಿ ಸೋಲಾರ್ ದೀಪಗಳನ್ನು ಅಳವಡಿಸಲಾಗುವುದು.
ಆರೈಕೆ - ಉಪಶಮನ ಕೇಂದ್ರಗಳ ಆರಂಭ: ಆಯ್ದ 100 ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮಸ್ಥರ ಸಹಭಾಗಿತ್ವದೊಂದಿಗೆ ಹಿರಿಯ ನಾಗರಿಕರ ಆರೈಕೆ ಮತ್ತು ಚಿಕಿತ್ಸೆಯನ್ನು ನಿರ್ವಹಿಸಲು ಆರೈಕೆ-ಉಪಶಮನ ಕೇಂದ್ರಗಳನ್ನು ಆರಂಭಿಸಲಾಗುವುದು.
ಬೆಂಗಳೂರು ಬಿಸಿನೆಸ್ ಕಾರಿಡಾರ್: ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವುದರ ಜೊತೆಗೆ ಬೆಂಗಳೂರಿನ ಆರ್ಥಿಕ ಚಟುವಟಿಕೆಗಳು ದೊಡ್ಡ ಪ್ರಮಾಣದಲ್ಲಿ ವೃದ್ಧಿಸಲು ಸಹಕಾರಿಯಾಗುವಂತೆ ಪೆರಿಫೆರಲ್ ರಿಂಗ್ ರೋಡ್ ಅನ್ನು ಬೆಂಗಳೂರು ಬಿಸಿನೆಸ್ ಕಾರಿಡಾರ್ ಎಂಬ ಹೊಸ ಪರಿಕಲ್ಪನೆಯಲ್ಲಿ ಪರಿಚಯಿಸಲಾಗುವುದು.
ನಮ್ಮ ಮೆಟ್ರೊ ಹಂತ-3ಎ: ನಮ್ಮ ಮೆಟ್ರೊ ಹಂತ-3ಎ ಅಡಿಯಲ್ಲಿ ಸರ್ಜಾಪುರದಿಂದ ಅಗರ, ಕೋರಮಂಗಲ ಡೈರಿ ವೃತ್ತ, ಮೇಖ್ರಿ ವೃತ್ತ ಮೂಲಕ ಹೆಬ್ಬಾಳವನ್ನು ಸಂಪರ್ಕಿಸುವ ಮಾರ್ಗ ನಿರ್ಮಾಣ ಕುರಿತು ಡಿಪಿಆರ್ ಕರಡು ಸಿದ್ಧಪಡಿಸಲಾಗಿದ್ದು, ಕೇಂದ್ರ ಸರ್ಕಾರದ ಅನುಮೋದನೆಗೆ ಸಲ್ಲಿಸಲಾಗುವುದು.
ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ: ಬಸವಣ್ಣನವರ ಜನ್ಮಸ್ಥಳವಾದ ಬಸವನ ಬಾಗೇವಾಡಿಯ ಅಭಿವೃದ್ಧಿಗೆ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗುವುದು.
ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಕಡ್ಡಾಯ: ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿದ್ದು, ಎಲ್ಲಾ ಕಚೇರಿಗಳು, ಅಂಗಡಿ ಮುಂಗಟ್ಟುಗಳು, ವಿವಿಧ ವಾಣಿಜ್ಯೋದ್ಯಮ ಸಂಸ್ಥೆಗಳ ನಾಮಫಕಗಳಲ್ಲಿ ಶೇ 60ರಷ್ಟು ಕನ್ನಡವನ್ನು ಕಡ್ಡಾಯವಾಗಿ ಅಳವಡಿಸಲು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮದಡಿ ಜಾರಿಗೆ ತರಲಾಗುವುದು.
ಬೆಳಗಾವಿ ಕಾಂಗ್ರೆಸ್ ಅಧಿವೇಶನ ಸ್ಮರಣೆಗಾಗಿ ವಿಶೇಷ ಕಾರ್ಯಕ್ರಮ: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನವು ಈ ವರ್ಷ ಶತಮಾನದ ಮೈಲಿಗಲ್ಲನ್ನು ಪೂರ್ಣಗೊಳಿಸುತ್ತಿದೆ. ಮಹಾತ್ಮಾ ಗಾಂಧಿಜಿಯವರು ಅಧ್ಯಕ್ಷತೆ ವಹಿಸಿದ್ದ ಏಕೈಕ ಅಧಿವೇಶನ ಇದಾಗಿದೆ. ಈ ಅಧಿವೇಶನದ ಕೊಡುಗೆಯನ್ನು ಸ್ಮರಿಸಲು 2 ಕೋಟಿ ರೂ. ವೆಚ್ಚದಲ್ಲಿ ಬೆಳಗಾವಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗುವುದು. ಅಲ್ಲದೇ ಮಹಾತ್ಮಾ ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ ಸ್ಥಳಗಳಲ್ಲಿ ಸ್ಮರಣಾರ್ಥ ಫಲಕಗಳನ್ನು ಅಳವಡಿಸಲಾಗುವುದು.
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಉಚಿತ ಬಸ್ ಪಾಸ್ ಸೌಲಭ್ಯವನ್ನು ಪ್ರಾರಂಭಿಸಲಾಗುವುದು.
ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ: ಸಾಮಾಜಿಕ ನ್ಯಾಯದ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಪತ್ರಕರ್ತರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಸ್ಥಾಪಿಸಿ, ಪ್ರತಿ ವರ್ಷ ನೀಡಲಾಗುವುದು.
ಕಾರಾಗೃಹಗಳ ಭದ್ರತೆಗೆ ಕೃತಕ ಬುದ್ಧಿಮತ್ತೆ: ರಾಜ್ಯದ ಎಲ್ಲ ಕಾರಾಗೃಹಗಳ ಸುಗಮ ಆಡಳಿತ ಮತ್ತು ಭದ್ರತೆಗಾಗಿ 5 ಕೋಟಿ ರೂ. ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಾಂಶ, ಬ್ಯಾಗೇಕ್ ಸ್ಕ್ಯಾನರ್ ಮುಂತಾದ ಆಧುನಿಕ ಉಪಕರಣಗಳನ್ನು ಖರೀದಿಸಲಾಗುವುದು.