ಬೆಂಗಳೂರು: ಹೊಸ ವರ್ಷಾಚರಣೆಗೆ ರಾಜಧಾನಿ ಬೆಂಗಳೂರು ಸಜ್ಜಾಗುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಮಾದಕ ಪದಾರ್ಥ ಸರಬರಾಜುದಾರರ ವಿರುದ್ಧ ಬೆಂಗಳೂರು ನಗರ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. 3 ಪ್ರತ್ಯೇಕ ಪ್ರಕರಣಗಳಲ್ಲಿ ಮಾದಕ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ಆಫ್ರಿಕಾ ಪ್ರಜೆ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 86.50 ಲಕ್ಷ ಮೌಲ್ಯದ ವಿವಿಧ ಮಾದಕ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ.
ಸೋಲದೇವನಹಳ್ಳಿ ಪೊಲೀಸ್ ಠಾಣೆ: ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಆರ್.ಆರ್.ಕಾಲೇಜು ರಸ್ತೆಯಲ್ಲಿ ಎಂಡಿಎಂಎ ಕ್ರಿಸ್ಟಲ್ ಮಾರಾಟ ಮಾಡುತ್ತಿದ್ದ ಕೌಸ್ಸಿ ಜೂಲಿಯಸ್‌ನ್ ಗಿಸ್ಸನ್ ಎಂಬಾತನನ್ನು ಸಿಸಿಬಿಯ ಮಾದಕ ದ್ರವ್ಯ ನಿಗ್ರಹದಳದ ಪೊಲೀಸರು ಬಂಧಿಸಿದ್ದಾರೆ. 2017ರಲ್ಲಿ ಬ್ಯುಸಿನೆಸ್ ವೀಸಾ ಪಡೆದು ಭಾರತಕ್ಕೆ ಬಂದಿದ್ದ ಆರೋಪಿ ಮೋಜಿನ ಜೀವನ ಹಾಗೂ ಕಡಿಮೆ ಅವಧಿಯಲ್ಲಿ ಹೆಚ್ಚು ಹಣ ಗಳಿಸುವ ಉದ್ದೇಶದಿಂದ ತನ್ನ ಪರಿಚಯಸ್ಥರಿಂದ ಕಡಿಮೆ ಬೆಲೆಗೆ ಎಂಡಿಎಂಎ ಕ್ರಿಸ್ಟಲ್ ಖರೀದಿಸುತ್ತಿದ್ದ. ನಂತರ ಅವುಗಳನ್ನು ಗ್ರಾಂಗೆ 12 ರಿಂದ 15 ಸಾವಿರದಂತೆ ಕಾಲೇಜು ವಿದ್ಯಾರ್ಥಿಗಳು, ಐಟಿ/ಬಿಟಿ ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದ. ಬಂಧಿತನಿಂದ 515 ಗ್ರಾಂ ಎಂಡಿಎಂಎ ಕ್ರಿಸ್ಟಲ್, ಒಂದು ಎಲೆಕ್ಟ್ರಾನಿಕ್ ತೂಕದ ಯಂತ್ರ ಮತ್ತು ಒಂದು ಮೊಬೈಲ್ ಫೋನ್ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಮಾರತ್‌ಹಳ್ಳಿ ಪೊಲೀಸ್ ಠಾಣೆ: ಅಧಿಕ ಬೆಲೆಗೆ ಮಾರಾಟ ಮಾಡಲು ಗಾಂಜಾ ಸಂಗ್ರಹಿಸಿಟ್ಟಿದ್ದ ವ್ಯಕ್ತಿಯನ್ನು ಮಾರತ್‌ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಾರತ್ ಹಳ್ಳಿಯ ಕರಿಯಮ್ಮನ ಅಗ್ರಹಾರ ಬಳಿಯಿರುವ ಅಪಾರ್ಟ್‌ಮೆಂಟ್‌ನ ಹಿಂಭಾಗದ ಶೆಡ್‌ನಲ್ಲಿ ಆರೋಪಿ ಗಾಂಜಾವನ್ನು ಸಂಗ್ರಹಿಸಿಟ್ಟಿದ್ದ. ಆತನಿಂದ 7.50 ಲಕ್ಷ ಮೌಲ್ಯದ 10 ಕೆ.ಜಿ 370 ಗ್ರಾಂ ತೂಕದ ಗಾಂಜಾ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಪಿಗೆಹಳ್ಳಿ ಪೊಲೀಸ್ ಠಾಣೆ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ ತಂದಿದ್ದ ಆರೋಪಿ ಸಂಪಿಗೆಹಳ್ಳಿ ಮುಖ್ಯರಸ್ತೆಯ ನೀಲಗಿರಿ ತೋಪಿನ ಮುಂಭಾಗದ ರಸ್ತೆಯಲ್ಲಿ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ್ದ ಸಂಪಿಗೆಹಳ್ಳಿ ಠಾಣೆ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿತನಿಂದ ಒಟ್ಟು 2 ಲಕ್ಷ ಮೌಲ್ಯದ 4 ಕೆ.ಜಿ. ಗಾಂಜಾ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಹೊಸ ವರ್ಷಾಚರಣೆ ಟಾರ್ಗೆಟ್: ಬೆಂಗಳೂರಿಗೆ ಆಮದಾಗುತ್ತಿದ್ದ 3.25 ಕೋಟಿ ಮೌಲ್ಯದ ಗಾಂಜಾ ಜಪ್ತಿ