ಬೆಂಗಳೂರು: ಮುಂದಿನ ಸಚಿವ ಸಂಪುಟ ಸಭೆಯನ್ನು ಕಲಬುರಗಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಸೆಪ್ಟೆಂಬರ್ 17ರಂದು ಸಂಜೆ 4 ಗಂಟೆಗೆ ಕಲಬುರಗಿ ಮಿನಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ.
ಸೆ.17ರಂದು ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸಿಎಂ ಸಿದ್ದರಾಮಯ್ಯ, ಸಂಜೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶ ವ್ಯಾಪ್ತಿಯ ವಿಷಯಗಳನ್ನು ಆ ಸಚಿವ ಸಂಪುಟ ಸಭೆಯಲ್ಲಿ ಪರಿಗಣಿಸಲಾಗುತ್ತಿದೆ.
ಕಲಬುರಗಿಯಲ್ಲಿ ಈ ಹಿಂದೆ 2014ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲಾಗಿತ್ತು. ಇದೀಗ 10 ವರ್ಷಗಳ ಬಳಿಕ ಅವರ ನೇತೃತ್ವದಲ್ಲೇ ಮತ್ತೆ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ಆ ಮೂಲಕ ಕಲ್ಯಾಣ ಕರ್ನಾಟಕ ಕೇಂದ್ರೀಕೃತವಾಗಿ ತೀರ್ಮಾನಗಳನ್ನು ಕೈಗೊಳ್ಳಲಾಗುವುದು.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಈ ಭಾಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಉದ್ದೇಶದಿಂದ ಸಿಎಂ ಸಿದ್ದರಾಮಯ್ಯನವರಿಗೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲು ಮನವಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಹಾಗೂ ಸಚಿವರು ಸಭೆ ನಡೆಸಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ದಿಗಾಗಿ ಸಂವಿಧಾನ ಕಲಂ 371ಕ್ಕೆ ತಿದ್ದುಪಡಿ ತಂದು ಜೆ ಸೇರಿಸಿ ಶಿಕ್ಷಣ, ಉದ್ಯೋಗ ಹಾಗೂ ಅನುದಾನ ಒದಗಿಸಿಕೊಡುವುದಕ್ಕೆ ವಿಶೇಷ ಸ್ಥಾನಮಾನ ಜಾರಿಗೆ ಬಂದು ದಶಕಗಳು ಕಳೆದಿದೆ. ಈ ಸಂದರ್ಭದಲ್ಲಿ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿ ಈ ಭಾಗದ ಅಭಿವೃದ್ದಿಗೆ ಸಹಕಾರಿಯಾಗುವಂತ ಯೋಜನೆಗಳನ್ನು ಜಾರಿಗೊಳಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ಇಡೀ ಸಚಿವ ಸಂಪುಟ ಕಲಬುರಗಿಗೆ ಆಗಲಿಸಲಿದೆ ಎಂದು ತಿಳಿಸಿದ್ದಾರೆ.
ಈ ಹಿಂದೆ ಆರ್.ಗುಂಡೂರಾವ್ ಮುಖ್ಯಮಂತ್ರಿಯಾಗಿದ್ದಾಗ 1982ರಲ್ಲಿ ಮೊದಲ ಬಾರಿಗೆ ಕಲಬುರಗಿಯಲ್ಲಿ ಸಂಪುಟ ಸಭೆ ನಡೆಸಿದ್ದರು. ಬಳಿಕ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ 2008, 2009, 2010ರಲ್ಲಿ ಕಲಬುರಗಿಯಲ್ಲಿ ಸಂಪುಟ ಸಭೆ ನಡೆಸಲಾಗಿತ್ತು. ತದನಂತರ, ಮುಖ್ಯಮಂತ್ರಿಯಾಗಿದ್ದ ಜಗದೀಶ ಶೆಟ್ಟರ್ 2012ರಲ್ಲಿ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿದ್ದರು.
ಕಲ್ಯಾಣ ಕರ್ನಾಟಕ ಕಡೆಗಣನೆ ಆರೋಪಗಳನ್ನು ನಿವಾರಿಸುವ ನಿಟ್ಟಿನಲ್ಲಿ ಸರ್ಕಾರ ಕಲಬುರಗಿಯಲ್ಲಿ ಆಗಾಗ ಸಚಿವ ಸಂಪುಟ ಸಭೆ ನಡೆಸುತ್ತಿರುತ್ತದೆ.
ಇದನ್ನೂ ಓದಿ: ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತ ಲೋಕಾರ್ಪಣೆಗೊಳಿಸಿದ ಸಿಎಂ - yettinahole project inauguration