ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನೊಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿದ್ದ ಮಿನಾಜ್ ಅಲಿಯಾಸ್ ಸುಲೇಮಾನ್ ಎಂಬಾತನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ರಾಜ್ಯದಲ್ಲಿ ವಿಧ್ವಂಸಕ ಕೃತ್ಯಗಳಿಗೆ ಸಂಚು ರೂಪಿಸಿದ್ದ ಆರೋಪದಡಿ ಬಳ್ಳಾರಿಯ ಕೌಲ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾಗಿದ್ದ, ನಿಷೇಧಿತ ಪಿಎಫ್ಐ ಸಂಘಟನೆಯ ಸದಸ್ಯ ಮಿನಾಜ್ ಹಾಗೂ ಆತನ ಗುಂಪಿನ ಮತ್ತೋರ್ವ ಸದಸ್ಯ ಸಯ್ಯದ್ ಸಮೀರ್ ಎಂಬಾತನನ್ನು ಈ ಹಿಂದೆ ಎನ್ಐಎ ಬಂಧಿಸಿತ್ತು. ಬಳಿಕ ಆತನನ್ನು ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು. ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಕೆಲ ಮಹತ್ವದ ಸುಳಿವುಗಳು ಲಭ್ಯವಾದ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಬಳಿಕ ಬಳ್ಳಾರಿಗೆ ಆರೋಪಿ ತೆರಳಿರುವ ಶಂಕೆ: ಎನ್ಐಎಯಿಂದ ಪರಿಶೀಲನೆ
ಐಸಿಸ್ ಉಗ್ರರೊಂದಿಗೆ ಸಂಪರ್ಕ ಹೊಂದಿದ್ದ ಸುಲೇಮಾನ್ ರಾಜ್ಯದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ. ಇದಕ್ಕಾಗಿಯೇ ಯುವಕರನ್ನು ಭಯೋತ್ಪಾದಕ ಚಟುವಟಿಕೆಗಳಿಗೆ ಪ್ರೇರೇಪಿಸುತ್ತಿದ್ದ ಆರೋಪವಿದೆ. 2023ರ ಡಿಸೆಂಬರ್ 18ರಂದು ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಏಕಕಾಲದಲ್ಲಿ ಕಾರ್ಯಾಚರಣೆ ಕೈಗೊಂಡಿದ್ದ ಎನ್ಐಎ ಅಧಿಕಾರಿಗಳು ಮಿನಾಜ್ನನ್ನು ಬಂಧಿಸಿದ್ದರು. ಬಳಿಕ ಆತನನ್ನು ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರಿಸಲಾಗಿತ್ತು.
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಎನ್ಐಎ ಅಧಿಕಾರಿಗಳು ಮಹತ್ವದ ಸುಳಿವು ಆಧರಿಸಿ ಮಾರ್ಚ್ 6 ರಂದೇ ಶಂಕಿತ ಉಗ್ರ ಮಿನಾಜ್ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ನ್ಯಾಯಾಲಯಕ್ಕೆ ಬಾಡಿ ವಾರಂಟ್ ಸಲ್ಲಿಸಿ, ಆತನನ್ನು ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಕೆಫೆ ಸ್ಫೋಟ: ಬಿಎಂಟಿಸಿ ಬಸ್ನಲ್ಲಿ ಶಂಕಿತನ ಓಡಾಟದ ಮತ್ತೊಂದು ವಿಡಿಯೋ ಸೆರೆ