ಬೆಂಗಳೂರು: ಬಾಂಬ್ ಸ್ಫೋಟ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳ ತಂಡ ಇಂದು ರಾಮೇಶ್ವರಂ ಕೆಫೆಗೆ ಭೇಟಿ ನೀಡಿ ತನಿಖೆ ಆರಂಭಿಸಿದೆ. ಎನ್ಐಎ ಎಸ್.ಪಿ ನೇತೃತ್ವದ ಮೂವರು ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದು, ಕೆಫೆ ಸಿಬ್ಬಂದಿಯಿಂದ ಘಟನಾ ದಿನದ ವಿವರ ಪಡೆದುಕೊಂಡರು.
ಪ್ರಕರಣದ ತನಿಖೆಯನ್ನು ಸೋಮವಾರ ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ದಳಕ್ಕೆ ವರ್ಗಾಯಿಸಿತ್ತು. ಈಗಾಗಲೇ ಪ್ರತ್ಯೇಕ ಎಫ್‌ಐಆರ್ ದಾಖಲಿಸಿಕೊಂಡಿರುವ ಅಧಿಕಾರಿಗಳು ಎರಡು ದಿನಗಳಲ್ಲಿ ಅಧಿಕೃತವಾಗಿ ತನಿಖೆ ಕೈಗೆತ್ತಿಕೊಳ್ಳುವರು ಎಂದು ಪೊಲೀಸ್ ಉನ್ನತ ಮೂಲಗಳು ತಿಳಿಸಿವೆ.
ಘಟನೆಯ ಹಿನ್ನೆಲೆ: ವೈಟ್‌ಫೀಲ್ಡ್ ಪ್ರದೇಶದಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1ರಂದು ಬಾಂಬ್ ಸ್ಫೋಟ ಸಂಭವಿಸಿತ್ತು. 9 ಮಂದಿ ಗ್ರಾಹಕರು ಗಾಯಗೊಂಡಿದ್ದರು. ಸುಧಾರಿತ ಕಡಿಮೆ ತೀವ್ರತೆಯ ಬಾಂಬ್ ಇದಾಗಿದ್ದರಿಂದ ದೊಡ್ಡ ಹಾನಿ ಸಂಭವಿಸಿರಲಿಲ್ಲ.
ಘಟನೆಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಆರೋಪಿ ಬ್ಯಾಗ್‌ಸಮೇತ ಕೆಫೆಗೆ ಆಗಮಿಸಿ, ಬಳಿಕ ಒಬ್ಬನೇ ತೆರಳುತ್ತಿರುವುದು ಪತ್ತೆಯಾಗಿದೆ. ಈತನ ಚಹರೆಯನ್ನು ಪತ್ತೆ ಹಚ್ಚಲಾಗಿದೆ ಎಂದು ಪೊಲೀಸರು ಹೇಳಿದ್ದರು.
ಗೃಹ ಸಚಿವ ಜಿ.ಪರಮೇಶ್ವರ್ ಅವರು ಶಂಕಿತ ಆರೋಪಿಯನ್ನು ಶೀಘ್ರ ಬಂಧಿಸಲಾಗುವುದು, 8 ತಂಡಗಳನ್ನು ರಚಿಸಲಾಗಿದೆ. ತನಿಖೆ ಚುರುಕಿನಿಂದ ಸಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿದ್ದೇವೆ. ಭಯೋತ್ಪಾದನೆ ಸೇರಿ ಹಲವು ಕೋನಗಳಲ್ಲೂ ಸಿಸಿಬಿ ತನಿಖೆ ನಡೆಸುತ್ತಿದೆ. ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟಕ್ಕೂ ಇದಕ್ಕೂ ಸಂಬಂಧವಿದೆಯೇ ಎಂಬುದು ತಿಳಿದುಬಂದಿಲ್ಲ. ತಾಂತ್ರಿಕವಾಗಿ ಅಂಥದ್ದೇ ವಸ್ತು ಮತ್ತು ವ್ಯವಸ್ಥೆಯನ್ನು ಬಳಸಲಾಗಿದೆ ಎಂದು ಹೇಳಿದ್ದರು.
ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಎನ್ಐಎಗೆ ಹಸ್ತಾಂತರ: ತನಿಖೆ ಆರಂಭ