ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್ ಪತ್ನಿ ಟಬು ರಾವ್ ದಾಖಲಿಸಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದೆ. ಹಾಗೂ ಪ್ರಕರಣದ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಿದೆ.
ಪ್ರಕರಣದ ಹಿನ್ನೆಲೆ: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಬಿಜೆಪಿ ಕಾರ್ಯಕರ್ತನೊಬ್ಬನನ್ನು ವಿಚಾರಣೆ ನಡೆಸಿದ್ದುದರ ಕುರಿತು ಏಪ್ರಿಲ್ 6ರಂದು ವಿಜಯಪುರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಶಾಸಕ ಯತ್ನಾಳ್, ''ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನವೇ ಇದೆ'' ಎಂದು ಹೇಳಿಕೆ ನೀಡಿದ್ದರು. ಈ ಕುರಿತು ಟಬು ರಾವ್ ಅವರು ಯತ್ನಾಳ್ ವಿರುದ್ಧ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಹಾಗೂ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಖಾಸಗಿ ದೂರು ದಾಖಲಿಸಿದ್ದರು.
ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಭೇಟಿಯಾದ ಬಿ.ನಾಗೇಂದ್ರ; ಇ.ಡಿ. ತನಿಖೆ, ಒತ್ತಡದ ಬಗ್ಗೆ ಸಮಾಲೋಚನೆ
ಟಬು ರಾವ್ ಸಲ್ಲಿಸಿದ್ದ ಖಾಸಗಿ ದೂರು ಮಾನ್ಯ ಮಾಡಿದ್ದ ನ್ಯಾಯಾಲಯ, ಅಕ್ಟೋಬರ್ 16ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಶಾಸಕ ಯತ್ನಾಳ್ಗೆ ಸಮನ್ಸ್ ಜಾರಿಗೊಳಿಸಿತ್ತು. ಆದರೆ ಯತ್ನಾಳ್ ಅವತು ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ, ಮುಂದಿನ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಿದೆ.
ಇದನ್ನೂ ಓದಿ: ಬಿಜೆಪಿಯಿಂದ ಅವಹೇಳನಕಾರಿ ನಿಂದನೆ ಆರೋಪಿಸಿ ರಾಜ್ಯ ಮಹಿಳಾ ಆಯೋಗಕ್ಕೆ ಟಬು ರಾವ್ ದೂರು - Tabu Rao Complaint