ಬೆಂಗಳೂರು: ಖ್ಯಾತ ವಿದ್ವಾಂಸ, ಸಾಮಾಜಿಕ ಚಿಂತಕ ಹಾಗೂ ಬರಹಗಾರ ಪ್ರೊ.ಮುಜಾಫರ್ ಅಸ್ಸಾದಿ ಅವರು ಶುಕ್ರವಾರ ತಡರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 63 ವರ್ಷ ವಯಸ್ಸಾಗಿತ್ತು.
ಮುಜಾಫರ್ ಅಸ್ಸಾದಿ ಅವರು ಇತ್ತೀಚೆಗೆ ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅವರು ಪತ್ನಿ ಹಜ್ರಾ ಮಸ್ರೂನ್, ಪುತ್ರಿ ಮೆಹಕ್ ಮತ್ತು ಪುತ್ರ ಮೆಹದಿ ಅವರನ್ನು ಅಗಲಿದ್ದಾರೆ. ಅಸ್ಸಾದಿ ಅವರು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ರಾಜ್ಯಶಾಸ್ತ್ರ ವಿಭಾಗದ ಹಂಗಾಮಿ ಉಪಕುಲಪತಿ ಮತ್ತು ಡೀನ್ ಆಗಿ ಸೇವೆ ಸಲ್ಲಿಸಿದ್ದಾರೆ. ಬುಡಕಟ್ಟು ಜನಾಂಗದವರ ಸ್ಥಳಾಂತರ ಮತ್ತು ಪುನರ್ವಸತಿ ಕುರಿತು ಹೈಕೋರ್ಟ್ ನೇಮಿಸಿದ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಅವರು 'ದಕ್ಷಿಣ ಏಷ್ಯಾದಲ್ಲಿ ವಸಾಹತುಶಾಹಿ ಮತ್ತು ನಂತರದ ವಸಾಹತುಶಾಹಿ ಐಡೆಂಟಿಟಿ ಪಾಲಿಟಿಕ್ಸ್' ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ. ಇವರಿಗೆ 2011ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿತ್ತು.
ನಮ್ಮೆಲ್ಲರಿಗೆ ಪ್ರೀತಿಪಾತ್ರರಾಗಿದ್ದ ಹಿರಿಯ ವಿದ್ವಾಂಸ ಮತ್ತು ಸಾಮಾಜಿಕ ಚಿಂತಕ ಪ್ರೊ.ಮುಝಾಫರ್ ಅಸ್ಸಾದಿ ಅವರ ಅನಿರೀಕ್ಷಿತ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.
— Siddaramaiah (@siddaramaiah) January 4, 2025
ಪ್ರೊ.ಅಸ್ಸಾದಿ ಕೇವಲ ಒಬ್ಬ ಪ್ರಾಧ್ಯಾಪಕ ಆಗಿರಲಿಲ್ಲ. ನಾಡಿನ ಜನಪರ ಹೋರಾಟವನ್ನು ವೈಚಾರಿಕ ಚಿಂತನೆಯ ಮಾರ್ಗದರ್ಶನದೊಂದಿಗೆ ಮುನ್ನಡೆಸಿದವರು. ಅವರ ಅಗಲಿಕೆಯಿಂದ ನಾಡು ಬಡವಾಗಿದೆ,… pic.twitter.com/YmoM3y47Wo
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ: ಅಸ್ಸಾದಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ''ನಮ್ಮೆಲ್ಲರಿಗೆ ಪ್ರೀತಿಪಾತ್ರರಾಗಿದ್ದ ಹಿರಿಯ ವಿದ್ವಾಂಸ ಮತ್ತು ಸಾಮಾಜಿಕ ಚಿಂತಕ ಪ್ರೊ.ಮುಝಾಫರ್ ಅಸ್ಸಾದಿ ಅವರ ಅನಿರೀಕ್ಷಿತ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಪ್ರೊ.ಅಸ್ಸಾದಿ ಕೇವಲ ಒಬ್ಬ ಪ್ರಾಧ್ಯಾಪಕ ಆಗಿರಲಿಲ್ಲ. ನಾಡಿನ ಜನಪರ ಹೋರಾಟವನ್ನು ವೈಚಾರಿಕ ಚಿಂತನೆಯ ಮಾರ್ಗದರ್ಶನದೊಂದಿಗೆ ಮುನ್ನಡೆಸಿದವರು. ಅವರ ಅಗಲಿಕೆಯಿಂದ ನಾಡು ಬಡವಾಗಿದೆ, ಅವರ ಅಗಲಿಕೆಯಿಂದ ಸೃಷ್ಟಿಯಾಗಿರುವ ನಿರ್ವಾತವನ್ನು ತುಂಬುವುದು ಕಷ್ಟ'' ಎಂದಿದ್ಧಾರೆ.
''ನಿರಂತರವಾದ ಅಧ್ಯಯನ ಮತ್ತು ಸಂಶೋಧನೆಗಳಿಂದಾಗಿ ಕರ್ನಾಟಕದಲ್ಲಿ ಮಾತ್ರವಲ್ಲ ದೇಶ-ವಿದೇಶಗಳಲ್ಲಿಯೂ ತಮ್ಮ ವಿದ್ವತ್‌ಪೂರ್ಣ ಬರವಣಿಗೆ ಮತ್ತು ಉಪನ್ಯಾಸಗಳ ಮೂಲಕ ಜನಪ್ರಿಯರಾಗಿದ್ದ ಪ್ರೊ.ಅಸ್ಸಾದಿ ಅವರು ಕನ್ನಡದ ಹೆಮ್ಮೆಯ ಪುತ್ರ. ವರ್ಷಗಳಿಂದ ನನ್ನ ಹಿತೈಷಿಯಾಗಿ ರಾಜಕೀಯವಾಗಿ ಸದಾ ನನ್ನ ಏಳಿಗೆಯನ್ನು ಹಾರೈಸುತ್ತಿದ್ದ ಪ್ರೊ. ಅಸ್ಸಾದಿ ಅವರ ಸಾವು ವೈಯಕ್ತಿಕವಾಗಿಯೂ ನನ್ನ ಪಾಲಿಗೆ ದೊಡ್ಡ ನಷ್ಟ. ಪ್ರೊ.ಅಸ್ಸಾದಿ ಅವರನ್ನು ಕಳೆದುಕೊಂಡ ಅವರ ಕುಟುಂಬ ಮತ್ತು ಅಪಾರ ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ'' ಎಂದು ಸಿಎಂ ಶೋಕ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರು ಸ್ಥಳದಲ್ಲೇ ಸಾವು