ಹುಬ್ಬಳ್ಳಿ: ಇಲ್ಲಿನ ಉಣಕಲ್‌ನ ಅಚ್ಚವ್ವ ಕಾಲೋನಿಯಲ್ಲಿ ಸಂಭವಿಸಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಘಟನೆಯಲ್ಲಿ 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಅವರಲ್ಲಿ ಅಜ್ಜಾಸ್ವಾಮಿ ಉರ್ಪ್ ನಿಂಗಪ್ಪ ಬೇಪಾರಿ(58) ಹಾಗೂ ಸಂಜಯ ಸವದತ್ತಿ (20) ಎಂಬ ಇಬ್ಬರು ಗುರುವಾರ ಬೆಳಗಿನ ಜಾವ ಮೃತಪಟ್ಟಿದ್ದರು. ಬಳಿಕ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ರಾಜು ಮೂಗೇರಿ (21) ಕೂಡ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.
ಇನ್ನುಳಿದ ಗಾಯಾಳುಗಳಾದ ವಿನಾಯಕ ಬಾತಕೇರ (12), ಪ್ರಕಾಶ ಬಾರಕೇರ (42), ಮಂಜು ತೋರದ (22), ಪ್ರವೀಣ ಚಲವಾದಿ (24), ತೇಜಸ್ ರೆಡ್ಡಿ (26) ಮತ್ತು ಶಂಕರ ರಾಯನಗೌಡ್ರ (29) ಇವರುಗಳ ಸ್ಥಿತಿ ಇನ್ನೂ ಗಂಭೀರವಾಗಿದ್ದು, ಕೆಎಂಸಿಆರ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಸಿಲಿಂಡರ್ ಸ್ಫೋಟ: ಡಿಸೆಂಬರ್ 23ರಂದು ಎಂದಿನಂತೆ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ತಮ್ಮ ವ್ರತವನ್ನು ಮುಗಿಸಿ, ಅಯ್ಯಪ್ಪನಿಗೆ ಪೂಜೆ ಸಲ್ಲಿಸಿ ನಿದ್ರೆಗೆ ಜಾರಿದ್ದರು. ಈ ಸಂದರ್ಭದಲ್ಲಿ ಓರ್ವ ಅಯ್ಯಪ್ಪ ಮಾಲಾಧಾರಿಯ ಕಾಲು ಗ್ಯಾಸ್ ಸಿಲಿಂಡರ್ಗೆ ತಾಗಿದ ಪರಿಣಾಮ ಗ್ಯಾಸ್ ಸೋರಿಕೆಯಾಗಿದೆ. ದೇವರಿಗೆ ಹಚ್ಚಿದ್ದ ದೀಪ ಉರಿಯುತ್ತಿದ್ದರಿಂದ ಏಕಾಏಕಿ ಬೆಂಕಿ ಹೊತ್ತಿಕೊಂಡಿತ್ತು. ಘಟನೆಯಲ್ಲಿ 9 ಜನ ಅಯ್ಯಪ್ಪ ಮಾಲಾಧಾರಿಗಳಿಗೆ ಗಂಭೀರವಾಗಿ ಗಾಯಗಳಾಗಿದ್ದು, ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದರು. ಈ ಕುರಿತಂತೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಚಿಕಿತ್ಸೆ ಫಲಿಸದೇ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು!
5 ಲಕ್ಷ ರೂ. ಪರಿಹಾರ: ಗುರುವಾರ ಮೃತಪಟ್ಟ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಕುಟುಂಬಗಳಿಗೆ ರಾಜ್ಯ ಸರ್ಕಾರವು ಈಗಾಗಲೇ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಕೆಎಂಸಿಆರ್ಐ ಆಸ್ಪತ್ರೆಯ ಶವಗಾರಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಈ ಘೋಷಣೆ ಮಾಡಿದ್ದರು. ಮೃತರ ಕುಟುಂಬಕ್ಕೆ ಸಾಂತ್ವನ ಹೇಳುವ ಜೊತೆಗೆ ನಷ್ಟ ಎದುರಿಸುವ ಶಕ್ತಿ ಆ ದೇವರು ನೀಡಲಿ ಎಂದು ಅವರು ಪ್ರಾರ್ಥಿಸಿದ್ದರು.
ಇದನ್ನೂ ಓದಿ: ಸಿಲಿಂಡರ್ ಸ್ಫೋಟ ಪ್ರಕರಣ: ಮೃತಪಟ್ಟ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ 5 ಲಕ್ಷ ಪರಿಹಾರ