ಬೆಂಗಳೂರು: ತಮಿಳುನಾಡು ಕರಾವಳಿ ತೀರದಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತ ರಾಜ್ಯದ ಮೇಲೂ ಪರಿಣಾಮ ಬೀರಿದ್ದು, ಹವಾಮಾನ ಇಲಾಖೆ ದಕ್ಷಿಣ ಒಳನಾಡಿನ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದೆ.
ನಾಳೆ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇದೇ ಭಾಗದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ ಮತ್ತು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಸೋಮವಾರ ಮೈಸೂರು, ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಹೇಳಿದೆ.
ಬೆಂಗಳೂರು ನಗರದ ಹವಾಮಾನ ವರದಿ: ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಹಗುರದಿಂದ ಸಾಧಾರಣ ಮಳೆ ಮತ್ತು ಕೆಲವೊಮ್ಮೆ ಭಾರೀ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಕೆಲವು ಸ್ಥಳಗಳಲ್ಲಿ ಬೆಳಗಿನ ಜಾವ ಮಂಜು ಬೀಳಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 23 ಮತ್ತು 19 ಡಿಗ್ರಿ ದಾಖಲಾಗುವ ಸಂಭವವಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಹವಾಮಾನ ಕೇಂದ್ರದ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ಹೇಳಿಕೆ: ''ತಮಿಳುನಾಡು ಮತ್ತು ಪುದುಚೇರಿಯ ಕರಾವಳಿಯಲ್ಲಿ ಸೈಕ್ಲೋನಿಕ್ ಚಂಡಮಾರುತ ಫೆಂಗಾಲ್ನ ಪ್ರಭಾವ ಸ್ಥಿರವಾಗಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಪಶ್ಚಿಮಾಭಿಮುಖವಾಗಿ ಚಲಿಸಿ ಕ್ರಮೇಣ ದುರ್ಬಲಗೊಳ್ಳುವ ಸಾಧ್ಯತೆಯಿದೆ. ಚಂಡಮಾರುತದಿಂದ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಮೇಲೂ ಬೀರಿದೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಲಾಗಿದೆ. ನಿನ್ನೆ ಕೋಲಾರದಲ್ಲಿ ಮತ್ತು ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ 1 ಸೆ.ಮೀ ಮಳೆ ಸುರಿದಿದೆ'' ಎಂದು ಹೇಳಿದ್ದಾರೆ.
ಇದನ್ನೂ ಓದಿ: ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದಲ್ಲೂ ಭಾರಿ ಮಳೆ ಭೀತಿ ; ಎರಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ