ಬೆಂಗಳೂರು: ಕಳೆದ ವರ್ಷ ಅನಾವೃಷ್ಟಿ ಅನುಭವಿಸಿದ್ದ ರಾಜ್ಯದ ಜನತೆಗೆ ಈ ಬಾರಿ ಅತಿವೃಷ್ಟಿ ಕಾಡುತ್ತಿದೆ. ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಮುಖ್ಯವಾಗಿ ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಸಾಕಷ್ಟು ಹಾನಿಯಾಗಿದೆ. ಅಲ್ಲಿನ 5 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಇಂದಿನಿಂದ ನಾಳೆ (ಜು. 22) ಮಧ್ಯಾಹ್ನದವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ 24 ಗಂಟೆಗಳ ಕಾಲ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿ, ಬೀದರ್ ಮತ್ತು ದಕ್ಷಿಣ ಒಳನಾಡಿನ ಕೊಡಗು, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ನಿರಂತರ ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿ.ಮೀ.ವರೆಗೆ ತಲುಪುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ನಿರಂತರ ಗಾಳಿಯ ವೇಗ ಗಂಟೆಗೆ 40ರಿಂದ 50 ಕಿ.ಮೀ. ಇರಲಿದ್ದು, ಅಲ್ಲಿ ಭಾರೀ ಮಳೆ ಸುರಿಯಲಿದೆ. ಬೆಳಗಾವಿ, ಬೀದರ್, ಕಲಬುರಗಿ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಮತ್ತು ನಿರಂತರ ಗಾಳಿ ಬೀಸಲಿದೆ. ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿಯೂ ಅನೇಕ ಕಡೆ ಹಗುರದಿಂದ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಿಲಿಕಾನ್ ಸಿಟಿಯಲ್ಲಿ ಸಾಧಾರಣ ಮಳೆ: ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿ ಕೂಡ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಡಿಗ್ರಿ ಮತ್ತು 21 ಡಿಗ್ರಿ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
''ದಕ್ಷಿಣ ಗುಜರಾತ್-ಉತ್ತರ ಕೇರಳ ಕರಾವಳಿಯುದ್ದಕ್ಕೂ ಸಮುದ್ರದ ತೀರದಲ್ಲಿ ಟ್ರಫ್ ಮುಂದುವರೆಯಲಿದೆ. ಆದ್ದರಿಂದ ಕರಾವಳಿ ಕರ್ನಾಟಕ ಮತ್ತು ಪಕ್ಕದ ಪಶ್ಚಿಮ ಘಟ್ಟಗಳ ಜಿಲ್ಲೆಗಳಲ್ಲಿ ಬಲವಾದ ಗಾಳಿ ಒಮ್ಮುಖವಾಗಿದೆ. ಆದ್ದರಿಂದ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಮುಂದುವರೆದಿದೆ'' ಎಂದು ಬೆಂಗಳೂರು ಹವಾಮಾನ ಕೇಂದ್ರದ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಕುಮಟಾ: ಉಳ್ಳೂರು ಮಠದ ಬಳಿಯೂ ಗುಡ್ಡ ಕುಸಿತ - ಡ್ರೋನ್ ಕ್ಯಾಮೆರಾದಲ್ಲಿ ಭಯಾನಕ ದೃಶ್ಯ ಸೆರೆ - Uttara Kannada Landslide