ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ ಇನ್ನಷ್ಟು ಬಿರುಸುಗೊಂಡಿದೆ. ಈ ಹಿನ್ನೆಲೆಯಲ್ಲಿ ನಾಳೆ ರಾಜ್ಯದ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಸೆಪ್ಟೆಂಬರ್ 24ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ನೀಡಲಾಗಿದೆ. ಇನ್ನು ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿಯಲ್ಲಿ ಕೂಡ ಭಾರಿ ಮಳೆ ಸುರಿಯುವ ಸಂಭವ ಇರುವುದರಿಂದ ಆರೆಂಜ್ ಅಲರ್ಟ್ ಕೊಡಲಾಗಿದೆ. ವಿಜಯಪುರ, ರಾಯಚೂರು, ಗದಗ, ಧಾರವಾಡ, ಹಾವೇರಿ, ಬಳ್ಳಾರಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಲ್ಲಿ ಯೆಲ್ಲೋ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆದಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇದನ್ನೂ ಓದಿ: ಬರದ ನಾಡು ಜಗಳೂರು ಕೆರೆಗೆ ಹರಿದ ತುಂಗಭದ್ರಾ ನದಿ ನೀರು; ಕುಣಿದು ಕುಪ್ಪಳಿಸಿದ ಜನ - Jagalur lake filled