ಬೆಂಗಳೂರು: ಲೋಕಸಭಾ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ನಾಮಪತ್ರ ಸಲ್ಲಿಕೆ ಕೇಂದ್ರಗಳ 100 ಮೀಟರ್ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ.
ಮಾರ್ಚ್ 28ರಿಂದ ಏಪ್ರಿಲ್ 8ರವರೆಗೆ ಚುನಾವಣಾಧಿಕಾರಿ ಕಚೇರಿಗಳಲ್ಲಿ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಹಾಗೂ ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಅಭ್ಯರ್ಥಿಗಳ ಬೆಂಬಲಿಗರು, ಅಭಿಮಾನಿಗಳು ಹಾಗೂ ರಾಜಕೀಯ ಪಕ್ಷಗಳ ಕಾರ್ಯಕರ್ತರು ಅಪಾರ ಪ್ರಮಾಣದಲ್ಲಿ ಜಮಾವಣೆಯಾಗುವ ಸಾಧ್ಯತೆಯಿದೆ.
ಈ ವೇಳೆ ರಸ್ತೆ ತಡೆ, ಪ್ರತಿಭಟನೆ ಮತ್ತು ಮೆರವಣಿಗೆ ನಡೆಯಲಿದ್ದು, ವಾಹನ ಸಂಚಾರದಲ್ಲಿ ವ್ಯತ್ಯಯ ಹಾಗೂ ಶಾಂತಿ-ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೂ ನಿಷೇಧಾಜ್ಞೆ ಹೇರಲಾಗಿದೆ.
ನಿಷೇಧಾಜ್ಞೆ ನಿಯಮದಂತೆ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವಂತಿಲ್ಲ. ಮೆರವಣಿಗೆ, ಸಭೆಗಳನ್ನು ನಡೆಸುವುದು ಮತ್ತು ಧನಿವರ್ಧಕಗಳನ್ನು ಬಳಸುವಂತಿಲ್ಲ. ಶಸ್ತ್ರಾಸ್ತ್ರ, ದೊಣ್ಣೆ, ಕತ್ತಿ, ಗದೆ, ಕಲ್ಲು, ಇಟ್ಟಿಗೆ, ಚಾಕು ಮುಂತಾದ ವಸ್ತುಗಳು ಅಥವಾ ದೈಹಿಕ ಹಿಂಸೆ ಉಂಟುಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ನಾಮಪತ್ರ ಸಲ್ಲಿಕೆಗೂ ಮುನ್ನ ಮನೆ ದೇವರಿಗೆ ಪೂಜೆ ಸಲ್ಲಿಸಿದ ಡಿ.ಕೆ.ಸುರೇಶ್ - D K Suresh