ಬಳ್ಳಾರಿ : ಬಿಮ್ಸ್ ಆಸ್ಪತ್ರೆ ಒಂದಿಲ್ಲೊಂದು ಕಾರಣಕ್ಕೆ ಆಗಾಗ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ವೈದ್ಯರ ನಿರ್ಲಕ್ಷ್ಯಕ್ಕೆ ಕೌಲ್ ಬಜಾರ್ನ ಬಟ್ಟಿ ಏರಿಯಾದ 16 ತಿಂಗಳ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿ ಮಗುವಿನ ಪೋಷಕರು ಮತ್ತು ಕನ್ನಡಪರ ಹೋರಾಟಗಾರರು ಶನಿವಾರ ಆಸ್ಪತ್ರೆಯ ಮುಂದೆ ಧರಣಿ ನಡೆಸಿದರು.
ವೈದ್ಯರು ಆಸ್ಪತ್ರೆಗೆ ಸರಿಯಾದ ಸಮಯಕ್ಕೆ ಬರುತ್ತಿಲ್ಲ, ವಾರದಲ್ಲಿ ಒಂದೇ ಬಾರಿ ಬಂದರೂ ಮಧ್ಯಾಹ್ನದವರೆಗೆ ಕಾರ್ಯ ನಿರ್ವಹಿಸುತ್ತಾರೆ. ಆಸ್ಪತ್ರೆಗೆ ಬಂದ ರೋಗಿಗಳನ್ನು ತಮ್ಮ ಖಾಸಗಿ ಆಸ್ಪತ್ರೆಗೆ ಕಳುಹಿಸುತ್ತಿದ್ದಾರೆ. ಹೆರಿಗೆ ಸಮಯದಲ್ಲಿ ಅನೇಕ ಶಿಶುಗಳು ಮೃತಪಟ್ಟಿವೆ. ಈ ಮಗುವಿನ ಸಾವಿಗೆ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳೇ ನೇರ ಕಾರಣ ಎಂದು ಆರೋಪಿಸಿದರು.
ಈ ಬಗ್ಗೆ ಮೇಲಾಧಿಕಾರಿಗಳು ತನಿಖೆ ನಡೆಸಿ ವೈದ್ಯಾಧಿಕಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಮೃತಪಟ್ಟ ಮಗುವಿನ ಕುಟುಂಬದವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಸ್ಥಳಕ್ಕೆ ಬಂದ ಬಿಮ್ಸ್ ನಿರ್ದೇಶಕ ಗಂಗಾಧರ ಗೌಡ, ಮಗುವಿನ ಮರಣೋತ್ತರ ಪರೀಕ್ಷೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಆದರೆ, ಪೋಷಕರು ಇದಕ್ಕೆ ಒಪ್ಪಲಿಲ್ಲ. ಬಳಿಕ ಪೊಲೀಸರು, ವೈದ್ಯಾಧಿಕಾರಿಗಳ ಮಾತುಕತೆ ಬಳಿಕ ಪೋಷಕರು ಪ್ರತಿಭಟನೆಯನ್ನು ಕೊನೆಗೊಳಿಸಿದರು.
ಈ ಕುರಿತು ಪ್ರತಿಕ್ರಿಯಿಸಿರುವ ಬಿಮ್ಸ್ ನಿರ್ದೇಶಕ ಗಂಗಾಧರ ಗೌಡ, ''ತೀವ್ರ ಜ್ವರ, ಹೊಟ್ಟೆ ಊತದ ಸಮಸ್ಯೆಯಿಂದ ಮಗು ಸಾವನ್ನಪ್ಪಿದೆ. ಮೂರು ದಿನಗಳ ಹಿಂದೆ ಬಿಮ್ಸ್‌ಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿತ್ತು. ಇಂದು ಚಿಕಿತ್ಸೆ ಫಲಿಸದೇ ಮಗು ಮೃತಪಟ್ಟಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಸಿಬ್ಬಂದಿಯ ನಿರ್ಲಕ್ಷ್ಯ ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು'' ಎಂದು ತಿಳಿಸಿದರು.
ಇದನ್ನೂ ಓದಿ: ಬಿಮ್ಸ್ ಟ್ರಾಮಾ ಕೇರ್ ಸೆಂಟರ್ನಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಚಿಕಿತ್ಸೆ; ಆಸ್ಪತ್ರೆ ನಿರ್ದೇಶಕರು ಹೇಳಿದ್ದೇನು?
ಇದನ್ನೂ ಓದಿ: ಬಳ್ಳಾರಿಯಲ್ಲಿ ಸಿಜೇರಿಯನ್ ಹೆರಿಗೆಯಾಗಿದ್ದ ಮತ್ತೋರ್ವ ಬಾಣಂತಿ ಸಾವು